×
Ad

ಪಂಚಾಯತ್ ಮಟ್ಟದಲ್ಲಿ ‘ಅನರ್ಹ ಬಿಪಿಎಲ್ ಕಾರ್ಡ್‍ಗಳನ್ನು ರದ್ದುಪಡಿಸಿ’ : ಸಿಎಂ ಸಿದ್ದರಾಮಯ್ಯ

Update: 2025-09-08 20:14 IST

ಬೆಂಗಳೂರು, ಸೆ.8: ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡುದಾರರನ್ನು ಗುರುತಿಸಿ, ಅಂತಹವರ ಕಾರ್ಡ್ ರದ್ದುಪಡಿಸುವ ಕಾರ್ಯವನ್ನು ಪಂಚಾಯತ್ ಮಟ್ಟದಲ್ಲಿ ನಡೆಸಬೇಕು. ಈ ಕುರಿತಾಗಿ ಜಾರಿಯಲ್ಲಿರುವ ಮಾನದಂಡಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸೋಮವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಹಾಗೆಯೇ ಅಕ್ಕಿಯ ಬದಲು ಪ್ರದೇಶವಾರು ಇತರ ಧಾನ್ಯಗಳನ್ನು ನೀಡುವ ಬಗ್ಗೆ ಪರಿಶೀಲನೆ ಮಾಡಬೇಕು ಎಂದು ಸಲಹೆ ನೀಡಿದರು.

ಮರಣ ಹೊಂದಿದ ಗ್ಯಾರೆಂಟಿ ಯೋಜನೆಗಳ ಫಲಾನುಭವಿ ಪಟ್ಟಿಯನ್ನು ಪ್ರತಿ ತಿಂಗಳು ಪಂಚಾಯತ್ ಹಂತದಲ್ಲಿ ನವೀಕರಿಸಿ ಸಂಬಂಧಪಟ್ಟ ಬ್ಯಾಂಕುಗಳಿಗೆ ಮಾಹಿತಿಯನ್ನು ಒದಗಿಸಬೇಕು. ಮರಣ ಹೊಂದಿದ ಫಲಾನುಭವಿಗಳ ಹೆಸರನ್ನು ಪಟ್ಟಿಯಿಂದ ತೆಗೆದು ಹಾಕಬೇಕು. ಪಂಚಾಯತ್ ಮಟ್ಟದಲ್ಲಿ ಫಲಾನುಭವಿಗಳ ಸೇರ್ಪಡೆ ಮತ್ತು ತೆಗೆದು ಹಾಕುವಿಕೆಗೆ ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದರು.

ಸರಕು ಮತ್ತು ಸೇವಾ ತೆರಿಗೆ (ಜಿಎಸ್‍ಟಿ) ರಿಟರ್ನ್ ಸಲ್ಲಿಸುವವರು ಗೃಹಲಕ್ಷ್ಮೀ ಯೋಜನೆ ಲಾಭ ಪಡೆಯುವ ಕುರಿತು ಇರುವ ಗೊಂದಲವನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕು. ಗ್ಯಾರಂಟಿ ಯೋಜನೆಗಳ ಲಾಭ ಅರ್ಹ ಫಲಾನುಭವಿಗಳಿಗೆ ತಲುಪಿಸಲು ಆಂದೋಲನ ಮಾದರಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಅವರು ತಿಳಿಸಿದರು.

‘ಗ್ಯಾರಂಟಿ ಯೋಜನೆ ಅಡಿ ಇದುವರೆಗೆ 97,813 ಕೋಟಿ ರೂ. ಅನುದಾನವನ್ನು ಖರ್ಚು ಮಾಡಲಾಗಿದೆ. ಇದರಲ್ಲಿ ಗೃಹಲಕ್ಷ್ಮೀ ಯೋಜನೆಯಡಿ 1.24 ಕೋಟಿ ಫಲಾನುಭವಿಗಳಿಗೆ ಒಟ್ಟು 50,005 ಕೋಟಿ ರೂ., ಗೃಹಜ್ಯೋತಿಯಡಿ 1.64 ಕೋಟಿ ಫಲಾನುಭವಿಗಳಿಗೆ 18,139 ಕೋಟಿ ರೂ., ಯುವನಿಧಿಯಡಿ 2.55ಲಕ್ಷ ಫಲಾನುಭವಿಗಳಿಗೆ 623 ಕೋಟಿ ರೂ., ಶಕ್ತಿ ಯೋಜನೆಯಡಿ 544 ಕೋಟಿ ಫಲಾನುಭವಿಗಳಿಗೆ 13,903 ಕೋಟಿ ರೂ. ಹಾಗೂ ಅನ್ನಭಾಗ್ಯ ಯೋಜನೆಯಡಿ 72.02ಕೋಟಿ ಫಲಾನುಭವಿಗಳಿಗೆ ಒಟ್ಟು 11,821.17 ಕೋಟಿ ರೂ. ವೆಚ್ಚ ಮಾಡಲಾಗಿದೆ’

-ಸಿದ್ದರಾಮಯ್ಯ, ಮುಖ್ಯಮಂತ್ರಿ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News