ಪ್ರಧಾನಿ ಮೋದಿ ವಿರುದ್ಧ ಹೇಳಿಕೆ ಆರೋಪ; ಉದ್ಯಮಿ ವಿರುದ್ಧದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್
ಸಾಂದರ್ಭಿಕ ಚಿತ್ರ (AI)
ಬೆಂಗಳೂರು: ವಾಟ್ಸ್‌ಆ್ಯಪ್ ಗ್ರೂಪ್‌ನಲ್ಲಿ ಬಂದ ವಿಡಿಯೋ ನೋಡಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹೇಳಿಕೆ ನೀಡಿದ ಆರೋಪದಡಿ ಬೆಳಗಾವಿ ಜಿಲ್ಲೆ ಅಥಣಿಯ ಉದ್ಯಮಿಯೊಬ್ಬರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಮತ್ತು ಅದಕ್ಕೆ ಸಂಬಂಧಿಸಿದ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆಯನ್ನು ಹೈಕೋರ್ಟ್ ರದ್ದುಪಡಿಸಿದೆ.
ಪ್ರಕರಣ ಸಂಬಂಧ ದಾಖಲಾಗಿದ್ದ ಎಫ್‌ಐಆರ್ ಹಾಗೂ ಅಥಣಿ ಕಿರಿಯ ವಿಭಾಗದ ಪ್ರಧಾನ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‌ಸಿ ಕೋರ್ಟ್‌ನ ನ್ಯಾಯಿಕ ಪ್ರಕ್ರಿಯೆ ರದ್ದು ಕೋರಿ ಇಮ್ತಿಯಾಝ್ ನೂರುದ್ದೀನ್ ಚಿಂಚಲಿ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಟಿ. ವೆಂಕಟೇಶ್ ನಾಯಕ್ ಅವರಿದ್ದ ಏಕಸದಸ್ಯ ನ್ಯಾಯಪೀಠ (ಧಾರವಾಡ) ಈ ಆದೇಶ ಮಾಡಿದೆ.
ಘಟನೆ ನಡೆದಿರುವುದು 2026ರ ಜನವರಿ 7ರಂದು. ಆದರೆ, ಜನವರಿ 11ರಂದು ದೂರು ದಾಖಲಿಸಲಾಗಿದೆ. ನಾಲ್ಕು ದಿನಗಳ ವಿಳಂಬಕ್ಕೆ ಯಾವುದೇ ಸೂಕ್ತ ಮತ್ತು ಸಮಂಜಸ ಕಾರಣ ನೀಡಿಲ್ಲ. ಅರ್ಜಿದಾರರು ದೂರುದಾರರನ್ನು ಉದ್ದೇಶಪೂರ್ವಕವಾಗಿ ನಿಂದಿಸಿದ್ದಾರೆ ಶಾಂತಿ ಭಂಗ ಉಂಟುಮಾಡಲು ಪ್ರಚೋದಿಸಿದ್ದಾರೆ ಎಂಬುದಕ್ಕೆ ಯಾವುದೇ ಸೂಕ್ತ ಆಧಾರಗಳಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ನ್ಯಾಯಪೀಠ, ಅರ್ಜಿದಾರರ ವಿರುದ್ಧದ ಪ್ರಕರಣ ರದ್ದುಪಡಿಸಿದೆ.