ಮತಗಳ್ಳತನ ಆರೋಪ: ದಾಖಲೆಗಳನ್ನು ಒದಗಿಸುವಂತೆ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯ ಚುನಾವಣಾಧಿಕಾರಿ ಪತ್ರ
ಮತದಾರರ ಪಟ್ಟಿ ಅಕ್ರಮದ ಕುರಿತು ಪರಿಶೀಲನೆ ನಡೆಸಲು ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಮನವಿ
ಬೆಂಗಳೂರು: ಕಾಂಗ್ರೆಸ್ ಪಕ್ಷದ ವತಿಯಿಂದ ಶುಕ್ರವಾರ ಸಲ್ಲಿಸಿರುವ ಮನವಿ ಪತ್ರದಲ್ಲಿ ಯಾವುದೆ ಸಂಬಂಧಪಟ್ಟ ದಾಖಲೆಗಳನ್ನು ಸಲ್ಲಿಸಿಲ್ಲ. ಆದುದರಿಂದ, ನಿಮ್ಮ ದೂರಿಗೆ ಸಂಬಂಧಿಸಿದ ದಾಖಲೆಗಳನ್ನು ಹಾಗೂ ಪ್ರಮಾಣ ಪತ್ರವನ್ನು ಸಲ್ಲಿಸುವಂತೆ ಸೂಚಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಪತ್ರ ಬರೆದಿದ್ದಾರೆ.
ದೂರು ನೀಡದೆ ದಿಲ್ಲಿಗೆ ತೆರಳಿದ ರಾಹುಲ್ ಗಾಂಧಿ:
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನವಾಗಿದೆ ಎಂದು ಆರೋಪಿಸಿ ಗುರುವಾರ ದಿಲ್ಲಿಯಲ್ಲಿ ಪತ್ರಿಕಾಗೋಷ್ಠಿ ಹಾಗೂ ಶುಕ್ರವಾರ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಸಿದ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಚುನಾವಣಾ ಆಯೋಗಕ್ಕೆ ದೂರು ನೀಡದೆ ಹಿಂದಿರುಗಿದ್ದು ಚರ್ಚೆಗೆ ಗ್ರಾಸವಾಗಿದೆ.
ಮಹದೇವಪುರ ಕ್ಷೇತ್ರದಲ್ಲಿ ಐದು ವಿಧದಲ್ಲಿ ಮತಗಳ್ಳತನ ಆಗಿದೆ ಎಂದು ಕೇಂದ್ರ ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದರು. ಆದರೆ, ರಾಜ್ಯದಲ್ಲಿ ಆಗಿರುವ ಚುನಾವಣಾ ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯದ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡದೆ ಹೊಸದಿಲ್ಲಿಗೆ ಹಿಂದಿರುಗಿದರು.
ಪ್ರತಿಭಟನಾ ಸಭೆ ಮುಗಿಯುತ್ತಿದ್ದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ನಾವೆಲ್ಲ ಮುಖ್ಯ ಚುನಾವಣಾಧಿಕಾರಿ ಕಚೇರಿಗೆ ತೆರಳಿ ದೂರು ಸಲ್ಲಿಸುತ್ತಿದ್ದೇವೆ ಎಂದು ಘೋಷಿಸಿದ್ದರು. ಆದರೆ, ಕಾಂಗ್ರೆಸ್ ರಾಷ್ಟ್ರೀಯ ನಾಯಕರ ಪೈಕಿ ಒಬ್ಬರೂ ಚುನಾವಣಾಧಿಕಾರಿಗೆ ದೂರು ಸಲ್ಲಿಸಲು ಹೋಗಲಿಲ್ಲ. ಬಳಿಕ ಸಂಜೆ ಡಿ.ಕೆ.ಶಿವಕುಮಾರ್ ನೇತೃತ್ವದ ನಿಯೋಗ ಚುನಾವಣಾಧಿಕಾರಿಗೆ ಭೇಟಿ ಮಾಡಿ ದೂರು ದಾಖಲಿಸಿತು.