×
Ad

ನನ್ನನ್ನು ರಾಜಕೀಯವಾಗಿ ಮುಗಿಸಲು ಜನಾರ್ದನ ರೆಡ್ಡಿ ಯತ್ನ : ಬಿ.ಶ್ರೀರಾಮುಲು ಆರೋಪ

Update: 2025-01-22 20:31 IST

ಬಿ.ಶ್ರೀರಾಮುಲು/ಜನಾರ್ದನ ರೆಡ್ಡಿ

ಬೆಂಗಳೂರು : ನನ್ನನ್ನು ರಾಜಕೀಯವಾಗಿ ಮುಗಿಸಲು ಗಂಗಾವತಿ ಕ್ಷೇತ್ರದ ಶಾಸಕ ಗಾಲಿ ಜನಾರ್ದನ ರೆಡ್ಡಿ ಯತ್ನಿಸುತ್ತಿದ್ದಾರೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು, ತಮ್ಮ ಆಪ್ತನ ವಿರುದ್ದ ಗಂಭೀರ ಆರೋಪ ಮಾಡಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜನಾರ್ದನ ರೆಡ್ಡಿ ನನ್ನನ್ನು ರಾಜಕೀಯವಾಗಿ ಮುಗಿಸಲು ಯತ್ನಿಸುತ್ತಿದ್ದಾರೆ. ರೆಡ್ಡಿ ಮಾತು ಕೇಳಿ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಅವರು ನನ್ನ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ’ ಎಂದು ಕಿಡಿಕಾರಿದರು.

ಹಿಂದಿನ ಶಿಗ್ಗಾಂವಿ ಉಪಚುನಾವಣೆಯಲ್ಲಿ ನಾನು ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡಿದ್ದೇನೆ. ಕ್ಷೇತ್ರಕ್ಕೆ ಹೋಗಿ ಕೇಳಿದರೆ ನನ್ನ ಕೆಲಸದ ಬಗ್ಗೆ ಎಲ್ಲರೂ ಹೇಳುತ್ತಾರೆ. ಆದರೆ, ಉಸ್ತುವಾರಿ ರಾಧಾಮೋಹನ್ ದಾಸ್ ಅವರು ನಾನು ಕೆಲಸ ಮಾಡಿಲ್ಲ ಎಂಬರ್ಥದಲ್ಲಿ ಹೇಳಿಕೆ ನೀಡಿದ್ದಾರೆ. ಇದರಿಂದ ನನಗೆ ನೋವಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ನನ್ನ ಬಗ್ಗೆ ತಿಳಿದುಕೊಂಡು ರಾಧಾಮೋಹನ್ ದಾಸ್ ಮಾತನಾಡಬೇಕಿತ್ತು. ರಾಧಾಮೋಹನ್ ದಾಸ್ ಅವರು ಉತ್ತರಪ್ರದೇಶ ರಾಜ್ಯದವರು ಅವರಿಗೆ ಇಲ್ಲಿನ ಕೆಲವು ವಿಚಾರಗಳು ಗೊತ್ತಿರುವುದಿಲ್ಲ. ನನ್ನ ಬಗ್ಗೆ ಲಘುವಾಗಿ ಮಾತನಾಡುವುದು ಒಳ್ಳೆಯದಲ್ಲ ಎಂದು ಹೇಳಿದ್ದೇನೆ. ಸಭೆಯಲ್ಲಿ ಈ ವಿಚಾರವನ್ನು ರಾಜ್ಯಾಧ್ಯಕರಿಗೂ ತಿಳಿಸಿದ್ದೇನೆ. ನಾನು ಕೆಲಸ ಮಾಡಿಲ್ಲ ಎಂದು ಜನಾರ್ದನ ರೆಡ್ಡಿ ಹೇಳಿರುವುದು ಸ್ಪಷ್ಟವಾಗಿದೆ ಎಂದು ಬಿ.ಶ್ರೀರಾಮುಲು ಹೇಳಿದರು.

ಜ.21ರಂದು ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಶಿಗ್ಗಾಂವಿ ಕ್ಷೇತ್ರದ ಉಪಚುನಾವಣೆ ಸೋಲಿನ ಬಗ್ಗೆ ಚರ್ಚೆಯಾಗಿದ್ದು, ಈ ವೇಳೆ ನೀವು ಸರಿಯಾಗಿ ಕೆಲಸ ಮಾಡಿಲ್ಲ ಎಂದು ಉಸ್ತುವಾರಿ ರಾಧಾಮೋಹನ್‍ದಾಸ್ ಅವರು ಗಂಭೀರ ಆರೋಪ ಮಾಡಿದ್ದಾರೆ. ಸದಾನಂದಗೌಡರ ಸಮಿತಿ ಇನ್ನೂ ಉಪಚುನಾವಣೆ ಸೋಲಿನ ಕುರಿತ ವರದಿಯನ್ನೇ ಕೊಟ್ಟಿಲ್ಲ. ಅದಕ್ಕೂ ಮೊದಲು ಕೆಲಸ ಮಾಡಿಲ್ಲ ಎನ್ನುವುದು ಹೇಗೆ ಎಂದು ಶ್ರೀರಾಮುಲು ಪ್ರಶ್ನಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News