×
Ad

ಸಿಎಂ ಸಿದ್ದರಾಮಯ್ಯಗೆ ನಿಂದನೆ ಪ್ರಕರಣ : ರಾಘವೇಂದ್ರಸ್ವಾಮಿ ಮಠದ ಅರ್ಚಕನ ಬಂಧನ

Update: 2025-08-30 20:28 IST

ಬೆಂಗಳೂರು, ಆ.30 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವಾಚ್ಯವಾಗಿ ನಿಂದಿಸಿದ್ದ ಪ್ರಕರಣದಡಿ ಬೆಂಗಳೂರಿನ ಕೆಂಗೇರಿಯಲ್ಲಿರುವ ರಾಘವೇಂದ್ರ ಸ್ವಾಮಿ ಮಠದ ಅರ್ಚಕ ಗುರುರಾಜ್‌ನನ್ನು ಇಲ್ಲಿನ ಹೈಗ್ರೌಂಡ್ಸ್ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಈ ಸಂಬಂಧ ಕಾಂಗ್ರೆಸ್ ಮುಖಂಡ ಕುಶಾಲ್ ಅರೆವೇಗೌಡ ಎಂಬವರು ನೀಡಿದ ದೂರಿನನ್ವಯ ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಅರ್ಚಕ ಗುರುರಾಜ್‌ನನ್ನು ಬಂಧಿಸಿ ಕ್ರಮ ಜರುಗಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇತ್ತೀಚೆಗೆ, ಖಾಸಗಿ ಸುದ್ದಿವಾಹಿನಿಯೊಂದಿಗೆ ಮಾತನಾಡಿದ್ದ ಅರ್ಚಕ ಗುರುರಾಜ್, ದಸರಾ ಉದ್ಘಾಟನೆಗೆ ಹಿರಿಯ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದ್ದಕ್ಕಾಗಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ವೇಳೆ, ಅವಾಚ್ಯ ಶಬ್ದಗಳನ್ನು ಬಳಸಿ ಸಿದ್ದರಾಮಯ್ಯ ಅವರಿಗೆ ಅವಮಾನಿಸಿದ್ದರು. ಅವರ ನಿಂದನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಅರ್ಚಕ ಗುರುರಾಜ್ ಅವರ ಬಂಧನದ ಬೆನ್ನಲ್ಲೇ, ರಾಘವೇಂದ್ರ ಮಠದ ಕಾರ್ಯದರ್ಶಿ ಜೆ.ಎಸ್.ಭಾರದ್ವಾಜ್ ಅವರು ಪತ್ರಿಕಾ ಪ್ರಕಟನೆ ಬಿಡುಗಡೆ ಮಾಡಿದ್ದು, “ಅರ್ಚಕ ಗುರುರಾಜ್ ಹೇಳಿಕೆಗೂ ರಾಘವೇಂದ್ರಸ್ವಾಮಿ ಮಠಕ್ಕೂ ಯಾವುದೇ ಸಂಬಂಧವಿಲ್ಲ. ಅವರ ಹೇಳಿಕೆಯನ್ನು ಮಠದ ಆಡಳಿತ ಮಂಡಳಿ ತೀವ್ರವಾಗಿ ಖಂಡಿಸುತ್ತದೆ. ಅಲ್ಲದೆ, ಅವರನ್ನು ಅರ್ಚಕ ಸ್ಥಾನದಿಂದ ಅಮಾನತುಗೊಳಿಸಲಾಗಿದೆ” ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News