ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ನಾಳೆ(ನ.27) ‘ಜನ ಸ್ಪಂದನ’ ಕಾರ್ಯಕ್ರಮ; ಸ್ಥಳದಲ್ಲೇ ಪರಿಹಾರಕ್ಕೆ ಆದ್ಯತೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕರ ಅಹವಾಲುಗಳಿಗೆ ತ್ವರಿತ ಪರಿಹಾರ ಒದಗಿಸುವ ಆಶಯದೊಂದಿಗೆ ನಾಳೆ(ನ.27) ಬೆಳಗ್ಗೆ 9.30ರಿಂದ ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಲಿದ್ದಾರೆ.
‘ಜನ ಸ್ಪಂದನ’ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಚಿವಾಲಯವು ಸಕಲ ಸಿದ್ಧತೆಗಳನ್ನು ನಡೆಸಿದ್ದು, ಸಿಎಂ ಅಪರ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್ ರವಿವಾರ ಸಂಜೆ ಗೃಹ ಕಚೇರಿ ಕೃಷ್ಣಕ್ಕೆ ಭೇಟಿ ನೀಡಿ ಅಂತಿಮ ಸಿದ್ಧತೆಗಳನ್ನು ಪರಿಶೀಲಿಸಿದರು. ಅಹವಾಲುಗಳನ್ನು ಸ್ವೀಕರಿಸಲು 20 ಕೌಂಟರುಗಳನ್ನು ಸ್ಥಾಪಿಸಲಾಗಿದ್ದು, ವಿಶೇಷ ಚೇತನರು ಮತ್ತು ಹಿರಿಯ ನಾಗರಿಕರಿಗೆ ಎರಡು ಪ್ರತ್ಯೇಕ ಕೌಂಟರ್ ಗಳನ್ನು ಮೀಸಲಿರಿಸಲಾಗಿದೆ.
ಸ್ವೀಕರಿಸಿದ ಅಹವಾಲುಗಳನ್ನು ಇಲಾಖಾವಾರು ವಿಂಗಡಿಸಿ ತಂತ್ರಾಂಶದಲ್ಲಿ ದಾಖಲಿಸಿ ಅರ್ಜಿದಾರರಿಗೆ ಸ್ವೀಕೃತಿ ಪತ್ರ ನೀಡಿದ ನಂತರ ಮುಖ್ಯಮಂತ್ರಿಯವರು ಅವರ ಅಹವಾಲುಗಳನ್ನು ಆಲಿಸಿ ಪರಿಹಾರ ಸೂಚಿಸುವರು.
ಸಿಎಂ ಅಪರ ಮುಖ್ಯ ಕಾರ್ಯದರ್ಶಿಯವರು ಈಗಾಗಲೇ ಸುತ್ತೋಲೆ ಹೊರಡಿಸಿ ಸರಕಾರದ ಎಲ್ಲ ಕಾರ್ಯದರ್ಶಿಗಳು ಮತ್ತು ಇಲಾಖಾ ಮುಖ್ಯಸ್ಥರು ಖುದ್ದು ಹಾಜರಿರುವಂತೆ ಹಾಗೂ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿ.ಪಂ.ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಹಾಗೂ ವರಿಷ್ಠಾಧಿಕಾರಿಗಳು ಮತ್ತು ಎಲ್ಲ ಜಿಲ್ಲಾ,ಉಪವಿಭಾಗ, ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಹಾಜರಿರುವಂತೆ ಸೂಚನೆ ನೀಡಿದ್ದಾರೆ.
ಜನಸ್ಪಂದನ ಕಾರ್ಯಕ್ರಮದಲ್ಲಿ ಅಹವಾಲು ಸಲ್ಲಿಸಲು ಆಗಮಿಸುವ ನಾಗರಿಕರು ತಮ್ಮ ಗುರುತಿಗಾಗಿ ಆಧಾರ್ ಕಾರ್ಡ್ ಅಥವಾ ಪಡಿತರ ಚೀಟಿಯನ್ನು ತರುವಂತೆ ಕೋರಲಾಗಿದೆ. ಇದರಿಂದ ತಂತ್ರಾಂಶದಲ್ಲಿ ದಾಖಲಿಸುವ ಅರ್ಜಿಗಳ ಸ್ಥಿತಿಗತಿಯನ್ನು ಪತ್ತೆಹಚ್ಚಲು ಅನುಕೂಲವಾಗಲಿದೆ. ಸಿಎಂ ಗೃಹ ಕಚೇರಿ ಕೃಷ್ಣ ದಲ್ಲಿ ಮೂರು ದಿನಗಳಿಂದ ಸಕಲ ಸಿದ್ಧತೆ ನಡೆಸಲಾಗುತ್ತಿದ್ದು, ಅಹವಾಲು ಸಲ್ಲಿಸಲು ಆಗಮಿಸುವ ನಾಗರಿಕರಿಗೆ ಕುಡಿಯುವ ನೀರು, ಆಹಾರ ಹಾಗೂ ಶೌಚಾಲಯ ಮತ್ತು ಇತರ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ ಎಂದು ಸಿಎಂ ಕಚೇರಿ ಪ್ರಕಟಣೆ ತಿಳಿಸಿದೆ.