Bengaluru | ಸಿಎಂ ಖುದ್ದು ಆದೇಶ ನೀಡುವವರೆಗೂ ಹೋರಾಟ ಹಿಂಪಡೆಯುವುದಿಲ್ಲ: ಆಶಾ ಕಾರ್ಯಕರ್ತೆಯರ ಎಚ್ಚರಿಕೆ
ಬೆಂಗಳೂರು: ಗೌರವ ಧನ ಹೆಚ್ಚಳ ಸಹಿತ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ನಡೆಯುತ್ತಿರುವ ಆಶಾಗಳ ಅನಿರ್ದಿಷ್ಟಾ ವಧಿ ಹೋರಾಟ, ಒಂಬತ್ತನೇ ದಿನಕ್ಕೆ ಕಾಲಿಟ್ಟಿದೆ. ದಿನದಿಂದ-ದಿನಕ್ಕೆ ಹೋರಾಟದ ತೀವ್ರತೆ ಪಡೆದುಕೊಳ್ಳುತ್ತಿದೆ.
ಬಿಸಿಲು, ಮಳೆ, ಚಳಿಯನ್ನು ಲೆಕ್ಕಿಸದೆ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಸಾವಿರಾರು ಆಶಾ ಕಾರ್ಯಕರ್ತೆಯರು ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಮುಖಂಡರು ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸುತ್ತಿದ್ದಾರೆ.
ಮಂಗಳವಾರ ಜಪಾನ್ನಿಂದ ವಿಡಿಯೋ ಕರೆ ಮೂಲಕ ಆಶಾ ಮುಖಂಡರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಕಾಲಾವಕಾಶ ನೀಡುವಂತೆ ಮನವಿ ಮಾಡಿದರು. ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಈ ಕುರಿತು ಚರ್ಚಿಸುವುದಾಗಿ ತಿಳಿಸಿ, ಹೋರಾಟವನ್ನು ಹಿಂಪಡೆಯುವಂತೆ ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ಆಶಾಗಳು, ‘ಸಿಎಂ ಖುದ್ದಾಗಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಆದೇಶ ನೀಡುವವರೆಗೂ ಹೋರಾಟ ಹಿಂಪಡೆಯುವುದಿಲ್ಲ’ ಎಂದು ಎಚ್ಚರಿಕೆ ನೀಡಿದರು.
ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಮಾತನಾಡಿದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸ್ವತಂತ್ರ ಸಂಘದ ಪ್ರಧಾನ ಕಾರ್ಯದರ್ಶಿ ಉಮಾಮಣಿ, ‘ದುಡಿಯುವ ಮಹಿಳೆಯರೆಲ್ಲರೂ ಒಂದೇ. ಆಶಾ, ಅಂಗನವಾಡಿ ಹಾಗೂ ಬಿಸಿಯೂಟ ಕಾರ್ಯಕರ್ತೆಯರ ನಡುವೆ ಭಿನ್ನಾಭಿಪ್ರಾಯ ಸೃಷ್ಟಿಸುವ ಪ್ರಯತ್ನ ಸಲ್ಲದು. ರಾಜ್ಯ ಸರಕಾರ ಎಲ್ಲರ ಸಮಸ್ಯೆಗಳನ್ನು ಪರಿಹರಿಸಬೇಕು. ಕಾರ್ಯಕರ್ತೆಯರ ಹೋರಾಟವನ್ನು ನಮ್ಮ ಸಂಘಟನೆ ಬೆಂಬಲಿಸಲಿದ್ದು, ಅವರ ಬೇಡಿಕೆಗಳನ್ನು ಈಡೇರಿಸಬೇಕು’ ಎಂದು ಆಗ್ರಹಿಸಿದರು.
ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಮಾತನಾಡಿ, ‘ಆಶಾ ಕಾರ್ಯಕರ್ತೆಯರ ವಿಚಾರದಲ್ಲಿ ಸರಕಾರ ನಡೆದುಕೊಳ್ಳುತ್ತಿರುವ ರೀತಿ ನೋವುಂಟು ಮಾಡಿದೆ. ಇದು ಮಾನವೀಯತೆ ಇರುವ ಸರಕಾರವೇ? ಎಂಬ ಪ್ರಶ್ನೆ ಮೂಡುತ್ತದೆ. ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಒಬ್ಬರಿಗೊಂದು ನ್ಯಾಯ, ಮತ್ತೊಬ್ಬರಿಗೊಂದು ನ್ಯಾಯ ನೀಡುವುದು ಸರಿಯಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಾತೆತ್ತಿದರೆ ಸರಕಾರದ ಬಳಿ ಹಣವಿಲ್ಲ ಎಂದು ಹೇಳುತ್ತಾರೆ. ಇವರಿಗೆ ಲೂಟಿ ಮಾಡಲು ಹಣವಿದೆ, ಬೆಂಗಳೂರು ಹಬ್ಬಕ್ಕೆ 20ಕೋಟಿ ರೂ.ನೀಡಲು ಹಣವಿದೆ, ನಿಗಮ-ಮಂಡಳಿಗಳಿಗೆ ಸಾವಿರಾರು ಕೋಟಿ ರೂ.ಖರ್ಚು ಮಾಡಲು ಹಣವಿದೆ. ಆದರೆ ಆಶಾ ಕಾರ್ಯಕರ್ತೆಯರಿಗೆ ಗೌರವಧನ ನೀಡಲು ಮಾತ್ರ ಹಣವಿಲ್ಲವೇ ಎಂದು ಪ್ರಶ್ನಿಸಿದರು. ಮಾಜಿ ಸಿಎಂ ಸಿದ್ದರಾಮಯ್ಯ 10ಸಾವಿರ ರೂ.ಗೌರವಧನ ನೀಡುವ ಖಚಿತ ಭರವಸೆ ನೀಡಿದ್ದರೂ ಅದನ್ನು ಈಡೇರಿಸಿಲ್ಲ. ಇದಕ್ಕಾಗಿ ಸಾವಿರಾರು ಆಶಾ ಕಾರ್ಯಕರ್ತೆಯರಲ್ಲಿ ಸರಕಾರ ಕ್ಷಮೆ ಕೇಳಬೇಕು ಹಾಗೂ ಬೇಡಿಕೆ ಈಡೇರಿಸಬೇಕು ಎಂದು ಚಂದ್ರು ಒತ್ತಾಯಿಸಿದರು.
ವಕೀಲರು ಹಾಗೂ ಕೆಂಪೇಗೌಡ ಯುವವಾಹಿನಿ ಸಂಘದ ಸ್ಥಾಪಕ ಜಗನ್ನಾಥ ಗೌಡ ಮಾತನಾಡಿ, ಆಶಾ ಕಾರ್ಯಕರ್ತೆಯರು ಹಗಲು-ರಾತ್ರಿ ಜನರಿಗಾಗಿ ದುಡಿಯುತ್ತಿದ್ದಾರೆ. ಕೋವಿಡ್ ಸಂದರ್ಭದಲ್ಲಿ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಸೇವೆ ಸಲ್ಲಿಸಿದ್ದಾರೆ. ಇಂತಹ ಕಾರ್ಯಕರ್ತೆಯರನ್ನು ಸರಕಾರ ಮಾನವೀಯತೆಯಿಂದ ಕಾಣುತ್ತಿಲ್ಲ. ಕೂಡಲೇ ಅವರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.
ಸುರಿಯುವ ಮಳೆಯನ್ನೂ ಲೆಕ್ಕಿಸದೆ ಆಶಾ ಕಾರ್ಯಕರ್ತೆಯರು, ‘ಮಳೆಯೇ ಬರಲಿ, ಬಿಸಿಲೇ ಬರಲಿ, ನಮ್ಮ ಹೋರಾಟ ನಿಲ್ಲುವುದಿಲ್ಲ’ ಎನ್ನುವ ಘೋಷಣೆಗಳೊಂದಿಗೆ ಹೋರಾಟವನ್ನು ಮುಂದುವರೆಸಿದರು. ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತೆಯರು ತಮ್ಮ ಮಕ್ಕಳೊಂದಿಗೆ ಹೋರಾಟದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.
ಧರಣಿ ಸತ್ಯಾಗ್ರಹದಲ್ಲಿ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ಉಮೇಶ್ ಆವರೆಗೆರೆ, ರೈತ ಸಂಘದ ಜೆ.ಎಂ.ವೀರಸಂಗಯ್ಯ, ಕೆ.ವಿ.ಭಟ್, ಸೋಮಶೇಖರ್, ಅಮ್ಜದ್ ಪಾಷಾ ಸೇರಿದಂತೆ ಹಲವರು ಭಾಗವಹಿಸಿ ಬೆಂಬಲ ವ್ಯಕ್ತಪಡಿಸಿದರು.
ಆಶಾಗಳೊಂದಿಗೆ ನಮ್ಮ ಸರಕಾರ ಇರಲಿದೆ:
‘ಆಶಾ ಕಾರ್ಯಕರ್ತೆಯರು ನನ್ನ ಸಹೋದರಿಯರಿದ್ದಂತೆ. ಅವರ ನೋವು, ಸಂಕಷ್ಟಗಳಿಗೆ ಸ್ಪಂದಿಸುವುದು ನಮ್ಮ ಜವಾಬ್ದಾರಿಯಾಗಿದೆ. ಅವರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ನಮ್ಮ ಸರಕಾರ ಸದಾ ಅವರೊಂದಿಗಿದೆ’ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಭಯ ನೀಡಿದ್ದಾರೆ.
ಜಪಾನ್ ಪ್ರವಾಸದಲ್ಲಿರುವ ಸಿಎಂ ಡಿ.ಕೆ.ಶಿವಕುಮಾರ್, ಹೋರಾಟನಿರತ ಆಶಾ ಕಾರ್ಯಕರ್ತೆರ ಚಳವಳಿಯ ಮುಖಂಡರೊಂದಿಗೆ ವಿಡಿಯೋ ಕರೆಯ ಮೂಲಕ ಅನಿದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಕೂಡಲೇ ಹಿಂಪಡೆಯಿರಿ. ಆಶಾ ಕಾರ್ಯಕರ್ತೆಯರೊಂದಿಗೆ ಸದಾ ನಮ್ಮ ಸರಕಾರವಿದೆ. ಅವರ ಬೇಡಿಕೆಗಳ ಕುರಿತು ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ಚರ್ಚಿಸಿ, ಹಣಕಾಸು ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚಿಸಿ, ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.