ಸಚಿವ ಸಂಪುಟ ರಚನೆ: ವರಿಷ್ಠರ ಜತೆ ಉಭಯ ನಾಯಕರ ಸಮಾಲೋಚನೆ
ಬೆಂಗಳೂರು : ಡಿ.ಕೆ.ಶಿವಕುಮಾರ್ ನೇತೃತ್ವದ ನೂತನ ಸರಕಾರದ ಸಂಪುಟ ರಚನೆ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹೊಸಬರ ನೇಮಕ ಹಾಗೂ ಉಪಮುಖ್ಯಮಂತ್ರಿ ಸ್ಥಾನಗಳ ಕುರಿತಂತೆ ಪಕ್ಷದ ಹೈಕಮಾಂಡ್ ಜತೆ ಚರ್ಚಿಸಿ ಎಲ್ಲವನ್ನು ಅಂತಿಮಗೊಳಿಸಲು ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಸ್ತುವಾರಿ ಸಿಎಂ ಸಿದ್ದರಾಮಯ್ಯ ಹೊಸದಿಲ್ಲಿಯಲ್ಲಿ ಬೀಡುಬಿಟ್ಟಿದ್ದಾರೆ.
ಜೂ. 3ರ ಸಂಜೆ 4:05 ಗಂಟೆಗೆ ನೂತನ ಮುಖ್ಯಮಂತ್ರಿಗಳ ಪದಗ್ರಹಣ ಕಾರ್ಯಕ್ರಮ ನಿಗದಿಯಾಗಿದ್ದು, ಈ ವೇಳೆ 8ರಿಂದ 10 ಮಂದಿ ಸಚಿವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲು ಹೈಕಮಾಂಡ್ ನಿರ್ಧರಿಸಿದ್ದು, ಮೊದಲ ಹಂತದಲ್ಲಿ ಯಾರನ್ನೆಲ್ಲಾ ಸಚಿವರನ್ನಾಗಿಸಬೇಕೆಂಬ ಕುರಿತು ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಜತೆ ಚರ್ಚಿಸಿ ಪಟ್ಟಿ ಅಂತಿಮಗೊಳಿಸುವ ಸಾಧ್ಯತೆಗಳಿವೆ.
ಈ ಮಧ್ಯೆ ಡಿ.ಕೆ.ಶಿವಕುಮಾರ್ ನೇತೃತ್ವದ ಸರಕಾರದಲ್ಲಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಪ್ರಸ್ತಾವನ್ನು ಬಹುತೇಕ ಕೈಬಿಡುವ ನಿರ್ಧಾರಕ್ಕೆ ಬಂದಿದ್ದರೂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಗೆ ಪಟ್ಟು ಹಿಡಿದಿದ್ದಾರೆ ಎಂದು ಹೇಳಲಾಗಿದೆ. ಜತೆಗೆ ಮೊದಲ ಹಂತದ ಸಂಪುಟ ರಚನೆಯಲ್ಲಿ ತಮ್ಮ ಬೆಂಬಲಿಗರಿಗೆ ಹೆಚ್ಚಿನ ಸ್ಥಾನ ನೀಡುವಂತೆಯೂ ಸಿದ್ದರಾಮಯ್ಯ ಹೈಕಮಾಂಡ್ ಮುಂದೆ ಬೇಡಿಕೆ ಮಂಡಿಸಿದ್ದಾರೆ ಎಂದು ಗೊತ್ತಾಗಿದೆ.
ಉಭಯ ನಾಯಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ ಅವರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಆ ಬಳಿಕ ಸಚಿವರ ಪಟ್ಟಿಯನ್ನು ಅಂತಿಮಗೊಳಿಸಿಕೊಂಡು ನಂತರ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಭೇಟಿ ಮಾಡಿ ಅವರ ಒಪ್ಪಿಗೆ ಪಡೆದು, ಸಚಿವರ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆಗಳಿವೆ.