ಸಂಪುಟ ವಿಸ್ತರಣೆ ಕುರಿತ ಚರ್ಚೆ ತಾತ್ಕಾಲಿಕ ಮುಂದೂಡಿಕೆ: ಬಿ.ಕೆ. ಹರಿಪ್ರಸಾದ್
ಹೊಸದಿಲ್ಲಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಪಕ್ಷದ ವರಿಷ್ಠರೊಂದಿಗೆ ನಡೆಯಬೇಕಿದ್ದ ಚರ್ಚೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ತಿಳಿಸಿದರು.
ಗುರುವಾರ ಹೊಸದಿಲ್ಲಿಯಲ್ಲಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ನಿವಾಸದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಜೊತೆ ಸಚಿವ ಸಂಪುಟ ವಿಸ್ತರಣೆ ಹಾಗೂ ಪಕ್ಷ ಸಂಘಟನೆಯ ವಿಚಾರದ ಕುರಿತು ಒಂದು ಸುತ್ತಿನ ಚರ್ಚೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತುರ್ತು ಕಾರಣಗಳಿಂದಾಗಿ ಬೆಂಗಳೂರಿಗೆ ತೆರಳುತ್ತಿದ್ದಾರೆ. ರಾಹುಲ್ ಗಾಂಧಿ ಹಾಗೂ ವೇಣುಗೋಪಾಲ್ ಅವರೊಂದಿಗೆ ನಾವು ಚರ್ಚೆ ನಡೆಸಿದ್ದೇವೆ. ಪಕ್ಷದ ವರಿಷ್ಠರು ಮತ್ತೊಮ್ಮೆ ದಿನಾಂಕ ನಿಗದಿ ಮಾಡಲಿದ್ದು, ಪುನಃ ಬಂದು ಚರ್ಚೆ ಮಾಡುತ್ತೇವೆ. ಈ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆ ಕುರಿತ ತೀರ್ಮಾನ ತಾತ್ಕಾಲಿಕವಾಗಿ ಮುಂದೂಡಿಕೆಯಾಗಿದೆ ಎಂದು ಅವರು ತಿಳಿಸಿದರು.
ವರಿಷ್ಠರೊಂದಿಗೆ ಚರ್ಚೆ ವೇಳೆ ಸಚಿವ ಸಂಪುಟ ವಿಸ್ತರಣೆ ಜೊತೆಗೆ, ಭಾರತ್ ಜೋಡೊ ಯುವಕರ ಸಂಘಗಳ ರಚನೆ, ಪಕ್ಷದ ಸಂಘಟನೆ, ಇತ್ತೀಚೆಗೆ ನಡೆದ ವಿಧಾನಪರಿಷತ್ ಚುನಾವಣೆ ಸೇರಿದಂತೆ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ವಿದ್ಯಾಮಾನಗಳ ಕುರಿತು ಸುದೀರ್ಘವಾಗಿ ಚರ್ಚೆ ನಡೆಸಲಾಯಿತು ಎಂದು ತಿಳಿದು ಬಂದಿದೆ.
ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗೆ 40-50 ಮಂದಿ ಆಕಾಂಕ್ಷಿಗಳಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆ, ಪಕ್ಷದ ಸಂಘಟನೆ, ಸರಕಾರದ ಕಾರ್ಯವೈಖರಿಯನ್ನು ಮತ್ತಷ್ಟು ಸುಧಾರಿಸುವ ನಿಟ್ಟಿನಲ್ಲಿ ವರಿಷ್ಠರು ಸಂಪುಟಕ್ಕೆ ಉತ್ಸಾಹಿಗಳನ್ನು ಆಯ್ಕೆ ಮಾಡಲು ಬಯಸಿದ್ದಾರೆ ಎನ್ನಲಾಗಿದೆ. ಈಗಾಗಲೆ, ಸಚಿವರಾಗಿ ಕೆಲಸ ಮಾಡಿರುವವರ ಪೈಕಿ ಬಹುತೇಕರನ್ನು ಪಕ್ಷದ ಕೆಲಸಕ್ಕೆ ನಿಯೋಜಿಸಲು ಚಿಂತನೆ ನಡೆದಿದೆ ಎಂದು ಹೇಳಲಾಗುತ್ತಿದೆ.
ಕೆಪಿಸಿಸಿಗೆ ನೂತನ ಅಧ್ಯಕ್ಷರು ನೇಮಕವಾಗಿರುವ ಹಿನ್ನೆಲೆಯಲ್ಲಿ ಹೊಸ ಪದಾಧಿಕಾರಿಗಳನ್ನು ಆಯ್ಕೆ ಮಾಡುವುದು, ಕೆಪಿಸಿಸಿ ಮಹಿಳಾ ಘಟಕಕ್ಕೆ ನೂತನ ಅಧ್ಯಕ್ಷೆ, ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ ನೂತನ ಅಧ್ಯಕ್ಷರ ನೇಮಕದ ಕುರಿತು ವರಿಷ್ಠರೊಂದಿಗೆ ಚರ್ಚೆಗಳು ನಡೆದಿವೆ ಎಂದು ಹೇಳಲಾಗುತ್ತಿದೆ.