×
Ad

ಅರಣ್ಯ ಇಲಾಖೆಗೆ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ರಾಯಭಾರಿ : ಸಚಿವ ಈಶ್ವರ್‌ ಖಂಡ್ರೆ

Update: 2025-05-27 17:28 IST

ಅನಿಲ್‌ ಕುಂಬ್ಳೆ/ಈಶ್ವರ್‌ ಖಂಡ್ರೆ

ಬೆಂಗಳೂರು : ಖ್ಯಾತ ಕ್ರೀಡಾಪಟು, ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರನ್ನು ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನಾಮ ನಿರ್ದೇಶನ ಮಾಡಲಾಗಿದ್ದು, ಯಾವುದೇ ಸಂಭಾವನೆ ಪಡೆಯುತ್ತಿಲ್ಲ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಪ್ರಕಟಿಸಿದ್ದಾರೆ.

ಮಂಗಳವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಇರುವ ಅನಿಲ್ ಕುಂಬ್ಳೆ ವಿಶ್ವದ್ಯಂತ ಖ್ಯಾತಿ ಹೊಂದಿದ್ದು, ಅರಣ್ಯ ಸಂರಕ್ಷಣೆ, ಅರಣ್ಯ ಸಂವರ್ಧನೆ, ವೃಕ್ಷ ಸಂರಕ್ಷಣೆ, ವನ್ಯಜೀವಿ ಸಂರಕ್ಷಣೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಿದ್ದಾರೆ ಎಂದರು.

ಅನಿಲ್ ಕುಂಬ್ಳೆ ಅವರಿಗೆ ವನ್ಯಜೀವಿಗಳ ಬಗ್ಗೆ ಅಪಾರ ಕಾಳಜಿ ಇದೆ. ಅರಣ್ಯದ ಬಗ್ಗೆ ಪ್ರೀತಿ ಇದೆ. ಹೀಗಾಗಿ ಅವರು ಯಾವುದೇ ಸಂಭಾವನೆ ಪಡೆಯದೆ ರಾಯಭಾರಿ ಆಗಲು ಸಮ್ಮತಿಸಿದ್ದಾರೆ ಎಂದು ಈಶ್ವರ್‌ ಖಂಡ್ರೆ ಸ್ಪಷ್ಟಪಡಿಸಿದರು.

ಅದೇ ರೀತಿ, ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಪರಿಣಾಮವನ್ನು ಜಗತ್ತೇ ಎದುರಿಸುತ್ತಿದ್ದು, ಈ ಕಾಲಘಟ್ಟದಲ್ಲಿ ಹಸಿರು ಹೊದಿಕೆಯ ಹೆಚ್ಚಳ, ಅರಣ್ಯ ಸಂರಕ್ಷಣೆ ಮತ್ತು ನಿರ್ವಹಣೆ ಇಲಾಖೆಯ ಜವಾಬ್ದಾರಿಯಾಗಿದ್ದು, ಕಳೆದ 2 ವರ್ಷಗಳಲ್ಲಿ ಸುಮಾರು 8848 ವನಮಹೋತ್ಸವ ನಡೆಸಲಾಗಿದೆ ಎಂದರು.

ಅರಣ್ಯ ಪ್ರದೇಶ, ರಸ್ತೆಬದಿ ಮತ್ತು ಸರಕಾರಿ ಜಾಗದಲ್ಲಿ ಸುಮಾರು 8.5 ಕೋಟಿ ಸಸಿಗಳನ್ನು ನೆಟ್ಟು, ಪೋಷಿಸಲಾಗಿದೆ. 2023-24 ಮತ್ತು 2024-25ರ ಸಾಲಿನಲ್ಲಿ ಒಟ್ಟು 12,0975 ಹೆಕ್ಟೇರ್ ಪ್ರದೇಶದಲ್ಲಿ ನೆಡುತೋಪು, 25 ಹೊಸ ವೃಕ್ಷೋದ್ಯಾನ ಮತ್ತು 35 ದೇವರ ಕಾಡು ನಿರ್ಮಾಣ ಮಾಡಲಾಗಿದೆ ಎಂದು ಅವರು ವಿವರಿಸಿದರು.

ಹಾಗೇ ಕಳೆದ 2 ವರ್ಷದಲ್ಲಿ ಕೃಷಿಕರಿಗೆ ತಮ್ಮ ಜಮೀನಿನಲ್ಲಿ ನಾಟಿ ಮಾಡಲು ಮತ್ತು ಇತರ ಜಮೀನಿನಲ್ಲಿ ನೆಡಲು ಒಟ್ಟಾರೆ 3.70 ಕೋಟಿ ಸಸಿಗಳನ್ನು ವಿತರಣೆ ಮಾಡಲಾಗಿದೆ ಎಂದೂ ಈಶ್ವರ್‌ ಖಂಡ್ರೆ ಉಲ್ಲೇಖಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅಜುಂ ಪರ್ವೇಝ್, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥೆ ಮೀನಾಕ್ಷಿ ನೇಗಿ ಸೇರಿದಂತೆ ಪ್ರಮುಖರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News