×
Ad

ಉದ್ಯಮಿಗೆ ವಂಚನೆ ಪ್ರಕರಣ: ಅಭಿನವ ಹಾಲಶ್ರೀಗೆ ಜಾಮೀನು ನಿರಾಕರಣೆ

Update: 2023-10-17 12:56 IST

ಆರೋಪಿ ಅಭಿನವ ಹಾಲಶ್ರೀ

ಬೆಂಗಳೂರು: ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ವಂಚಿಸಿದ್ದ ಪ್ರಕರಣದ ಮೂರನೇ ಆರೋಪಿ ವಿಜಯನಗರ ಜಿಲ್ಲೆ ಹಿರೇಹಡಗಲಿ ಹಾಲಸ್ವಾಮಿ ಮಠದ ಅಭಿನವ ಹಾಲಶ್ರೀ ಸ್ವಾಮೀಜಿಗೆ ನಗರದ ಸೆಷನ್ಸ್ ನ್ಯಾಯಾಲಯ ಸೋಮವಾರ ಜಾಮೀನು ನಿರಾಕರಿಸಿದೆ.

ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಜಾಮೀನು ಅರ್ಜಿ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಹಾಲಶ್ರೀ ಸ್ವಾಮೀಜಿ ಬೆಂಗಳೂರಿನ ಸೆಷನ್ಸ್ ನ್ಯಾಯಾಲಯದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ್ದ 57ನೆ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶವನ್ನು ಅ.16ಕ್ಕೆ ಪ್ರಕಟಿಸುವುದಾಗಿ ಹೇಳಿತ್ತು.

ಅದರಂತೆ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ಸೋಮವಾರ (ಅ.16) 57ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶ ಟಿ. ಗೋವಿಂದಯ್ಯ ಪ್ರಕಟಿಸಿದ್ದಾರೆ.

ಪ್ರಕರಣದ ವಿವರ: ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಗೋವಿಂದ ಬಾಬು ಪೂಜಾರಿ ಅವರಿಗೆ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಅವರಿಂದ 5 ಕೋಟಿ ರೂ. ಹಣ ಪಡೆದಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಲಾಗಿತ್ತು. ಪ್ರಕರಣದ ಆರೋಪಿಗಳಾದ ಚೈತ್ರಾ, ಶ್ರೀಕಾಂತ್, ರಮೇಶ್, ಗಗನ್, ಪ್ರಜ್ವಲ್ ಹಾಗೂ ಧನರಾಜ್ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಆ ಬಳಿಕ ಸ್ವಾಮೀಜಿಯನ್ನು ಸೆ.19ರಂದು ಸಿಸಿಬಿ ಪೊಲೀಸರು ಒಡಿಶಾದ ಕಟಕ್‍ನಲ್ಲಿ ಬಂಧಿಸಿದ್ದರು. ಇದಕ್ಕೂ ಮುನ್ನ, ಹಾಲಶ್ರೀ ಸ್ವಾಮೀಜಿ ಅಜ್ಞಾತ ಸ್ಥಳದಲ್ಲಿದ್ದುಕೊಂಡೇ ನಿರೀಕ್ಷಣಾ ಜಾಮೀನನ್ನು ಕೋರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News