×
Ad

ಸುತ್ತೋಲೆಗಳ ಮೂಲಕ ಇಲಾಖೆಗಳನ್ನು ವಿಲೀನಗೊಳಿಸುವುದು ಕಾನೂನುಬಾಹಿರ: ನ್ಯಾ. ಗೋಪಾಲಗೌಡ

Update: 2023-12-01 21:22 IST

ಬೆಂಗಳೂರು: ಯಾವುದೇ ಇಲಾಖೆಯಲ್ಲಿ ಕಾಯ್ದೆಗಳು ಇರುವಾಗ ಸುತ್ತೊಲೆಗಳ ಮುಖಾಂತರ ಇಲಾಖೆಗಳನ್ನು ವಿಲೀನಗೊಳಿಸುವುದು ಕಾನೂನು ಬಾಹಿರ ಎಂದು ಸುಪ್ರೀಂ ಕೋರ್ಟ್‍ನ ವಿಶ್ರಾಂತ ನ್ಯಾಯಮೂರ್ತಿ ಗೋಪಾಲಗೌಡ ತಿಳಿಸಿದ್ದಾರೆ.

ಶುಕ್ರವಾರ ನಗರದ ಫ್ರೀಡಂ ಪಾರ್ಕ್‍ನಲ್ಲಿ ಪ್ರಾಂಶುಪಾಲರ ಸಂಘ, ಉಪನ್ಯಾಸಕರ ಸಂಘ ಮತ್ತು ಬೋಧಕೇತರ ನೌಕರರ ಸಂಘಗಳ ಒಕ್ಕೂಟಗಳು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಳಿವಿಗಾಗಿ ಒತ್ತಾಯಿಸಿ ನಡೆಸಿದ ಧರಣಿ ಸತ್ಯಾಗ್ರಹದಲ್ಲಿ ಮಾತನಾಡಿದ ಅವರು, ‘ಈ ಹೋರಾಟವನ್ನು ಸರಕಾರ ಗಂಭೀರವಾಗಿ ಪರಿಗಣಿಸಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಹಂತದ ಉಪನಿರ್ದೇಶಕರ ಕಚೇರಿಯ ದೈನಂದಿನ ಕಾರ್ಯನಿರ್ವಹಣೆಯನ್ನು ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಆಯಾ ಇಲಾಖೆಯ ಶಿಕ್ಷಣ ಇಲಾಖೆ ಅಪರ ಆಯುಕ್ತರ ಮೇಲುಸ್ತುವಾರಿ ಒಳಪಡಿಸಿ ಹೊರಡಿಸಿರುವ ಸುತ್ತೋಲೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಸಂಸ್ಕತಿ ಚಿಂತಕ ಡಾ.ಬಂಜಗೆರೆ ಜಯಪ್ರಕಾಶ್ ಮಾತನಾಡಿ, ‘ಸಿದ್ದರಾಮಯ್ಯನವರ ನೇತೃತ್ವದ ಸರಕಾರ ಈಗಾಗಲೇ ಸಂಪುಟದ ಸಭೆಯಲ್ಲಿ ರಾಜ್ಯದ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚಿಸಿರುವುದರಿಂದ ಇಲಾಖೆಯ ಅಧಿಕಾರಿಗಳು ಎನ್‍ಇಪಿಯ ಭಾಗವಾಗಿರುವ ಅಂಶಗಳನ್ನು ಜಾರಿಗೆ ತರುವುದನ್ನು ನಿಲ್ಲಿಸಿ, ಪ್ರಸ್ತುತ ಸರಕಾರದ ನೀತಿಗಳಿಗನುಸಾರವಾಗಿ ಕಾರ್ಯನಿರ್ವಹಿಸಬೇಕು. ಅಧಿಕಾರಿಗಳು ತಮಗೆ ಬಂದಂತೆ ಸುತ್ತೋಲೆ ಹೊರಡಿಸಿದ್ದಾರೆ. ಅದನ್ನು ಕೂಡಲೇ ವಾಪಸ್ ಪಡೆಯಬೇಕೆಂದು ಆಗ್ರಹಿಸಿದರು.

ಪ್ರಾಂಶುಪಾಲರ ಸಂಘದ ಅಧ್ಯಕ್ಷ ಕೆ.ಟಿ.ಶ್ರೀಕಂಠೇಗೌಡರು, ಪರಿಷತ್ ಸದಸ್ಯರಾದ ಎಸ್.ಎಲ್. ಬೋಜೇಗೌಡ, ಮರಿತಿಬ್ಬೇಗೌಡ, ಮಾಜಿ ಸದಸ್ಯರಾದ ಶರಣಪ್ಪ ಮಟ್ಟೂರ್, ಅರುಣ್ ಶಾಹಪೂರ್, ಎ.ಪಿ.ರಂಗನಾಥ್ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಸಾವಿರಾರು ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ಬೋಧಕೇತರ ನೌಕರರು ಧರಣಿಯಲ್ಲಿ ಪಾಲ್ಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News