ರಾಜ್ಯ ಬಿಜೆಪಿಯಲ್ಲೂ ಸಂಚಲನ; ರಾಜ್ಯಾಧ್ಯಕ್ಷರ ಬದಲಾವಣೆ ಸಾಧ್ಯತೆ
ಸಾಂದರ್ಭಿಕ ಚಿತ್ರ (PTI)
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿ ಎಂದು ಘೋಷಣೆ ಮಾಡಿದ್ದು, ನೂತನ ಸಿಎಂ ಅಧಿಕಾರ ಸ್ವೀಕಾರಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ ಪ್ರತಿಪಕ್ಷ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆ ಆರಂಭವಾಗಿದ್ದು, ರಾಜ್ಯಾಧ್ಯಕ್ಷರ ಬದಲಾವಣೆ ಮಾಡಲಾಗುತ್ತದೆ ಎಂಬ ಸುದ್ದಿ ಹರಿದಾಡುತ್ತಿದೆ.
ಮುಂಬರುವ 2028ರ ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಬಿಜೆಪಿ ಮತ್ತು ಸಂಘ ಪರಿವಾರ ತನ್ನ ರಾಜಕೀಯ ರಣತಂತ್ರವನ್ನು ಬದಲಾಯಿಸಲು ಮುಂದಾಗಿದೆ. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಿರುವುದರಿಂದ ಮುಂಬರುವ ಚುನಾವಣೆಗಳು ತೀರ ಕ್ಲಿಷ್ಟಕರವಾಗುವ ಸಾಧ್ಯತೆ ಇದ್ದು, ಬಿಜೆಪಿ ತನ್ನ ಕಾರ್ಯತಂತ್ರ ಬದಲಾಯಿಸಲು ನಿರ್ಧರಿಸಿದೆ ಎಂದು ಹೇಳಲಾಗಿದೆ.
ಕೆಲ ತಿಂಗಳುಗಳಿಂದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರರನ್ನು ಬದಲಾವಣೆ ಮಾಡುತ್ತಾರೆಂಬ ಮಾತುಗಳು ಕೇಳಿ ಬರುತ್ತಿವೆ. ಆ ಹಿನ್ನೆಲೆಯಲ್ಲಿ ಕಳೆದ ವಾರ ರಾಷ್ಟ್ರೀಯಾಧ್ಯಕ್ಷ ನಿತಿನ್ ನಬಿನ್ ಹಾಗೂ ಕರ್ನಾಟಕ ಉಸ್ತುವಾರಿ ರಾಧಾಕೃಷ್ಣ ಮೋಹನ್ ಅಗರ್‌ವಾಲ್ ಸೇರಿದಂತೆ ಪಕ್ಷದ ಪ್ರಮುಖರು ಬೆಂಗಳೂರಿನಲ್ಲಿ ಮಹತ್ವದ ಸಭೆಯನ್ನು ನಡೆಸಿದ್ದರು.
ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಸಿಎಂ ಆಗುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಪ್ರಚಾರವನ್ನು ಪರಿಣಾಮಕಾರಿಯಾಗಿ ಮುನ್ನಡೆಸಬಲ್ಲ ಮತ್ತು ರಾಜ್ಯಾದ್ಯಂತ ಬಲವಾದ ಪಕ್ಷ ಸಂಘಟನೆ ಜಾಲವನ್ನು ನಿರ್ಮಿಸಬಲ್ಲ ಹೊಸ ರಾಜ್ಯಾಧ್ಯಕ್ಷರ ನೇಮಕ ಮಾಡಲಾಗುತ್ತಿದೆ ಎನ್ನಲಾಗಿದೆ. ಪ್ರಸ್ತುತ ಮೋದಿ ಸಂಪುಟದಲ್ಲಿ ಸಚಿವರಾಗಿರುವ ಒಬ್ಬರನ್ನು ರಾಜ್ಯಾಧ್ಯಕ್ಷ ಹುದ್ದೆಗೆ ನೇಮಕ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ.