84,432 ಹುದ್ದೆಗಳ ಭರ್ತಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಮಾ. 6: ‘ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 56,432 ಹುದ್ದೆಗಳು ಸೇರಿದಂತೆ ಒಟ್ಟು 84 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು’ ಎಂದು ಬಜೆಟ್ ಭಾಷಣದಲ್ಲಿ ಪ್ರಕಟಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದ ನಿರುದ್ಯೋಗಿ ಯುವಕ-ಯುವತಿಯರಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ.
ಶುಕ್ರವಾರ ವಿಧಾನಸಭೆಯಲ್ಲಿ 2026-27ನೇ ಸಾಲಿನ ಆಯವ್ಯಯ ಮಂಡನೆ ಮಾಡಿದ ಅವರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವೈದ್ಯರು ಸೇರಿದಂತೆ 2500 ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ 15 ಸಾವಿರ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಹೇಳಿದರು.
ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 2500 ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಇದೇ ವೇಳೆ ಗೃಹ ಇಲಾಖೆಯಲ್ಲಿ ಖಾಲಿ ಇರುವ 8000 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು. ಒಟ್ಟು 84,432 ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.