ಪ್ರಚೋದನಾಕಾರಿ ಭಾಷಣ ಆರೋಪ; ಅನಂತಕುಮಾರ್ ಹೆಗಡೆ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆ
Update: 2026-06-19 23:16 IST
ಬೆಂಗಳೂರು : ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಲ್ಲಿ ಮಾಜಿ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಮದ್ದೂರು ಠಾಣೆ ಪೊಲೀಸರು ಮಾರ್ಚ್ 23ರಂದು ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ದೂರು ಹಾಗೂ ಅದರ ಸಂಬಂಧ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆ ರದ್ದು ಕೋರಿ ಅನಂತಕುಮಾರ್ ಹೆಗಡೆ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.
ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿ ಆದೇಶಿಸಿತು. ಅಲ್ಲದೆ, ಅರ್ಜಿ ಸಂಬಂಧ ಮದ್ದೂರು ಠಾಣೆ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಜುಲೈ 10ಕ್ಕೆ ಮುಂದೂಡಿತು.