2026ರ ಎಪ್ರಿಲ್‌ನೊಳಗೆ ಜಿಲ್ಲಾ, ತಾಲೂಕು ಪಂಚಾಯತ್ ಚುನಾವಣೆಗೆ ಸಂಪುಟ ತೀರ್ಮಾನ?
ಸಾಂದರ್ಭಿಕ ಚಿತ್ರ (PTI)
ಬೆಳಗಾವಿ(ಸುವರ್ಣ ವಿಧಾನಸೌಧ): 2026ರ ಎಪ್ರಿಲ್ ತಿಂಗಳ ಒಳಗಾಗಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಮಾಡಲಾಗಿದೆ.
ಗುರುವಾರ ಇಲ್ಲಿನ ಸುವರ್ಣ ವಿಧಾನಸೌಧದಲ್ಲಿನ ಸಚಿವ ಸಂಪುಟ ಸಭಾ ಮಂದಿರದಲ್ಲಿ ಸಿಎಂ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೇಲ್ಕಂಡ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಗೊತ್ತಾಗಿದೆ.
ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗಳಿಗೆ 2016ರ ಎಪ್ರಿಲ್‌ನಲ್ಲಿ ಚುನಾವಣೆ ನಡೆದಿತ್ತು. ಅಂದು ಆಯ್ಕೆಯಾಗಿದ್ದ ಸದಸ್ಯರ ಅವಧಿ 2021ರ ಎಪ್ರಿಲ್ 27ಕ್ಕೆ ಮುಕ್ತಾಯವಾಗಿತ್ತು. ಅವಧಿ ಪೂರ್ಣಗೊಂಡ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗಳಿಗೆ ತಾಂತ್ರಿಕ ಕಾರಣಗಳಿಂದ ಚುನಾವಣೆ ನಡೆಸುವುದು ಐದು ವರ್ಷಗಳ ಕಾಲ ವಿಳಂಬವಾಗಿದ್ದು, 2026ರ ಎಪ್ರಿಲ್ ವೇಳೆ ಚುನಾವಣೆ ನಡೆಸಲು ಅನುಕೂಲವಾಗುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸಹಕಾರ ನೀಡಲು ನಿರ್ಧರಿಸಲಾಗಿದೆ.
ಈ ಹಿಂದೆಯೇ ಚುನಾವಣೆ ನಡೆಸಲು ಸಿದ್ಧತೆ ಆರಂಭಿಸಿದ್ದ ಚುನಾವಣಾ ಆಯೋಗವು ಕ್ಷೇತ್ರ ಪುನರ್‌ವಿಂಗಡಣೆ ಮಾಡಿ ಮತದಾರರ ಅಂತಿಮ ಪಟ್ಟಿ ಹಾಗೂ ಮೀಸಲಾತಿ ಕರಡು ಪ್ರಕಟಿಸಿತ್ತು. ಆದರೆ, ಹಿಂದಿನ ಬಿಜೆಪಿ ನೇತೃತ್ವದ ಸರ್ಕಾರ ಕ್ಷೇತ್ರ ಪುನರ್ ವಿಂಗಡಣೆ ಮತ್ತು ಮೀಸಲಾತಿ ಅಧಿಕಾರವನ್ನು ಚುನಾವಣಾ ಆಯೋಗದಿಂದ ಹಿಂಪಡೆದಿತ್ತು.
ಈ ಮಧ್ಯೆ ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮ ಸ್ವರಾಜ್ ಕಾಯ್ದೆಗೆ ತಿದ್ದುಪಡಿ ತಂದು 'ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ'ಕ್ಕೆ ನೀಡಿತ್ತು. ಪಂಚಾಯಿತಿಗಳ ಕ್ಷೇತ್ರ ಪುನರ್ ವಿಂಗಡಣೆ ಮತ್ತು ಮೀಸಲಾತಿ ವಿಳಂಬದ ವಿರುದ್ಧ ರಾಜ್ಯ ಚುನಾವಣಾ ಆಯೋಗ, ಹೈಕೋರ್ಟ್ ಮೊರೆ ಹೋಗಿತ್ತು. ಕ್ಷೇತ್ರಗಳ ಪುನರ್ ವಿಂಗಡಣೆ ಮತ್ತು ಮೀಸಲಾತಿ ನಿಗದಿ ಪ್ರಕ್ರಿಯೆಯನ್ನು ಒಂದು ತಿಂಗಳಲ್ಲಿ ಪೂರ್ಣಗೊಳಿಸುವುದಾಗಿ 2023ರ ಡಿಸೆಂಬರ್‌ನಲ್ಲೇ ಸರಕಾರ ಹೈಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಸಿತ್ತು.
ಅನಂತರ ಕ್ಷೇತ್ರಗಳ ಪುನರ್‌ವಿಂಗಡಣೆ ಹಾಗೂ ಸದಸ್ಯರ ಸಂಖ್ಯೆ ನಿಗದಿಪಡಿಸಲು ಸರಕಾರ ರಚಿಸಿದ್ದ ಆಯೋಗದ ಶಿಫಾರಸುಗಳನ್ನು ಅಂಗೀಕರಿಸಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಅಧಿಸೂಚನೆ ಹೊರಡಿಸಿತ್ತು. ಆದರೆ, ಮೀಸಲಾತಿ ನಿಗದಿ ಅಂತಿಮಗೊಳಿಸಿರಲಿಲ್ಲ. ಇದೀಗ ಸಚಿವ ಸಂಪುಟದ ಒಪ್ಪಿಗೆ ಹಿನ್ನೆಲೆಯಲ್ಲಿ ಸುದೀರ್ಘ ಕಾಲ ನನೆಗುದಿಗೆ ಬಿದ್ದಿದ್ದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡರಯುವುದು ಖಚಿತವಾದಂತೆ ಆಗಿದೆ.