ಅಕ್ರಮ ಗಣಿಗಾರಿಕೆ ಪ್ರಕರಣಗಳ ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆ : ಸಚಿವ ಸಂಪುಟ ನಿರ್ಧಾರ?
ಬೆಂಗಳೂರು, ಆ.19: ರಾಜ್ಯದಲ್ಲಿ ನಡೆದಿರುವ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಎಸ್.ಐ.ಟಿ ದಾಖಲು ಮಾಡಿರುವ 109 ಪ್ರಕರಣಗಳ ತ್ವರಿತ ವಿಚಾರಣೆ ಹಾಗೂ ಆರ್ಥಿಕ ನಷ್ಟ ವಸೂಲಾತಿಗೆ ಸೀಮಿತವಾಗಿ ವಿಶೇಷ ನ್ಯಾಯಾಲಯ ಸ್ಥಾಪನೆ ಮಾಡಲು ಸಚಿವ ಸಂಪುಟ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.
ಮಂಗಳವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಅಧ್ಯಕ್ಷತೆಯ ಸಂಪುಟ ಉಪ ಸಮಿತಿ ಸಲ್ಲಿಸಿದ ಶಿಫಾರಸ್ಸು ಗಳ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
ಆರ್ಥಿಕ ನಷ್ಟ ವಸೂಲಿಗೆ ರಾಜ್ಯ ವ್ಯಾಪಿ ಒಂದೇ ವಸೂಲಿ ಪ್ರಾಧಿಕಾರ ರಚನೆಗೆ ನೂತನ ಕಾಯ್ದೆ ರೂಪಿಸಲು ಸಂಪುಟ ಉಪ ಸಮಿತಿ ಮಾಡಿರುವ ಶಿಫಾರಸ್ಸಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎನ್ನಲಾಗಿದೆ.
ಅಕ್ರಮ ಗಣಿಗಾರಿಕೆಯಿಂದ ರಾಜ್ಯ ಸರಕಾರಕ್ಕೆ ಅಪಾರ ಪ್ರಮಾಣದ ಆರ್ಥಿಕ ನಷ್ಟಕ್ಕೆ ಕಾರಣವಾದ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಸಂಪುಟ ಉಪ ಸಮಿತಿ ಮಾಡಿರುವ ಶಿಫಾರಸ್ಸಿಗೂ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ತಿಳಿದು ಬಂದಿದೆ.
ಅಕ್ರಮ ಗಣಿಗಾರಿಕೆಯಿಂದಾಗಿ ಸರಕಾರಕ್ಕೆ ಸುಮಾರು 1.50 ಲಕ್ಷ ಕೋಟಿ ರೂ.ಗಳ ಆರ್ಥಿಕ ನಷ್ಟವಾಗಿದೆ. ಅಲ್ಲದೇ, ಈ ಪ್ರಕರಣಗಳ ವಿಚಾರಣೆಯು ಮಂದಗತಿಯಲ್ಲಿ ಸಾಗುತ್ತಿದೆ. ಅಕ್ರಮ ಗಣಿಗಾರಿಕೆ ವಿರೋಧಿಸಿ ಕಾಂಗ್ರೆಸ್ ಪಕ್ಷ ಬೆಂಗಳೂರಿನಿಂದ ಬಳ್ಳಾರಿ ವರೆಗೆ ಪಾದಯಾತ್ರೆಯನ್ನು ಮಾಡಿತ್ತು ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್, ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಹಿನ್ನೆಲೆಯಲ್ಲಿ ಅವರು ಸಂಪುಟ ಉಪ ಸಮಿತಿ ರಚನೆ ಮಾಡಿದ್ದರು.