ಕಬ್ಬು ಬೆಳೆಗಾರರಿಗೆ ದರ ನಿಗದಿ ವಿಚಾರ; ಸಂಪುಟ ಸಭೆಯಲ್ಲಿ ಚರ್ಚೆ: ಚಲುವರಾಯಸ್ವಾಮಿ
ಚಲುವರಾಯಸ್ವಾಮಿ
ಬೆಂಗಳೂರು : ಕಬ್ಬ ಬೆಳೆಗಾರರಿಗೆ ದರ ನಿಗದಿ ಮಾಡುವ ವಿಚಾರ ಸಂಬಂಧ ನಾಳೆ(ನ.6) ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.
ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಬ್ಬು ಬೆಳೆಗಾರರು ನಡೆಸುತ್ತಿರುವ ಹೋರಾಟ ನ್ಯಾಯಯುತವಾಗಿದೆ. ಇದನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿದೆ. ನಾಳೆ ನಡೆಯಲಿರುವ ಸಂಪುಟ ಸಭೆಯಲ್ಲಿ ಸಕ್ಕರೆ ಸಚಿವರು ಸೇರಿದಂತೆ ಆ ಭಾಗದ ಸಚಿವರು ಕೂಡ ಚರ್ಚೆ ನಡೆಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತಿಮ ನಿರ್ಧಾರ ಕೈಗೊಂಡರೂ ಕೇಂದ್ರ ಸರಕಾರವೇ ಕಬ್ಬಿನ ದರ ನಿಗದಿಪಡಿಸಬೇಕಿದೆ ಎಂದರು.
ರೈತರ ಹೋರಾಟದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪಾಲ್ಗೊಂಡಿದ್ದಾರೆ. ಆದರೆ, ವಾಸ್ತವದಲ್ಲಿ ಈ ಬಗ್ಗೆ ಅವರಿಗೆ ಮಾಹಿತಿ ಕೊರತೆ ಇದೆ. ಈ ಹಿಂದೆ ಆಡಳಿತ ನಡೆಸಿದ ಬಿಜೆಪಿ ಸರಕಾರದಲ್ಲಿ ಕಬ್ಬು ಬೆಳೆಗಾರರಿಗೆ ಎಷ್ಟು ಪರಿಹಾರ ಕೊಟ್ಟರು? ಎಂಬುದನ್ನು ಪ್ರಶ್ನಿಸಬೇಕಿದೆ ಎಂದರು.
5 ಲಕ್ಷ ಪರಿಹಾರ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದ ಕೆ.ಆರ್.ಪೇಟೆ ತಾಲೂಕಿನ ಮೂಡನಹಳ್ಳಿ ಗ್ರಾಮದ ಮಂಜೇಗೌಡ ಅವರ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ ನೀಡುವುದಾಗಿ ಕೃಷಿ ಸಚಿವ ಚೆಲುವರಾಯಸ್ವಾಮಿ ಘೋಷಿಸಿದ್ದಾರೆ.
ನಗರದ ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರಕ್ಕೆ ತೆರಳಿದ ಮೃತ ರೈತನ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಸಚಿವರು, 5 ಲಕ್ಷ ರೂ ಪರಿಹಾರ ನೀಡುವುದಾಗಿ ಭರವಸೆ ನೀಡಿದರು. ಹೆಚ್ಚುವರಿ ಪರಿಹಾರಕ್ಕಾಗಿ ಮುಖ್ಯಮಂತ್ರಿಗಳ ಜೊತೆಗೆ ಚರ್ಚಿಸುವುದಾಗಿ ಭರವಸೆ ನೀಡಿದರು.