ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣ | ವರದಿ ಸಲ್ಲಿಕೆ ಬಳಿಕ ಕಠಿಣ ಕ್ರಮ : ಸಿಎಂ ಸಿದ್ದರಾಮಯ್ಯ
ಚಾಮರಾಜನಗರ : ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಐವರು ಬಾಣಂತಿಯರು ಮೃತಪಟ್ಟಿರುವ ವಿಚಾರವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದ್ದು, ಸಚಿವ ಸಂಪುಟದಲ್ಲಿ ಚರ್ಚೆ ನಡೆಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬಾಣಂತಿಯರ ಸರಣಿ ಸಾವಿನ ಹಿನ್ನಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಬಳ್ಳಾರಿಯ ಬಿಮ್ಸ್ ಅಸ್ಪತ್ರೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ ಈ ಸಂಬಂಧ ಚಾಮರಾಜನಗರದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, "ಬಳ್ಳಾರಿ ಆಸ್ಪತ್ರೆಯಲ್ಲಿ ನಡೆದಿರುವ ಬಾಣಂತಿಯರ ಸಾವಿನ ಪ್ರಕರಣವನ್ನು ಸರಕಾರವು ಗಂಭೀರವಾಗಿ ಪರಿಗಣಿಸಿ, ಈಗಾಗಲೇ ಡ್ರಗ್ ಕಂಟ್ರೋಲರ್ ಅವರನ್ನು ಅಮಾನತು ಮಾಡಿದೆ. ಸಾವಿಗೆ ಕಾರಣವಾದ ಔಷಧಿ ಸರಬರಾಜು ಮಾಡಿದ ಕಂಪನಿಯ ಮೇಲೆ ಕಾನೂನು ಕ್ರಮ ಕೈಗೊಂಡು, ಕಪ್ಪು ಪಟ್ಟಿಗೆ ಸೇರಿಸಲಾಗಿದೆ" ಎಂದರು.
ʼಪ್ರಕರಣದ ಬಗ್ಗೆ ಖುದ್ದಾಗಿ ಸಚಿವರು ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಹಾಗೂ ಪ್ರಕರಣದ ತನಿಖೆ ನಡೆಸಲು ಸಮಿಯೊಂದನ್ನು ರಚಿಸಲಾಗಿದ್ದು, ಸಮಿತಿ ನೀಡುವ ವರದಿಯ ಆಧಾರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದುʼ ಎಂದು ಹೇಳಿದರು.