×
Ad

ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

Update: 2026-06-11 19:01 IST

PC : x/@DKShivakumar

ಹೊಸದಿಲ್ಲಿ : ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಡಿ.ಕೆ.ಶಿವಕುಮಾರ್, ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾಗಿ ರಾಜ್ಯದ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದರು.

ಗುರುವಾರ ಹೊಸದಿಲ್ಲಿಯಲ್ಲಿರುವ ಪ್ರಧಾನಿ ಕಚೇರಿಯಲ್ಲಿ ನರೇಂದ್ರ ಮೋದಿಯನ್ನು ಭೇಟಿಯಾದ ಅವರು, ಮೂಲಸೌಕರ್ಯ, ಹೂಡಿಕೆ, ನಗರ ಚಲನಶೀಲತೆ ಮತ್ತು ಜನಸಾಮಾನ್ಯರ ಜೀವನದ ಮೇಲೆ ನೇರವಾಗಿ ಪರಿಣಾಮ ಬೀರುವ ಕಲ್ಯಾಣ ಉಪಕ್ರಮಗಳು ಸೇರಿದಂತೆ ಕರ್ನಾಟಕದ ಅಭಿವೃದ್ಧಿ ಆದ್ಯತೆಗಳ ಕುರಿತು ಚರ್ಚೆ ನಡೆಸಿದರು.

ಪ್ರಧಾನಿ ಭೇಟಿ ಕುರಿತು ಎಕ್ಸ್‌ ನಲ್ಲಿ ಪೋಸ್ಟ್ ಹಾಕಿರುವ ಮುಖ್ಯಮಂತ್ರಿ, ಭಾರತದ ಬೆಳವಣಿಗೆಯಲ್ಲಿ ಕರ್ನಾಟಕ ಯಾವಾಗಲೂ ಪ್ರಮುಖ ಕೊಡುಗೆ ನೀಡಿದೆ ಮತ್ತು ಆ ಪಾತ್ರವನ್ನು ಮತ್ತಷ್ಟು ಬಲಪಡಿಸುವ ನಮ್ಮ ಬದ್ಧತೆಯನ್ನು ನಾನು ಪುನರುಚ್ಚರಿಸಿದ್ದೇನೆ ಎಂದು ಹೇಳಿದ್ದಾರೆ.

ಅಭಿವೃದ್ಧಿಯನ್ನು ವೇಗಗೊಳಿಸಲು, ಹೆಚ್ಚಿನ ಅವಕಾಶಗಳನ್ನು ಆಕರ್ಷಿಸಲು ಮತ್ತು ಕರ್ನಾಟಕದ ಜನರ ಆಕಾಂಕ್ಷೆಗಳನ್ನು ಪೂರೈಸಲು ಸಹಕಾರಿ ಒಕ್ಕೂಟದ ಉತ್ಸಾಹದಲ್ಲಿ ಕೇಂದ್ರ ಸರಕಾರದೊಂದಿಗೆ ನಿಕಟವಾಗಿ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ. ಒಟ್ಟಾಗಿ, ನಾವು ಬಲವಾದ ಕರ್ನಾಟಕವನ್ನು ನಿರ್ಮಿಸಬಹುದು ಮತ್ತು ಬಲವಾದ ಭಾರತಕ್ಕೆ ಅರ್ಥಪೂರ್ಣವಾಗಿ ಕೊಡುಗೆ ನೀಡಬಹುದು ಎಂದು ಶಿವಕುಮಾರ್ ತಿಳಿಸಿದ್ದಾರೆ.

ಹೊಸದಿಲ್ಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗುರುವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ಯೋಜನೆಗಳ ಕುರಿತು ಚರ್ಚಿಸಿದರು. ಈ ವೇಳೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಮುಖ್ಯಮಂತ್ರಿಯ ಆರ್ಥಿಕ ಸಲಹೆಗಾರ ಎಲ್.ಕೆ.ಅತೀಕ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News