×
Ad

ಕೋಗಿಲು ಬಡಾವಣೆ ಅಕ್ರಮ ಮನೆಗಳ ತೆರವು; ಸಿಎಂ, ಡಿಸಿಎಂ ಯೂಟರ್ನ್ : ಬಿ.ವೈ.ವಿಜಯೇಂದ್ರ

"ನಮ್ಮ ರಾಜ್ಯದ ನೀತಿ ನಿರ್ಧಾರಗಳನ್ನು ಕೆ.ಸಿ.ವೇಣುಗೋಪಾಲ್ ತೀರ್ಮಾನಿಸಬೇಕೇ?"

Update: 2025-12-30 14:57 IST

ಬೆಳಗಾವಿ : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅಕ್ರಮ ಮನೆಗಳ ತೆರವು ವಿಚಾರದಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಇದೀಗ ಯೂಟರ್ನ್ ಹೊಡೆದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದ್ದಾರೆ.

ಮಾಧ್ಯಮ ಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಕಾಂಗ್ರೆಸ್ ಸರಕಾರದ ನೀತಿಯಿಂದ ರಾಜ್ಯದ ಜನರು ದಂಗೆ ಏಳುವಂಥ ಸ್ಥಿತಿ ಇದೆ. ಜನವರಿ 5ರಂದು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಇದೆ. ಡ್ರಗ್ ಮಾಫಿಯ, ಕನ್ನಡಿಗರಿಗೆ ಅಪಮಾನ, ಗೃಹಲಕ್ಷ್ಮಿ ಯೋಜನೆಯ ಅಕ್ರಮದ ಕುರಿತು ಸಮಗ್ರವಾಗಿ ಚರ್ಚಿಸಿ ಬಿಜೆಪಿ ರಾಜ್ಯಾದ್ಯಂತ ಬೀದಿಗಿಳಿದು ಹೋರಾಟ ಮಾಡುವ ಬಗ್ಗೆ ರೂಪುರೇಷೆಗಳನ್ನು ನಿರ್ಧರಿಸಲಿದ್ದೇವೆ ಎಂದು ಪ್ರಕಟಿಸಿದರು.

ಅಕ್ರಮ ವಲಸಿಗರಿಗೆ ಬೈಯಪ್ಪನಹಳ್ಳಿಯ ರಾಜೀವ್ ಗಾಂಧಿ ಹೌಸಿಂಗ್ ಸೊಸೈಟಿಯ ಮನೆಗಳನ್ನು ಕೊಡುವುದಾಗಿ ನಿರ್ಧರಿಸಿದ್ದಾಗಿ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ನಮ್ಮ ರಾಜ್ಯದ ನೀತಿ ನಿರ್ಧಾರಗಳನ್ನು ದೆಹಲಿಯಲ್ಲಿ ಕುಳಿತ ಕೇರಳ ಮೂಲದ ಕೆ.ಸಿ.ವೇಣುಗೋಪಾಲ್ ತೀರ್ಮಾನಿಸಬೇಕೇ? ಈ ರಾಜ್ಯದ ಮುಖ್ಯಮಂತ್ರಿಗಳು ನಿರ್ಧರಿಸಬೇಕೇ? ಬೈಯಪ್ಪನಹಳ್ಳಿಯ ಮನೆಗಳನ್ನು ಕನ್ನಡಿಗರಿಗೆ, ಬಡವರಿಗೆ ಕೊಡಲು ಕಟ್ಟಲಾಗಿದೆ. ಹೈಕಮಾಂಡಿಗೆ ಬೆದರಿ, ಕುರ್ಚಿ ಉಳಿಸಿಕೊಳ್ಳಲು ಮನಸೋಇಚ್ಛೆ ತೀರ್ಮಾನ ಮಾಡಲು ಸಾಧ್ಯವಿಲ್ಲ ಎಂದು ಎಚ್ಚರಿಸಿದರು. ಸಿಎಂ ನಿರ್ಧಾರಕ್ಕೆ ಕಾನೂನಿನಡಿ ಅಧಿಕಾರ ಇದೆಯೇ? ಎಂದು ಕೇಳಿದರು.

ನಿಯಮಗಳನ್ನು ಗಾಳಿಗೆ ತೂರಿ, ಅಕ್ರಮ ವಲಸಿಗರಿಗೆ ಅಕ್ರಮವಾಗಿ ಮನೆ ಕೊಡುವುದಾಗಿ ಘೋಷಿಸಿದ್ದು ಖಂಡಿತಕ್ಕೂ ಕಾನೂನಿನ ವಿರುದ್ಧವಾದುದು. ಸಿಎಂ, ಡಿಸಿಎಂ ನಿರ್ಧಾರವೇ ಅಕ್ರಮ. ಕನ್ನಡಿಗರ ಆತ್ಮಗೌರವಕ್ಕೆ ಧಕ್ಕೆ ಆಗುವಂತೆ ಯಾಕೆ ಇಂಥ ನಿರ್ಧಾರ ಮಾಡುತ್ತೀರಿ ಎಂದು ಪ್ರಶ್ನೆ ಮಾಡಿದರು. ರಾಜ್ಯದ ತೆರಿಗೆದಾರರ ಹಣದಿಂದ ಕಟ್ಟಿದ ಮನೆಗಳನ್ನು ನೀವು ಖುಷಿ ಬಂದಂತೆ ತೀರ್ಮಾನ ಮಾಡುವುದು ಸರಿಯೇ ಮುಖ್ಯಮಂತ್ರಿಗಳೇ ಎಂದು ಪ್ರಶ್ನಿಸಿದರು.

ಕೇರಳದ ಮುಖ್ಯಮಂತ್ರಿ ಪಿಣರಾಯಿಯವರ ಹೇಳಿಕೆ, ನಂತರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳಿಗೆ ಬೆದರಿಕೆ ಹಾಕಿದ ಬಳಿಕ ಹೀಗಾಗಿದೆ. ಸಿಎಂ ಅವರು ತಮ್ಮ ಕುರ್ಚಿ ಉಳಿಸುವ ಸಂದಿಗ್ಧ ಪರಿಸ್ಥಿತಿಯಲ್ಲಿದ್ದರೆ, ಉಪ ಮುಖ್ಯಮಂತ್ರಿಗಳು ಸಿಎಂ ಕುರ್ಚಿ ಪಡೆದುಕೊಳ್ಳುವ ಸಂದಿಗ್ಧ ಪರಿಸ್ಥಿತಿಯಲ್ಲಿ ಇದ್ದಾರೆ ಎಂದು ವಿಶ್ಲೇಷಿಸಿದರು.

ನಮ್ಮ ರಾಜ್ಯದ ಬಡವರೇನು ಅನ್ಯಾಯ ಮಾಡಿದ್ದಾರೆ?

ಹಿಂದೆ ಕೇರಳದ ವಯನಾಡಿನಲ್ಲಿ ಭೀಕರ ಪ್ರವಾಹ ಆದಾಗ 100 ಮನೆಗಳನ್ನು ಕಟ್ಟಿಸಿಕೊಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಿಸಿದ್ದರು. ವಯನಾಡಿನ ಆನೆ ತುಳಿತ ಸಾವಿಗೆ ತಕ್ಷಣ 15 ಲಕ್ಷ ಪರಿಹಾರ ನೀಡಿದ್ದರು. ಕೇರಳದಲ್ಲಿ ಮನೆ ಕಟ್ಟಿಸಿಕೊಡುವ, ಪರಿಹಾರ ಕೊಡುವ ನಿಮಗೆ ನಮ್ಮ ರಾಜ್ಯದ ಬಡವರೇನು ಅನ್ಯಾಯ ಮಾಡಿದ್ದಾರೆ ಎಂದು ಬಿ.ವೈ.ವಿಜಯೇಂದ್ರ ಕೇಳಿದರು.

ಕನ್ನಡಿಗರ ಹೊಟ್ಟೆ ಮೇಲೆ ಹೊಡೆಯುವ ಕೆಲಸ :

ನಮ್ಮ ರಾಜ್ಯದ ಬಡವರು, ಕಡುಬಡವರಿಗೆ ಮನೆ ಕೊಟ್ಟು ಆಮೇಲೆ ಅಕ್ಕಪಕ್ಕದ ರಾಜ್ಯದವರ ಬಗ್ಗೆ ಚಿಂತನೆ ಮಾಡಿ ಎಂದು ಆಗ್ರಹಿಸಿದರು. ಸಿದ್ದರಾಮಯ್ಯನವರು ಕನ್ನಡ ನಾಡಿನ ಮುಖ್ಯಮಂತ್ರಿಗಳು. ಇದನ್ನು ನೆನಪಿಸಬೇಕಾದುದು ದುರ್ದೈವ ಎಂದು ವಿಜಯೇಂದ್ರ ಅವರು ತಿಳಿಸಿದರು.

ಮಿತಿ ಮೀರಿದ ಡ್ರಗ್ ಮಾಫಿಯಾ :

ಮಹಾರಾಷ್ಟ್ರದಿಂದ ಪೊಲೀಸರು ಬಂದು ಮುಖ್ಯಮಂತ್ರಿಗಳ ತವರು ಜಿಲ್ಲೆಯ ಒಂದು ಮಾದಕವಸ್ತು ಕಾರ್ಖಾನೆಯ ಮೇಲೆ ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ. ಮೊನ್ನೆ ಮಹಾರಾಷ್ಟ್ರದಿಂದ ಪೊಲೀಸರು ಮತ್ತೆ ಬಂದು ಬೆಂಗಳೂರಿನಲ್ಲಿ ಕಾರ್ಖಾನೆ ವಶಕ್ಕೆ ಪಡೆದಿದ್ದಾರೆ. ರಾಜ್ಯ ಸರಕಾರ, ಪೊಲೀಸ್ ಇಲಾಖೆ, ಗೃಹ ಸಚಿವರು ಏನು ಮಾಡುತ್ತಿದ್ದಾರೆ ಎಂದು ಕೇಳಿದರು. 

ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಅಭಯ್ ಪಾಟೀಲ್, ನಿಖಿಲ್ ಕತ್ತಿ, ವಿಠ್ಠಲ ಹಲಗೇಕರ, ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸುಭಾಷ್‌ ಪಾಟೀಲ, ಮಹಾನಗರ ಜಿಲ್ಲಾಧ್ಯಕ್ಷರಾದ ಗೀತಾ ಸುತಾರ, ಮಾಜಿ ಶಾಸಕರಾದ ಸಂಜಯ್ ಪಾಟೀಲ್, ಅನಿಲ್ ಬೆನಕೆ, ಬಿಜೆಪಿ ಮುಖಂಡರಾದ ಎಂ.ಎಲ್.ಮುತ್ತೆನ್ನವರ, ಎಂ.ಬಿ.ಜಿರಲಿ, ರವಿ ಪಾಟೀಲ ಹಾಗೂ ಪ್ರಮುಖರು ಉಪಸ್ಥಿತರಿದ್ದರು

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News