ಡಿ.23ರಿಂದ ಎರಡು ದಿನಗಳ ಕಾಲ ಅಖಿಲ ಭಾರತ ವೀರಶೈವ ಮಹಾಸಭಾದ ಅಧಿವೇಶನ
ಬೆಂಗಳೂರು: ಅಖಿಲ ಭಾರತ ವೀರಶೈವ ಮಹಾಸಭಾದ 24ನೇ ಮಹಾ ಅಧಿವೇಶನ ಸಮಾರಂಭವನ್ನು ಡಿ.23 ಮತ್ತು ಡಿ.24ರಂದು ದಾವಣಗೆರೆಯ ಎಂಬಿಎ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಭಾದ ಬೆಂಗಳೂರು ಜಿಲ್ಲಾಧ್ಯಕ್ಷ ಎಸ್.ಗುರುಸ್ವಾಮಿ ತಿಳಿಸಿದ್ದಾರೆ.
ಸೋಮವಾರ ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಈ ಮಹಾ ಅಧಿವೇಶನದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಸಮುದಾಯದ ಶಾಸಕರು, ಸಂಸದರು, ಸಾಹಿತಿಗಳು ಸೇರಿದಂತೆ ಅನೇಕ ಗಣ್ಯರು ಅಧಿವೇಶನದಲ್ಲಿ ಭಾಗವಹಿಸಲಿದ್ದಾರೆ. ಅಧಿವೇಶನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ, ವಿಚಾರ ಗೋಷ್ಠಿಗಳನ್ನು ಹಮ್ಮಿಕೊಳ್ಳಲಾಗಿದ್ದು, ಸ್ಮರಣ ಸಂಚಿಕೆಯನ್ನೂ ಬಿಡುಗಡೆ ಮಾಡಲಾಗುತ್ತದೆ ಎಂದರು.
ಸುಮಾರು ಎಂಟು ವರ್ಷಗಳಷ್ಟು ಹಳೆಯದಾದ, ಅನೇಕ ಲೋಪದೋಷಗಳಿಂದ ಕೂಡಿರುವ, ಬಿಡುಗಡೆಗೂ ಮುನ್ನವೇ ಬಹಿರಂಗಗೊಂಡಿರುವ ಕಾಂತರಾಜು ಆಯೋಗದ ವರದಿಯನ್ನು ತಿರಸ್ಕರಿಸುವುದು ಹಾಗೂ ಯಾವುದೇ ಕಾರಣಕ್ಕೂ ವರದಿಯನ್ನು ಸ್ವೀಕರಿಸದಂತೆ ರಾಜ್ಯ ಸರಕಾರವನ್ನು ಅದಿವೇಶನದಲ್ಲಿ ಒತ್ತಾಯಿಸಲಾಗುವುದು ಎಂದು ಅವರು ಹೇಳಿದರು.
ಪ್ರಸ್ತುತ ತಂತ್ರಜ್ಞಾನಗಳನ್ನು ಬಳಸಿಕೊಂಡು, ಲೋಪ-ದೋಷಗಳನ್ನು ಸರಿಪಡಿಸಕೊಂಡು ರಾಜ್ಯ ಸರಕಾರವು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ನಡೆಸುವುದಾದರೆ ಸಂಪೂರ್ಣ ಸಹಕಾರ ನೀಡುವುದು ಸೇರಿದಂತೆ ಇತರೆ ನಿರ್ಣಯಗಳನ್ನು ಅಧಿವೇಶನದಲ್ಲಿ ಕೈಗೊಳ್ಳಲಾಗುವುದು ಎಂದು ಎಸ್. ಗುರುಸ್ವಾಮಿ ಹೇಳಿದರು.
ವೀರಶೈವ-ಲಿಂಗಾಯತ ಸಮುದಾಯವನ್ನು ಕೇಂದ್ರ ಹಿಂದುಳೀದ ವರ್ಗಗಳ(ಓಬಿಸಿ) ಪಟ್ಟಿಗೆ ಸೇರಿಸುವಂತೆ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡುವಂತೆ ರಾಜ್ಯ ಸರಕಾರವನ್ನು ಒತ್ತಾಯಿಸಲಾಗುವುದು ಎಂದು ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಹಾಸಭಾದ ಬೆಂಗಳೂರು ಜಿಲ್ಲಾ ಉಪಾಧ್ಯಕ್ಷ ಜೆ.ಸಿ. ಪುರ ಜಗದೀಶ್, ಸುನೀಲ್ ಕೆ.ಎಂ., ಸುಮಂಗಲ ಜಯಪಾಲ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.