ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರಾಗಿ ಬಿ.ಆರ್.ಪಾಟೀಲ್ ನೇಮಕ
Update: 2025-02-17 16:21 IST
ಬೆಂಗಳೂರು : ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದ ಹಿರಿಯ ಶಾಸಕ ಬಿ.ಆರ್. ಪಾಟೀಲ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ‘ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಸೋಮವಾರ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಮಲ್ಲಿನಾಥ ಅಧಿಸೂಚನೆ ಹೊರಡಿಸಿದ್ದು, ಬಿ.ಆರ್.ಪಾಟೀಲ್ ಅವರಿಗೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ಹಾಗೂ ಎಲ್ಲ ಇತರೆ ಸೌಲಭ್ಯಗಳನ್ನು ನೀಡಿ ಆದೇಶ ಮಾಡಲಾಗಿದೆ.
ಬಿ.ಆರ್.ಪಾಟೀಲ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿತ್ತು. ಆದರೆ, ಅವರು ಇತ್ತೀಚೆಗಷ್ಟೇ ಆ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಕ್ಷೇತ್ರಕ್ಕೆ ಅನುದಾನ ಸಿಗುತ್ತಿಲ್ಲ ಹಾಗೂ ಅಧಿಕಾರಿಗಳು ಸರಿಯಾಗಿ ಮಾತು ಕೇಳುತ್ತಿಲ್ಲ ಎಂದು ಅಸಮಾಧಾನಗೊಂಡಿದ್ದ ಪಾಟೀಲ್, ಸರಕಾರದ ಕಾರ್ಯವೈಖರಿಯ ವಿರುದ್ದವೇ ಆಕ್ರೋಶ ಹೊರಹಾಕಿದ್ದರು.