ಬುಧವಾರ ಸಂಪುಟ ವಿಸ್ತರಣೆ ಸಾಧ್ಯತೆ?

Update: 2026-07-26 21:50 IST

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಚಿತ್ರದುರ್ಗ : ಬಹುದಿನಗಳಿಂದ ನೆನಗುದಿಗೆ ಬಿದ್ದಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಬುಧವಾರ(ಜು.29) ನಡೆಯುವುದು ಬಹುತೇಕ ಖಚಿತವಾಗಿದ್ದು, ಇದಕ್ಕೆ ಪುಷ್ಟಿ ನೀಡುವಂತೆ ಸೋಮವಾರ ಬೆಳಗ್ಗೆಯೇ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೊಸದಿಲ್ಲಿಯತ್ತ ಪ್ರಮಾಣ ಬೆಳೆಸಲಿದ್ದಾರೆ.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜ್ಯ ನಾಯಕರು ಜು.27ರ ಬೆಳಗ್ಗೆ 9:30ರ ಸುಮಾರಿಗೆ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊಸದಿಲ್ಲಿಗೆ ತೆರಳಲಿದ್ದಾರೆ.

ಸೋಮವಾರ ಸಂಜೆ ಕರ್ನಾಟಕ ಪ್ರತಿನಿಧಿಸುವ ಕೇಂದ್ರ ಸಚಿವರು ಹಾಗೂ ಸಂಸದರ ಜೊತೆ ಕರ್ನಾಟಕ ಭವನದಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಸಭೆ ನಡೆಸಲಿದ್ದಾರೆ. ಬಳಿಕ ಮಂಗಳವಾರ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಡಿ.ಕೆ.ಶಿವಕುಮಾರ್ ಭೇಟಿ ಮಾಡಿ, ನನೆಗುದಿಗೆ ಬಿದ್ದಿರುವ ಸಂಪುಟ ವಿಸ್ತರಣೆಗೆ ಅನುಮತಿ ಪಡೆಯುವ ಸಾಧ್ಯತೆ ಇದೆ. ಆಕಾಂಕ್ಷಿಗಳ ಪಟ್ಟಿ ಬಗ್ಗೆ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಚರ್ಚಿಸಿ ಅಂತಿಮಗೊಳಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬುಧವಾರ ಸಂಪುಟ ವಿಸ್ತರಣೆ ನಡೆಯುವುದು ಬಹುತೇಕ ಖಚಿತವಾಗಿದೆ ಎಂದು ಕಾಂಗ್ರೆಸ್ ಮೂಲಗಳು ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ. ಇನ್ನೊಂದೆಡೆ, ಆಕಾಂಕ್ಷಿಗಳು ಮತ್ತೆ ಮಂತ್ರಿಗಿರಿಗಾಗಿ ಕಸರತ್ತು ಆರಂಭಿಸಿದ್ದು, ಒಂದಷ್ಟು ಶಾಸಕರು ಈಗಾಗಲೇ ಹೊಸದಿಲ್ಲಿಗೆ ತೆರಳಿದ್ದು, ಮಂತ್ರಿ ಸ್ಥಾನಕ್ಕಾಗಿ ಕೊನೆಯ ಕ್ಷಣದ ಲಾಬಿ ನಡೆಸಲು ಮುಂದಾಗಿದ್ದಾರೆ ಎಂದು ಗೊತ್ತಾಗಿದೆ.

ಕಳೆದ ವಾರವೇ ಸಂಪುಟ ವಿಸ್ತರಣೆ ಆಗಲಿದೆ ಎನ್ನುವ ವಿಶ್ವಾಸ ಹಲವು ಶಾಸಕರಲ್ಲಿತ್ತು. ಆದರೆ, ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ರಾಹುಲ್ ಗಾಂಧಿ ನೇತೃತ್ವದಲ್ಲಿ ಹೋರಾಟ ಇದ್ದ ಕಾರಣ ಸಂಪುಟ ವಿಸ್ತರಣೆ ಚರ್ಚೆ ಸಾಧ್ಯವಾಗದೇ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವಾಪಸಾಗಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News