Bengaluru | ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ರಾಜಧಾನಿಯಲ್ಲಿ ʼಕ್ಯಾಂಡಲ್ ಮಾರ್ಚ್ʼ
ಬೆಂಗಳೂರು : ನೀಟ್ ಪರೀಕ್ಷೆ ಹಗರಣದ ವಿರುದ್ಧ ಹೊಸದಿಲ್ಲಿಯಲ್ಲಿ ಧರಣಿ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲಿನ ಲಾಠಿ ಚಾರ್ಜ್ ಖಂಡಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ದೊಡ್ಡ ಸಂಖ್ಯೆಯಲ್ಲಿ ವಿದ್ಯಾರ್ಥಿ, ಯುವಜನರು ‘ಕ್ಯಾಂಡಲ್ ಮಾರ್ಚ್’ ನಡೆಸಿದರು.
ರಾಜ್ಯದ ಎಲ್ಲ ಪ್ರಗತಿಪರ ಸಂಘಟನೆಗಳ ವತಿಯಿಂದ ಜರುಗಿದ ಈ ಪ್ರತಿಭಟನೆಯಲ್ಲಿ ನೆರೆದಿದ್ದ ಸಾವಿರಾರು ವಿದ್ಯಾರ್ಥಿಗಳು ದೇಶದ ಶಿಕ್ಷಣ ವ್ಯವಸ್ಥೆಯ ವೈಫಲ್ಯವನ್ನು ಖಂಡಿಸಿ ಕೇಂದ್ರ ಸರಕಾರದ ವಿರುದ್ಧ ಧಿಕ್ಕಾರ ಕೂಗಿದರು. ಕೂಡಲೇ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಬೇಕು. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 1 ಕೋಟಿ ರೂ.ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಈ ವೇಳೆ ವಿದ್ಯಾರ್ಥಿಯೊಬ್ಬ ಮಾತನಾಡಿ, ನೀಟ್ ಪರೀಕ್ಷೆಯಲ್ಲಿನ ಅಕ್ರಮ ಪ್ರಕರಣದ ಸಂಪೂರ್ಣ ನೈತಿಕ ಹೊಣೆಯನ್ನು ಕೇಂದ್ರ ಸರಕಾರ ಹೊತ್ತುಕೊಳ್ಳಬೇಕು. ಈ ಹಗರಣದ ನಿಷ್ಪಕ್ಷಪಾತ ತನಿಖೆಗೆ ಅವಕಾಶ ಮಾಡಿಕೊಡಬೇಕು. ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶದ ವಿದ್ಯಾರ್ಥಿಗಳು ಮತ್ತು ಪೋಷಕರ ಕ್ಷಮೆ ಕೇಳಬೇಕು. ದೇಶದ ಉನ್ನತ ಶಿಕ್ಷಣ ಪ್ರವೇಶ ಪರೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮರುಸ್ಥಾಪಿಸಲು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಅಥವಾ ಸ್ವತಂತ್ರ ಸಂಸ್ಥೆಯ ಮೂಲಕ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯ್ಕ್, ಶಾಸಕ ಬಿ.ಆರ್.ಪಾಟೀಲ್, ರೈತ ಹೋರಾಟಗಾರ ಬಡಗಲಪುರ ನಾಗೇಂದ್ರ, ದಲಿತ ಮುಖಂಡ ಬಸವರಾಜ್ ಕೌತಾಳ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಬೆಂಬಲ ವ್ಯಕ್ತಪಡಿಸಿದರು.