ʼಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕ್ರಿಯಾ ಯೋಜನೆಗೆ ಸಚಿವ ಸಂಪುಟ ಅಸ್ತುʼ; 2,296 ಕೋಟಿ ರೂ.ಅನುದಾನ ಬಿಡುಗಡೆ : ಎಚ್.ಕೆ.ಪಾಟೀಲ್
ಬೆಂಗಳೂರು : ಬೆಂಗಳೂರಿನಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕ್ರಿಯಾ ಯೋಜನೆ ಹಾಗೂ ಮುಖ್ಯ ಮತ್ತು ಉಪ ಮುಖ್ಯ ರಸ್ತೆಗಳ ಡಾಂಬರೀಕರಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು 2,296 ಕೋಟಿ ರೂ.ಗಳ ಅನುದಾನ ಬಿಡುಗಡೆಗೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಧಾರಗಳ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯ ಅನುದಾನದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ 5 ಬೆಂಗಳೂರು ನಗರ ಪಾಲಿಕೆಗಳ ವ್ಯಾಪ್ತಿಯ ವಾರ್ಡ್ ಅಭಿವೃದ್ಧಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು 1055 ಕೋಟಿ ರೂ.ಗಳ ಮೊತ್ತದಲ್ಲಿ ಕೈಗೊಳ್ಳುವ ಕ್ರಿಯಾ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಅವರು ಹೇಳಿದರು.
ವಿಶೇಷ ಮೂಲಭೂತ ಸೌಕರ್ಯಕ್ಕೆ ಬಂಡವಾಳ ಬೆಂಬಲ ಯೋಜನೆಯಡಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ 5 ಬೆಂಗಳೂರು ನಗರ ಪಾಲಿಕೆಗಳಲ್ಲಿನ ಮುಖ್ಯ ಮತ್ತು ಉಪ ಮುಖ್ಯ ರಸ್ತೆಗಳ ಡಾಂಬರೀಕರಣ ಕಾಮಗಾರಿಗಳನ್ನು 1241.57 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳುವ ಕ್ರಿಯಾ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಚ್.ಕೆ.ಪಾಟೀಲ್ ತಿಳಿಸಿದರು.
ಬೆಂಗಳೂರು ನಗರದ ಸಮಗ್ರ ಘನತ್ಯಾಜ್ಯ ನಿರ್ವಹಣೆ ಟೆರ್ರಾ ಫಾರ್ಮ ಬಯೋಟೆಕ್ನಾಲಜೀಸ್ ಸಂಸ್ಥೆಯವರಿಗೆ ಪ್ರತಿ ಎಕರೆಗೆ 1.50 ಕೋಟಿ ರೂ.ಗಳ ಭೂ ಪರಿಹಾರ ನಿಗದಿಪಡಿಸಲು ಸಚಿವ ಸಂಪುಟ ನಿರ್ಧರಿಸಿದೆ ಎಂದು ಅವರು ಮಾಹಿತಿ ನೀಡಿದರು.