‘ಬಿಹಾರ ಫಲಿತಾಂಶ’ ಚುನಾವಣಾ ಆಯೋಗಕ್ಕೆ ಅಭಿನಂದನೆ : ಬಿ.ಕೆ.ಹರಿಪ್ರಸಾದ್ ವ್ಯಂಗ್ಯ
ಬಿ.ಕೆ.ಹರಿಪ್ರಸಾದ್
ಬೆಂಗಳೂರು : ಬಿಹಾರ ರಾಜ್ಯದ ವಿಧಾನಸಭಾ ಚುನಾವಣೆಯ ಫಲಿತಾಂಶಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್, ಬಿಹಾರದಲ್ಲಿ ಚುನಾವಣೆಗೆ ಮುಂಚಿತವಾಗಿ 65 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಮೂಲಕ ಈ ಅದ್ಭುತವಾದ ಫಲಿತಾಂಶ ಬರಲು ಕಾರಣಕರ್ತರಾದ ಚುನಾವಣಾ ಆಯೋಗಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ವ್ಯಂಗ್ಯವಾಡಿದ್ದಾರೆ.
ಶುಕ್ರವಾರ ನಗರದಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯು ಆರೆಸ್ಸೆಸ್‌ನ ರಾಜಕೀಯ ಪಕ್ಷವಾಗಿದೆ. ಎಲ್ಲ ರೀತಿಯಲ್ಲೂ ಪ್ರಜಾಪ್ರಭುತ್ವದ ಪ್ರಕ್ರಿಯೆಗಳನ್ನು ನಿರ್ನಾಮ ಮಾಡಲು ಚುನಾವಣಾ ಆಯೋಗವು, ಆರೆಸ್ಸೆಸ್‌ನ ಒಂದು ಘಟಕವಾಗಿ ಕೆಲಸ ಮಾಡುತ್ತಿದೆ ಎಂದು ಕಿಡಿಗಾರಿದರು.
65 ಲಕ್ಷ ಮತದಾರರು ಆರ್‌ಜೆಡಿ, ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನ್ ಪರವಾಗಿ ಮತ ಚಲಾಯಿಸುತ್ತಿದ್ದರೇ? ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಹರಿಪ್ರಸಾದ್, ಚುನಾವಣೆ ಸಂದರ್ಭದಲ್ಲಿ ಮತ ಹಾಕಲು ಅವಕಾಶವೇ ನೀಡಲಿಲ್ಲ. ಅವರು ಮತಚಲಾಯಿಸಿದ್ದರೆ ಫಲಿತಾಂಶ ಬೇರೆಯೇ ಆಗಿರುತ್ತಿತ್ತು. ಎನ್‌ಡಿಎ ವಿರುದ್ಧ ಮತ ಚಲಾಯಿಸಬಾರದು ಎಂಬ ಕಾರಣಕ್ಕೆ ಅವರನ್ನು ಮತದಾರರ ಪಟ್ಟಿಯಿಂದ ಕೈ ಬಿಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.