ಬೆಂಗಳೂರು : ದೇಶದಲ್ಲಿ ಸ್ವತಂತ್ರ ಮತ್ತು ನಿಷ್ಪಕ್ಷಪಾತ ಚುನಾವಣೆಗಳನ್ನು ನಡೆಸಬೇಕಾದ ಚುನಾವಣಾ ಆಯೋಗ ಇಂದು ತನ್ನ ಸ್ವಾಯತ್ತತೆಯನ್ನು ಕಳೆದುಕೊಂಡು ಸಂಪೂರ್ಣವಾಗಿ ‘ಸೆಲೆಕ್ಷನ್ ಕಮಿಷನ್’ ಆಗಿ ಮಾರ್ಪಟ್ಟಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಆದೇಶಗಳನ್ನು ಪಾಲಿಸುವ ಸಂಸ್ಥೆಯಾಗಿ ಚುನಾವಣಾ ಆಯೋಗ ಬದಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದರು.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಇಂಡಿಯಾ ಮೈತ್ರಿಕೂಟದ ವತಿಯಿಂದ ಎಸ್‌ಐಆರ್ ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಹಮ್ಮಿಕೊಂಡಿದ್ದ ‘ಮತ ಉಳಿಸಿ – ದೇಶ ಉಳಿಸಿ’ ರಾಜ್ಯಮಟ್ಟದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದ ಅವರು, ನವೆಂಬರ್ 1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನೆಯ ಮುಂದುವರಿದ ಭಾಗವಾಗಿ ಬೆಂಗಳೂರಿನಲ್ಲಿ ಈ ಸಮಾವೇಶ ಆಯೋಜಿಸಲಾಗಿದೆ. ಇದು ಕೇವಲ ಚುನಾವಣಾ ಪ್ರಕ್ರಿಯೆಯ ವಿರುದ್ಧದ ಹೋರಾಟವಲ್ಲ. ದೇಶದ ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಪ್ರತಿಯೊಬ್ಬ ನಾಗರಿಕನ ಮತದಾನದ ಹಕ್ಕನ್ನು ರಕ್ಷಿಸುವ ಹೋರಾಟವಾಗಿದೆ ಎಂದು ಹೇಳಿದರು.

ದೇಶದ ಸ್ವಾತಂತ್ರ್ಯಕ್ಕಾಗಿ ನಮ್ಮ ಪೂರ್ವಜರು ಮಾಡಿದ ತ್ಯಾಗ, ಬಲಿದಾನ ಹಾಗೂ ಸಂವಿಧಾನದ ಆಶಯಗಳ ಆಧಾರದಲ್ಲಿ ನಿರ್ಮಾಣಗೊಂಡ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡಲು ಆರ್‌ಎಸ್‌ಎಸ್ ಮತ್ತು ಬಿಜೆಪಿ ಮುಂದಾಗಿವೆ ಎಂದು ಹರಿಪ್ರಸಾದ್ ಆರೋಪಿಸಿದರು.

“ಆರ್‌ಎಸ್‌ಎಸ್, ಬಿಜೆಪಿ ಹಾಗೂ ಹಿಂದೂ ಮಹಾಸಭಾದವರು ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿರಲಿಲ್ಲ. ಭಾರತೀಯರು ಬ್ರಿಟಿಷರ ವಿರುದ್ಧ ಹೋರಾಡುತ್ತಿದ್ದಾಗ ಈ ಶಕ್ತಿಗಳು ಬ್ರಿಟಿಷ್ ಆಡಳಿತಕ್ಕೆ ಬೆಂಬಲ ನೀಡಿದ್ದವು. ಸ್ವಾತಂತ್ರ್ಯ ಹೋರಾಟದ ವಿರುದ್ಧ ಕೆಲಸ ಮಾಡಿದ ಇಂತಹ ಶಕ್ತಿಗಳು ಇಂದು ದೇಶದ ಅಧಿಕಾರ ಹಿಡಿದು, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗದಿಂದ ನಿರ್ಮಾಣವಾದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ದುರ್ಬಲಗೊಳಿಸಲು ಹೊರಟಿವೆ” ಎಂದು ಟೀಕಿಸಿದರು.

ಮುಖ್ಯ ಚುನಾವಣಾ ಆಯುಕ್ತರ ನೇಮಕಾತಿ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ತಂದಿರುವ ಬದಲಾವಣೆಗಳನ್ನು ತೀವ್ರವಾಗಿ ಟೀಕಿಸಿದ ಹರಿಪ್ರಸಾದ್, ಚುನಾವಣಾ ಆಯೋಗದ ಸ್ವಾಯತ್ತತೆಯನ್ನು ವ್ಯವಸ್ಥಿತವಾಗಿ ಕಸಿದುಕೊಳ್ಳಲಾಗಿದೆ ಎಂದು ಆರೋಪಿಸಿದರು.

“ಚುನಾವಣಾ ಆಯುಕ್ತರ ನೇಮಕಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೂಚಿಸಿದ್ದ ಆಯ್ಕೆ ಸಮಿತಿಯಲ್ಲಿ ಪ್ರಧಾನಮಂತ್ರಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಸ್ಥಾನವಿತ್ತು. ಆದರೆ 2023ರಲ್ಲಿ ಕೇಂದ್ರ ಸರ್ಕಾರ ತನ್ನ ಸಂಖ್ಯಾಬಲವನ್ನು ಬಳಸಿಕೊಂಡು ಕಾನೂನು ರೂಪಿಸಿ, ಮುಖ್ಯ ನ್ಯಾಯಮೂರ್ತಿಯನ್ನು ಹೊರಗಿಟ್ಟು ಅವರ ಸ್ಥಾನಕ್ಕೆ ಕೇಂದ್ರ ಸಚಿವರನ್ನು ಸೇರಿಸಿಕೊಂಡಿತು. ಇದು ಕ್ರಿಕೆಟ್ ಪಂದ್ಯದಲ್ಲಿ ತಮಗೆ ಬೇಕಾದ ಅಂಪೈರ್ ಅನ್ನು ತಾವೇ ಆಯ್ಕೆ ಮಾಡಿಕೊಂಡಂತೆ. ಇಂತಹ ವ್ಯವಸ್ಥೆಯಲ್ಲಿ ನಿಷ್ಪಕ್ಷಪಾತ ಚುನಾವಣೆಗಳನ್ನು ನಿರೀಕ್ಷಿಸುವುದಾದರೂ ಹೇಗೆ?” ಎಂದು ಪ್ರಶ್ನಿಸಿದರು.

ಸಂವಿಧಾನಬದ್ಧ ಸ್ವಾಯತ್ತ ಸಂಸ್ಥೆಯಾಗಿರಬೇಕಾದ ಚುನಾವಣಾ ಆಯೋಗವು ಆಡಳಿತಾರೂಢ ಪಕ್ಷದ ಸೂಚನೆಗಳನ್ನು ಪಾಲಿಸುವ ಸ್ಥಿತಿಗೆ ತಲುಪಿದೆ. ಪ್ರಜಾಪ್ರಭುತ್ವದ ಮೂಲಾಧಾರವಾಗಿರುವ ಚುನಾವಣಾ ವ್ಯವಸ್ಥೆಯನ್ನೇ ದುರ್ಬಲಗೊಳಿಸುವ ಉದ್ದೇಶದಿಂದ ಈ ಬದಲಾವಣೆಗಳನ್ನು ತರಲಾಗಿದೆ ಎಂದು ಆರೋಪಿಸಿದರು.

ಎಸ್‌ಐಆರ್ ಪ್ರಕ್ರಿಯೆಯ ಹೆಸರಿನಲ್ಲಿ ದೇಶಾದ್ಯಂತ ಸುಮಾರು 15 ಕೋಟಿ ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಹರಿಪ್ರಸಾದ್ ಗಂಭೀರ ಆರೋಪ ಮಾಡಿದರು.

“ಬಿಹಾರದಲ್ಲಿ 64 ಲಕ್ಷ, ಪಶ್ಚಿಮ ಬಂಗಾಳದಲ್ಲಿ 91 ಲಕ್ಷ ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಮಹಾರಾಷ್ಟ್ರ, ಹರಿಯಾಣ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮತದಾರರ ಪಟ್ಟಿಯಲ್ಲಿ ಅಕ್ರಮಗಳು ನಡೆದಿವೆ. ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿಯೂ ಒಂದು ಲಕ್ಷ ಮತಗಳಿಗೆ ಸಂಬಂಧಿಸಿದ ಅಕ್ರಮ ನಡೆದಿದೆ. ಇವೆಲ್ಲವೂ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆಯ ಮೇಲೆ ಗಂಭೀರ ಪ್ರಶ್ನೆಗಳನ್ನು ಎತ್ತಿವೆ” ಎಂದು ಹೇಳಿದರು.

ಮತದಾರರ ಪಟ್ಟಿಯ ಪರಿಷ್ಕರಣೆ ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳುವುದು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಆರೋಪಿಸಲಾದ ಅರ್ಹ ಮತದಾರರನ್ನು ಮತ್ತೆ ಪಟ್ಟಿಗೆ ಸೇರಿಸುವುದು ಇಂಡಿಯಾ ಮೈತ್ರಿಕೂಟದ ಹೋರಾಟದ ಪ್ರಮುಖ ಉದ್ದೇಶವಾಗಿದೆ ಎಂದು ಸ್ಪಷ್ಟಪಡಿಸಿದರು.

“ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರಿಗೆ ವಿರೋಧ ಪಕ್ಷಗಳು ಎತ್ತುತ್ತಿರುವ ಪ್ರಶ್ನೆಗಳಿಗೆ ಸಂಸತ್ತಿನಲ್ಲಿ ಉತ್ತರಿಸುವ ಧೈರ್ಯವಿಲ್ಲ. ಚುನಾವಣಾ ಅಕ್ರಮಗಳ ಕುರಿತು ಚರ್ಚಿಸಲು ಸಿದ್ಧರಿಲ್ಲ. ಆದರೆ ಮಾನಮರ್ಯಾದೆಯನ್ನು ಬದಿಗಿಟ್ಟು ಇಂಡಿಯಾ ಮೈತ್ರಿಕೂಟದ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಅಧಿಕಾರದಲ್ಲಿರುವ ಪಕ್ಷವೇ ವಿರೋಧ ಪಕ್ಷಗಳ ವಿರುದ್ಧ ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿರುವುದು ರಾಜಕೀಯ ವಿಪರ್ಯಾಸ” ಎಂದು ಹರಿಪ್ರಸಾದ್ ವ್ಯಂಗ್ಯವಾಡಿದರು.

ಜನರು ತಮ್ಮ ವಿರುದ್ಧ ನಿಲ್ಲುತ್ತಿದ್ದಾರೆ ಎಂಬ ಆತಂಕದಿಂದಲೇ ಬಿಜೆಪಿ ನಾಯಕರು ಇಂತಹ ಪ್ರತಿಭಟನೆಗಳಿಗೆ ಮುಂದಾಗಿದ್ದಾರೆ. ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ನಡೆಯುತ್ತಿರುವ ಹೋರಾಟವನ್ನು ಯಾವುದೇ ರೀತಿಯಲ್ಲೂ ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಎಚ್ಚರಿಸಿದರು.

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಕಾರ್ಯವೈಖರಿಯನ್ನು ತೀವ್ರವಾಗಿ ಖಂಡಿಸಿದ ಹರಿಪ್ರಸಾದ್, ಚುನಾವಣಾ ಪ್ರಕ್ರಿಯೆಯಲ್ಲಿ ನಡೆದಿರುವುದಾಗಿ ಆರೋಪಿಸಲಾದ ಅಕ್ರಮಗಳಿಗೆ ಹೊಣೆಗಾರಿಕೆ ನಿಗದಿಪಡಿಸಬೇಕು ಎಂದು ಆಗ್ರಹಿಸಿದರು.

“ಜ್ಞಾನೇಶ್ ಕುಮಾರ್ ಅವರು ರಾಜೀನಾಮೆ ನೀಡಬೇಕು. ಚುನಾವಣಾ ಅಕ್ರಮಗಳಿಗೆ ಸಂಬಂಧಿಸಿದಂತೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಜೈಲಿಗೆ ಕಳುಹಿಸುವವರೆಗೂ ನಮ್ಮ ಹೋರಾಟ ಮುಂದುವರಿಯಬೇಕು. ನಮ್ಮ ಹಿರಿಯರು ತ್ಯಾಗ, ಬಲಿದಾನದ ಮೂಲಕ ನಮಗೆ ನೀಡಿರುವ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ” ಎಂದು ಹೇಳಿದರು.

ಇಂಡಿಯಾ ಮೈತ್ರಿಕೂಟದ ಪರವಾಗಿ ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಸಮಾವೇಶದಲ್ಲಿ ಮಂಡಿಸಿದ ನಿರ್ಣಯಗಳಿಗೆ ಎಲ್ಲರೂ ಒಮ್ಮತದ ಬೆಂಬಲ ಸೂಚಿಸಿರುವುದಕ್ಕೆ ಹರಿಪ್ರಸಾದ್ ಧನ್ಯವಾದ ಸಲ್ಲಿಸಿದರು.

ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಇಂಡಿಯಾ ಮೈತ್ರಿಕೂಟದ ಎಲ್ಲ ಪಕ್ಷಗಳು ಸಂವಿಧಾನ ಮತ್ತು ಮತದಾನದ ಹಕ್ಕಿನ ರಕ್ಷಣೆಗಾಗಿ ಒಗ್ಗಟ್ಟಿನಿಂದ ಹೋರಾಟ ನಡೆಸುತ್ತಿವೆ. ಈ ಹೋರಾಟಕ್ಕೆ ಕರ್ನಾಟಕದ ಸಂಪೂರ್ಣ ಬೆಂಬಲವಿದ್ದು, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಪ್ರತಿಭಟನಾ ಸಮಾವೇಶದಲ್ಲಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳು, ಸಿಡಬ್ಲ್ಯುಸಿ ಸದಸ್ಯರಾದ ಸಿದ್ದರಾಮಯ್ಯ, ಎಐಸಿಸಿ ಕಾರ್ಯದರ್ಶಿ ಗೋಪಿನಾಥ್ ಪಳನಿಯಪ್ಪನ್, ಸಚಿವರುಗಳು, ಶಾಸಕರುಗಳು, ಸಿಪಿಎಂ ಕಾರ್ಯದರ್ಶಿ ಕೆ.ಪ್ರಕಾಶ್, ಸಿಪಿಐ ಕಾರ್ಯದರ್ಶಿ ಸಾಥಿ ಸುಂದರೇಶ್, ಎಸ್ಪಿ ರಾಜ್ಯಾಧ್ಯಕ್ಷ ಮಂಜ್ಯಪ್ಪ, ಸೇರಿದಂತೆ ಇಂಡಿಯಾ ಮೈತ್ರಿಕೂಟದ ಅನೇಕ ಗಣ್ಯರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor