×
Ad

ಎಲ್ಲಾ ಅಧಿಕಾರಿಗಳು ಜಾತ್ಯಾತೀತವಾಗಿ ಕಾರ್ಯ ನಿರ್ವಹಿಸಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬಡವರಿಗೆ ಸಂವಿಧಾನ ನೀಡಿರುವ ಹಕ್ಕುಗಳನ್ನು ರಕ್ಷಿಸಲು ಪ್ರಯತ್ನಿಸಿ ಅಧಿಕಾರಿಗಳಿಗೆ ಸಿಎಂ ಕಿವಿಮಾತು

Update: 2026-01-02 14:32 IST

ಬೆಂಗಳೂರು : ಎಲ್ಲಾ ಅಧಿಕಾರಿಗಳು ಜಾತ್ಯಾತೀತ ದೃಷ್ಟಿಕೋನದಿಂದ ಕಾರ್ಯ ನಿರ್ವಹಿಸಬೇಕು. ಆಗ ಮಾತ್ರ ಸಮಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇಂದು ವಿಧಾನಸೌಧದ ಸಭಾಂಗಣದಲ್ಲಿ ಕೆಎಎಸ್ ಅಧಿಕಾರಿಗಳ ಸಂಘದ ಕ್ಯಾಲೆಂಡರ್ ಹಾಗೂ ದಿನಚರಿಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ರಾಜ್ಯದಲ್ಲಿನ ಬಡವರು, ದಲಿತರು ಹಾಗೂ ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗೆ ವಿಶೇಷ ಕಾಳಜಿಯೊಂದಿಗೆ ಹಾಗೂ ಹೊಸ ಉತ್ಸಾಹದಿಂದ ಅಧಿಕಾರಿಗಳು ಕಾರ್ಯನಿರ್ವಹಿಸಬೇಕೆಂದು ಕರೆ ನೀಡಿದರು.

ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ರಾಜಕೀಯ ಸ್ವಾತಂತ್ರ್ಯ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯದ ಮೇಲೆ ನಿಂತಿದೆ ಎಂದು ಹೇಳಿದ್ದಾರೆ. ರಾಜಕೀಯ ಸ್ವಾತಂತ್ರ್ಯ ಯಶಸ್ವಿಯಾಗಬೇಕಾದರೆ ಎಲ್ಲರಿಗೂ ಸಾಮಾಜಿಕ ಹಾಗೂ ಆರ್ಥಿಕ ಸ್ವಾತಂತ್ರ್ಯ ದೊರೆಯಬೇಕು. ಇಲ್ಲವಾದರೆ ಅಸಮಾನತೆ ನಿರ್ಮೂಲನೆ ಸಾಧ್ಯವಿಲ್ಲ. ಅಸಮಾನತೆ ಹೋಗದೆ ಸಮಾಜದಲ್ಲಿ ಶಾಂತಿ ಹಾಗೂ ನೆಮ್ಮದಿ ನೆಲೆಸುವುದೂ ಅಸಾಧ್ಯ ಎಂದು ಅವರು ಹೇಳಿದರು.

ಸಮಸಮಾಜಕ್ಕೆ ಸಾಮಾಜಿಕ, ಆರ್ಥಿಕ ಸ್ವಾತಂತ್ರ್ಯ ಅಗತ್ಯ :

ಎಲ್ಲರಿಗೂ ಸಮಾನ ಅವಕಾಶ ದೊರೆತು ಸಮಾಜದ ಮುಖ್ಯವಾಹಿನಿಗೆ ಬಂದಾಗ ಮಾತ್ರ ಸಮಾನತೆ ಸಾಧ್ಯ. ನಮ್ಮ ಸಮಾಜ ಇನ್ನೂ ಜಾತಿ ವ್ಯವಸ್ಥೆಯಿಂದ ಕೂಡಿದೆ. ಜಾತಿ ಮತ್ತು ವರ್ಗ ವ್ಯವಸ್ಥೆ ನಿರ್ಮೂಲನೆಯಾಗಬೇಕಾದರೆ ಸಾಮಾಜಿಕ ಹಾಗೂ ಆರ್ಥಿಕ ಸ್ವಾತಂತ್ರ್ಯ ಸಿಗಲೇಬೇಕು ಎಂದು ಸಿಎಂ ಅಭಿಪ್ರಾಯಪಟ್ಟರು.

ಸ್ವಜಾತಿ ಪಕ್ಷಪಾತ ಬೇಡ – ಅಧಿಕಾರಿಗಳಿಗೆ ಸಿಎಂ ಸೂಚನೆ :

ಸ್ವಾತಂತ್ರ್ಯ ದೊರೆತು ಏಳು ದಶಕಗಳಾದರೂ ಜಾತಿ ವ್ಯವಸ್ಥೆ ಸಂಪೂರ್ಣವಾಗಿ ಅಳಿಯಿಲ್ಲ. ಎಲ್ಲಾ ಅಧಿಕಾರಿಗಳು ಜಾತ್ಯಾತೀತವಾಗಿ ಕಾರ್ಯನಿರ್ವಹಿಸಬೇಕು. ಯಾವುದೇ ಕಾರಣಕ್ಕೂ ಸ್ವಜಾತಿ ಪಕ್ಷಪಾತ ಮಾಡಬಾರದು. ನಮ್ಮ ದೃಷ್ಟಿಕೋನ ಸಂಪೂರ್ಣವಾಗಿ ಜಾತ್ಯಾತೀತವಾಗಿರಬೇಕು. ಆಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿಗಳು ಸೂಚಿಸಿದರು.

ಬಡವರ ಒಳಿತಿಗಾಗಿ ಕರ್ತವ್ಯ ನಿರ್ವಹಿಸುವಾಗ ಅಧಿಕಾರಿಗಳು ಪ್ರಾಮಾಣಿಕರಾಗಿರಬೇಕು. ವ್ಯವಸ್ಥೆಯನ್ನು ಸರಿಪಡಿಸುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು. ತಹಶೀಲ್ದಾರ್, ಸಹಾಯಕ ಆಯುಕ್ತರು ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿಯಲ್ಲಿ ಎಲ್ಲರಿಗೂ ನ್ಯಾಯ ಒದಗಿಸಲು ಶ್ರಮಿಸಬೇಕು. ಬಡವರ ಬಗ್ಗೆ ಕರುಣೆಯಲ್ಲ, ಸಂವಿಧಾನ ನೀಡಿರುವ ಹಕ್ಕುಗಳ ರಕ್ಷಣೆಯೇ ಮುಖ್ಯ ಎಂದು ಅವರು ಹೇಳಿದರು.

ಅಧಿಕಾರಿಗಳ ಬೇಡಿಕೆ ಈಡೇರಿಸುವ ಭರವಸೆ :

ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡ ಪೂರ್ಣಗೊಳಿಸಲು ಹೆಚ್ಚುವರಿ ಅನುದಾನ ಒದಗಿಸಲಾಗುವುದು. ಪದೋನ್ನತಿ ಸೇರಿದಂತೆ ಸಂಘದ ವಿವಿಧ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಪ್ರಯತ್ನಿಸಲಿದೆ ಎಂದು ಮುಖ್ಯಮಂತ್ರಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸಚಿವರಾದ ಈಶ್ವರ ಖಂಡ್ರೆ, ಭೈರತಿ ಸುರೇಶ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಾನೂನು ಸಲಹೆಗಾರ ಪೊನ್ನಣ್ಣ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News