×
Ad

ಹಿಂದುಳಿದ ವರ್ಗಗಳ ಆಯೋಗದ ರಿಮೋಟ್ ಕಂಟ್ರೋಲ್ ಬೇರೆಲ್ಲೋ ಇದೆ : ಛಲವಾದಿ ನಾರಾಯಣಸ್ವಾಮಿ

Update: 2025-09-23 18:42 IST

ಬೆಂಗಳೂರು, ಸೆ.23: ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ರಿಮೋಟ್ ಕಂಟ್ರೋಲ್ ಬೇರೆಲ್ಲೋ ಇದೆ. ಈ ಆಯೋಗವನ್ನು ಆಯೋಗದಲ್ಲಿ ಇರುವವರು ನಡೆಸುತ್ತಿಲ್ಲ, ಬದಲಾಗಿ ಬೇರೆಯವರು ನಡೆಸುತ್ತಿದ್ದಾರೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.

ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಇನ್ನೂ 15 ಜಾತಿಗಳಿಗೆ ಕ್ರೈಸ್ತ ಟ್ಯಾಗ್ ನೀಡಿರುವುದನ್ನು ರದ್ದು ಮಾಡುವಂತೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ನಾಯ್ಕ್ ಅವರಿಗೆ ತಮ್ಮ ನೇತೃತ್ವದ ಬಿಜೆಪಿ ನಿಯೋಗ ಮನವಿ ಸಲ್ಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಿನ್ನೆ ಪ್ರಾರಂಭವಾಗಿದೆ. ಈ ಸಮೀಕ್ಷೆ ಒಂದು ಗೊಂದಲದ ಗೂಡಾಗಿದೆ. ಗೊಂದಲ ಪರಿಹರಿಸಲು ಕೋರಿ ಅಧ್ಯಕ್ಷರನ್ನು ಭೇಟಿ ಮಾಡಿ ಮನವಿ ಕೊಟ್ಟಿದ್ದೇವೆ. ಬ್ರಾಹ್ಮಣ ಕ್ರೈಸ್ತರು, ಲಿಂಗಾಯತ ಕ್ರೈಸ್ತರು, ಒಕ್ಕಲಿಗ, ವೀರಶೈವ ಮೊದಲಾದ ಎಲ್ಲರನ್ನೂ ಕ್ರೈಸ್ತ ಎಂದು ಹೆಸರಿಸಿದ್ದಾರೆ. ಹೊಲೆಯ, ಮಾದಿಗ, ಬಂಜಾರ ಕ್ರೈಸ್ತ, ಬೋವಿ ಕ್ರೈಸ್ತ ಎಲ್ಲವನ್ನೂ ಸೇರಿಸಿದ್ದರು ಎಂದು ಅವರು ಆಕ್ಷೇಪಿಸಿದರು.

ಕ್ರೈಸ್ತರಾಗಿ ಮತಾಂತರ ಹೊಂದಿದವರ ಮೂಲಜಾತಿ ಹಾಗೇ ಉಳಿಯುತ್ತದೆ ಎಂದು ಹೇಳಿದ್ದಾರೆ. ಅದು ಹೇಗೆ ಉಳಿಯಲು ಸಾಧ್ಯ? ಮೂಲ ಜಾತಿಯಲ್ಲೆ ಮೀಸಲಾತಿ ಕೊಡಬೇಕೇ ಎಂದು ತೀರ್ಮಾನ ಮಾಡುತ್ತಾರಂತೆ. ದಲಿತರು ಕ್ರೈಸ್ತರಾಗಿ ಮತಾಂತರವಾದರೆ ಅವರನ್ನು ದಲಿತರೆಂದು ಪರಿಗಣಿಸಲಾಗುವುದಿಲ್ಲ ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದರು.

ಸದಾಶಿವ ಆಯೋಗ, ನಾಗಮೋಹನ್ ದಾಸ್ ಆಯೋಗ, ಕಾಂತರಾಜು ಆಯೋಗ, ಜಯಪ್ರಕಾಶ್ ಹೆಗ್ಡೆ ಆಯೋಗದಲ್ಲಿ ಪರಿಶಿಷ್ಟ ಜಾತಿಗೆ ಕ್ರಿಶ್ಚಿಯನ್ ಪದ ಇರಲಿಲ್ಲ. ಈಗ ಎಲ್ಲಿಂದ ಯಾಕೆ ಹುಟ್ಟಿದೆ? ಇವತ್ತು ಸಂಜೆಯೇ ಸಭೆ ಕರೆದು ತೀರ್ಮಾನ ಮಾಡುವುದಾಗಿ ಅಧ್ಯಕ್ಷರು ತಿಳಿಸಿದ್ದಾರೆ. ಇವತ್ತೇ ತೀರ್ಮಾನ ಆಗದಿದ್ದರೆ ಮುಂದೆ ಆಗುವ ಅನಾಹುತಕ್ಕೆ ಆಯೋಗವೇ ಹೊಣೆ ಎಂದು ಅವರು ಎಚ್ಚರಿಕೆ ನೀಡಿದರು.

ನಿಯೋಗದಲ್ಲಿ ಕೇಂದ್ರದ ಮಾಜಿ ಸಚಿವ ಎ.ನಾರಾಯಣಸ್ವಾಮಿ, ಶಾಸಕ ವಿ.ಸುನಿಲ್ ಕುಮಾರ್, ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್, ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್, ಮಾಜಿ ಸಂಸದ ಎಸ್.ಮುನಿಸ್ವಾಮಿ, ಮಾಜಿ ಶಾಸಕ ವೈ.ಸಂಪಂಗಿ, ವಿಧಾನಪರಿಷತ್ ಮಾಜಿ ಸದಸ್ಯ ಎಂ.ಡಿ.ಲಕ್ಷ್ಮೀ ನಾರಾಯಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News