×
Ad

ಬೆಂಗಳೂರು ಕಾಲ್ತುಳಿತ | ಪೊಲೀಸ್ ಅಧಿಕಾರಿಗಳ ಮೇಲೆ ಇಲಾಖಾ ವಿಚಾರಣೆ ನಡೆಸಲು ಸಂಪುಟ ತೀರ್ಮಾನ

Update: 2025-07-24 16:48 IST

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ

ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ತಂಡ ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದ ಹಿನ್ನೆಲೆಯಲ್ಲಿ ಜೂ.4ರಂದು ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಆರ್‌ಸಿಬಿ, ರಾಜ್ಯ ಕ್ರಿಕೆಟ್ ಅಸೋಸಿಯೇಷನ್(ಕೆಎಸ್‍ಸಿಎ), ಡಿಎನ್‍ಎ ಸಂಸ್ಥೆ ವಿರುದ್ಧ ಕಾನೂನು ಕ್ರಮ ಹಾಗೂ ಸರಕಾರಿ ಅಧಿಕಾರಿಗಳ ವಿರುದ್ಧ ಇಲಾಖಾ ವಿಚಾರಣೆ ನಡೆಸಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ.

ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಈ ವಿಷಯವನ್ನು ತಿಳಿಸಿದರು.

ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಡಿ.ಕುನ್ಹಾ ನೇತೃತ್ವದ ಏಕ ಸದಸ್ಯ ವಿಚಾರಣಾ ಆಯೋಗ ಸಲ್ಲಿಸಿರುವ ವರದಿಯನ್ನು ಸಚಿವ ಸಂಪುಟ ಅಂಗೀಕರಿಸಿದೆ. ಆರ್‌ಸಿಬಿ, ಕೆಎಸ್‍ಸಿಎ ಹಾಗೂ ಡಿಎನ್‍ಎ ಸಂಸ್ಥೆ ವಿರುದ್ಧ ಕಾನೂನು ರೀತಿ ಸಿವಿಲ್ ಅಥವಾ ಕ್ರಿಮಿನಲ್ ಪ್ರಕರಣ ದಾಖಲು ಮಾಡಲು ಮತ್ತು ಸರಕಾರಿ ಅಧಿಕಾರಿಗಳ ವಿರುದ್ಧ ಇಲಾಖಾ ವಿಚಾರಣೆ ನಡೆಸಲು ವರದಿಲ್ಲಿ ಶಿಫಾರಸ್ಸು ಮಾಡಲಾಗಿದೆ ಎಂದು ಅವರು ಹೇಳಿದರು.

ಅದರಂತೆ, ಆರ್‌ಸಿಬಿ, ಡಿಎನ್‍ಎ ಸಂಸ್ಥೆ, ರಾಜ್ಯ ಕ್ರಿಕೆಟ್ ಸಂಸ್ಥೆ ಹಾಗೂ ಅದರ ಅಧ್ಯಕ್ಷ ರಘುರಾಮ್ ಭಟ್, ಮಾಜಿ ಕಾರ್ಯದರ್ಶಿ ಎ.ಶಂಕರ್, ಮಾಜಿ ಖಜಾಂಚಿ ಜೈರಾಮ್, ಆರ್‌ಸಿಬಿ ತಂಡದ ರಾಜೇಶ್ ಮೆನನ್, ಡಿಎನ್‍ಎ ನೆಟ್ವರ್ಕ್ ಲಿಮಿಟೆಡ್‍ನ ವ್ಯವಸ್ಥಾಪಕ ನಿರ್ದೇಶಕ ವೆಂಕಟವರ್ಧನ್, ಉಪಾಧ್ಯಕ್ಷ ಸುನೀಲ್ ಮಾಥುರ್ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಎಚ್.ಕೆ.ಪಾಟೀಲ್ ತಿಳಿಸಿದರು.

ಇಲಾಖಾ ವಿಚಾರಣೆ: ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಬಿ.ದಯಾನಂದ್, ಹೆಚ್ಚುವರಿ ಪೊಲೀಸ್ ಆಯುಕ್ತ(ಪೂರ್ವ)ರಾಗಿದ್ದ ವಿಕಾಸ್ ಕುಮಾರ್ ವಿಕಾಸ್, ಕೇಂದ್ರ ವಿಭಾಗದ ಡಿಸಿಪಿಯಾಗಿದ್ದ ಶೇಖರ್ ಎಚ್.ಟೆಕ್ಕನವರ್, ಕಬ್ಬನ್ ಪಾರ್ಕ್ ಉಪ ವಿಭಾಗದ ಎಸಿಪಿ ಸಿ.ಬಾಲಕೃಷ್ಣ, ಕಬ್ಬನ್ ಪಾರ್ಕ್ ಠಾಣೆಯ ಪೊಲೀಸ್ ಇನ್‍ಸ್ಪೆಕ್ಟರ್ ಎ.ಕೆ.ಗಿರೀಶ್ ವಿರುದ್ಧ ಇಲಾಖಾ ವಿಚಾರಣೆ ನಡೆಸಲು ಗೃಹ ಇಲಾಖೆಗೆ ಸೂಚಿಸಲು ಸಚಿವ ಸಂಪುಟ ನಿರ್ಧರಿಸಿದೆ ಎಂದು ಅವರು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News