ಮಂಗಳೂರಿಗೆ 675 ಕೋಟಿ ರೂ.ವೆಚ್ಚದಲ್ಲಿ ಕುಡಿಯುವ ನೀರು ಯೋಜನೆ : ಭೈರತಿ ಸುರೇಶ್
ಭೈರತಿ ಸುರೇಶ್
ಬೆಂಗಳೂರು, ಆ.19 : ಮಂಗಳೂರು ನಗರದಲ್ಲಿ 675.51 ಕೋಟಿ ರೂ. ವೆಚ್ಚದಲ್ಲಿ ಕುಡಿಯುವ ನೀರು ಸರಬರಾಜು ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಭೈರತಿ ಸುರೇಶ್ ತಿಳಿಸಿದ್ದಾರೆ.
ಮಂಗಳವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಐವಾನ್ ಡಿಸೋಜಾ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, 675.51 ಕೋಟಿ ರೂಪಾಯಿ ವೆಚ್ಚದಲ್ಲಿ ಮೂರು ಕುಡಿಯುವ ನೀರು ಸರಬರಾಜು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಪೈಕಿ ಒಂದು ಯೋಜನೆ ಪೂರ್ಣಗೊಂಡಿದೆ. 2026ರ ಡಿಸೆಂಬರ್ ವೇಳೆಗೆ ಇನ್ನೆರಡು ಯೋಜನೆಗಳ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು ಎಂದರು.
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಏಷ್ಯನ್ ಅಭಿವೃದ್ಧಿ ಬ್ಯಾಂಕ್ ಮತ್ತು ಅಮೃತ್ ನೆರವಿನ ಕರ್ನಾಟಕ ಸಮಗ್ರ ನಗರ ನೀರು ನಿರ್ವಹಣೆ ಮತ್ತು ಹೂಡಿಕೆ ಕಾರ್ಯಕ್ರಮವಾದ ಜಲಸಿರಿ ಅಡಿ 316.51 ಕೋಟಿ ರೂ. ವೆಚ್ಚದಲ್ಲಿ 8 ಒಳಚರಂಡಿ ಕಾಮಗಾರಿಗಳನ್ನು ಆರಂಭಿಸಲಾಗಿದೆ. ಈಗಾಗಲೇ 5 ಕಾಮಗಾರಿಗಳು ಪೂರ್ಣಗೊಂಡಿದ್ದು, ಉಳಿದ 3 ಕಾಮಗಾರಿಗಳು ಈ ವರ್ಷದ ಅಂತ್ಯದ ವೇಳೆಗೆ ಪೂರ್ಣಗೊಳ್ಳಲಿವೆ ಎಂದು ಸಚಿವರು ಹೇಳಿದರು.