ಬೆಂಗಳೂರು : ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರಕಾರ ಸಿಹಿಸುದ್ದಿ ನೀಡಿದ್ದು, ಅವರ ಮಾಸಿಕ ಗೌರವಧನವನ್ನು 2,000 ರೂ. ಹೆಚ್ಚಿಸಲು ನಿರ್ಧರಿಸಿದೆ. 2027ರ ಜನವರಿ 1ರಿಂದ ಈ ಹೆಚ್ಚಳ ಜಾರಿಗೆ ಬರಲಿದ್ದು, ಅಗತ್ಯ ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಶೀಘ್ರ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಕಚೇರಿ ಸೂಚನೆ ನೀಡಿದೆ.

ನವೆಂಬರ್ 28ರಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಆಶಾ ಕಾರ್ಯಕರ್ತೆಯರ ಪ್ರತಿನಿಧಿಗಳು ಸಭೆ ನಡೆಸಿ, ತಮ್ಮ ಬೇಡಿಕೆಗಳ ಕುರಿತು ಚರ್ಚಿಸಿದ್ದರು. ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರ ಮಾಸಿಕ ಗೌರವಧನವನ್ನು 2,000 ರೂ. ಹೆಚ್ಚಿಸಲು ನಿರ್ಧರಿಸಲಾಗಿತ್ತು.

ಈ ಹೆಚ್ಚಳವನ್ನು ಯಾವ ದಿನಾಂಕದಿಂದ ಜಾರಿಗೆ ತರಲಾಗುತ್ತದೆ ಎಂಬ ಬಗ್ಗೆ ಆಶಾ ಕಾರ್ಯಕರ್ತೆಯರ ಪ್ರತಿನಿಧಿಗಳು ಮನವಿ ಸಲ್ಲಿಸಿದ್ದರು. ಇದನ್ನು ಸರ್ಕಾರ ಸಕಾರಾತ್ಮಕವಾಗಿ ಪರಿಗಣಿಸಿದ್ದು, 2027ರ ಜನವರಿ 1ರಿಂದ ಹೆಚ್ಚಳ ಜಾರಿಗೆ ತರಲು ನಿರ್ಧರಿಸಿದೆ.

ಈ ನಿರ್ಧಾರಕ್ಕೆ ಸಂತಸ ವ್ಯಕ್ತಪಡಿಸಿರುವ ಆಶಾ ಕಾರ್ಯಕರ್ತೆಯರ ಪ್ರತಿನಿಧಿಗಳು ಮುಖ್ಯಮಂತ್ರಿಯವರಿಗೆ ಧನ್ಯವಾದ ಸಲ್ಲಿಸಿದ್ದು, ತಮ್ಮ ಪ್ರತಿಭಟನೆಯನ್ನು ಹಿಂಪಡೆಯಲು ಒಪ್ಪಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿಯ ಕಾರ್ಯದರ್ಶಿ ಎಸ್.ಎಸ್. ನಕುಲ್ ಅವರು ಹೊರಡಿಸಿರುವ ಅಧಿಕೃತ ಪತ್ರದಲ್ಲಿ ತಿಳಿಸಲಾಗಿದೆ.

ಈ ಸಂಬಂಧ ನವೆಂಬರ್ 29ರಂದು ಹೊರಡಿಸಿರುವ ಪತ್ರದಲ್ಲಿ, ಜನವರಿ 1ರಿಂದ ಆಶಾ ಕಾರ್ಯಕರ್ತೆಯರ ಮಾಸಿಕ ಗೌರವಧನವನ್ನು 2,000 ರೂ. ಹೆಚ್ಚಿಸುವ ಕುರಿತು ಅಗತ್ಯ ಪ್ರಕ್ರಿಯೆಗಳನ್ನು ಆದಷ್ಟು ಬೇಗ ಪ್ರಾರಂಭಿಸುವಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ತಲ್ಹತ್ ವಳಾಲ್

ಉಪಸಂಪಾದಕ

ತಲ್ಹತ್ ವಳಾಲ್ ಅವರು ಮಂಗಳೂರು ವಿಶ್ವವಿದ್ಯಾಲಯದಿಂದ ಇತಿಹಾಸದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, 2023ರಿಂದ ವಾರ್ತಾಭಾರತಿ ಡಿಜಿಟಲ್‌ನಲ್ಲಿ ಉಪಸಂಪಾದಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.