ಬೆಂಗಳೂರು : ಮಾಸಿಕ ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಫ್ರೀಡಂಪಾರ್ಕ್‍ನಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ 12ನೇ ದಿನಕ್ಕೆ ಕಾಲಿಟ್ಟಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ರೊಂದಿಗೆ ನಡೆದ ಸಂಧಾನ ಮಾತುಕತೆಯಲ್ಲಿ ಹೆಚ್ಚುವರಿ 2 ಸಾವಿರ ರೂ. ಗೌರವಧನ ನೀಡಲು ಸರಕಾರ ಒಪ್ಪಿಗೆ ಸೂಚಿಸಿದ್ದರೂ, ಲಿಖಿತ ಭರವಸೆ ನೀಡುವವರೆಗೆ ಹೋರಾಟ ಕೈಬಿಡುವುದಿಲ್ಲ ಎಂದು ಕಾರ್ಯಕರ್ತೆಯರು ಪಟ್ಟು ಹಿಡಿದಿದ್ದಾರೆ.

ಶನಿವಾರ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾ ದಲ್ಲಿ ಆಶಾ ಕಾರ್ಯಕರ್ತೆಯರ ನಿಯೋಗದೊಂದಿಗೆ ಮಾತುಕತೆ ನಡೆಸಿದ ಬಳಿಕ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪ್ರಸ್ತುತ ರಾಜ್ಯ ಸರಕಾರ 5 ಸಾವಿರ ರೂ. ಹಾಗೂ ಕೇಂದ್ರ ಸರಕಾರ 2 ಸಾವಿರ ರೂ. ಗೌರವಧನ ನೀಡುತ್ತಿದ್ದು, ಕಾರ್ಯನಿರ್ವಹಣೆ ಆಧಾರದಲ್ಲಿ ಸರಾಸರಿ 2 ಸಾವಿರ ರೂ. ಪ್ರೋತ್ಸಾಹಧನ ದೊರೆಯುತ್ತಿದೆ ಎಂದು ಹೇಳಿದ್ದಾರೆ.

ಮೂರು ವರ್ಷಗಳಿಂದ ಗೌರವಧನ ಹೆಚ್ಚಳ ಮಾಡಿಲ್ಲ ಎಂಬುದು ಆಶಾ ಕಾರ್ಯಕರ್ತೆಯರ ಪ್ರಮುಖ ಅಳಲಾಗಿತ್ತು. ಇದೀಗ ಪ್ರಸ್ತುತ ನೀಡುತ್ತಿರುವ ಗೌರವಧನಕ್ಕೆ ಹೆಚ್ಚುವರಿಯಾಗಿ 2 ಸಾವಿರ ರೂ. ನೀಡಲು ಸರಕಾರ ನಿರ್ಧರಿಸಿದೆ. 2027ರ ಜ.1ರಿಂದ ಇದು ಜಾರಿಗೆ ಬರಲಿದ್ದು, ಮುಂದಿನ ಬಜೆಟ್‍ನಲ್ಲಿ ಈ ಕುರಿತು ಅಧಿಕೃತವಾಗಿ ಘೋಷಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದ್ದರು. ಆದರೆ, ಸರಕಾರದ ಈ ಘೋಷಣೆಯ ಬಳಿಕವೂ ಫ್ರೀಡಂಪಾರ್ಕ್‍ನಲ್ಲಿ ಧರಣಿ ಸತ್ಯಾಗ್ರಹ ಮುಂದುವರೆಯಲಿದೆ ಎಂದು ಸಂಘದ ಪದಾಧಿಕಾರಿಗಳಾದ ಕೆ.ಸೋಮಶೇಖರ್ ಮತ್ತು ಡಿ.ನಾಗಲಕ್ಷ್ಮಿ ತಿಳಿಸಿದ್ದಾರೆ.

ಧರಣಿನಿರತ ಆಶಾ ಕಾರ್ಯಕರ್ತೆಯರ ಅಭಿಪ್ರಾಯ ಪಡೆಯದೆ ಸಂಘಟನೆಯ ನಾಯಕರು ಸರಕಾರದೊಂದಿಗೆ ನಡೆದ ಮಾತುಕತೆಯನ್ನಾಧರಿಸಿ, ಹೋರಾಟ ಕೈಬಿಡುವುದಾಗಿ ನಿರ್ಧಾರ ಪ್ರಕಟಿಸಿರುವುದಕ್ಕೆ ಕಾರ್ಯಕರ್ತೆಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹೋರಾಟದಲ್ಲಿ ಪಾಲ್ಗೊಂಡಿರುವ ಕಾರ್ಯಕರ್ತೆಯರ ಒಪ್ಪಿಗೆ ಪಡೆಯದೆ ಹೋರಾಟ ಅಂತ್ಯಗೊಳಿಸುವ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ ಎಂಬ ನಿಲುವು ತಳೆದಿದ್ದಾರೆ ಎನ್ನಲಾಗಿದೆ.

ಈ ಹಿಂದೆಯೂ ಹಲವು ಬಾರಿ ಭರವಸೆಗಳನ್ನು ನೀಡಲಾಗಿದ್ದು, ಅವು ಈಡೇರದೆ ಇರುವುದರಿಂದ ಮತ್ತೊಮ್ಮೆ ಮೌಖಿಕ ಭರವಸೆಯನ್ನು ನಂಬಲು ಸಾಧ್ಯವಿಲ್ಲ. ಸರಕಾರದಿಂದ ಲಿಖಿತ ಭರವಸೆ ದೊರೆಯುವವರೆಗೆ ಧರಣಿ ಸ್ಥಳದಿಂದ ಕದಲುವುದಿಲ್ಲ ಎಂದು ಕಾರ್ಯಕರ್ತೆಯರು ಸ್ಪಷ್ಟಪಡಿಸಿದ್ದಾರೆ.

ಮಾಸಿಕ 15 ಸಾವಿರ ರೂ. ಗೌರವಧನ ನೀಡಬೇಕು ಎಂಬುದು ಆಶಾ ಕಾರ್ಯಕರ್ತೆಯರ ಪ್ರಮುಖ ಬೇಡಿಕೆಯಾಗಿದೆ. ಈ ಬೇಡಿಕೆ ಈಡೇರಿಸುವಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಕಾರ್ಯಕರ್ತೆಯರು ಮಳೆ, ಚಳಿ ಹಾಗೂ ಆರೋಗ್ಯ ಸಮಸ್ಯೆಗಳ ನಡುವೆಯೂ 12ನೇ ದಿನವೂ ಅಹೋರಾತ್ರಿ ಧರಣಿ ಮುಂದುವರಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಮನೋಜ್ ಆಜಾದ್/ವಾರ್ತಾಭಾರತಿ

ಬೆಂಗಳೂರು ವರದಿಗಾರರು