×
Ad

ಚಿಕ್ಕಮಗಳೂರು | ಬಸ್ಸಿಗಾಗಿ ಕಾಯುತ್ತಿದ್ದ ಶಾಲಾ ಮಕ್ಕಳ ಮೇಲೆ ಹರಿದ ಬಸ್; ವಿದ್ಯಾರ್ಥಿನಿ ಮೃತ್ಯು

Update: 2023-09-07 11:43 IST

ಚಿಕ್ಕಮಗಳೂರು: ಬಸ್ಸಿಗಾಗಿ ಕಾಯುತ್ತಿದ್ದ ಶಾಲಾ ಮಕ್ಕಳ ಮೇಲೆ ಖಾಸಗಿ ಬಸ್ ಒಂದು ಹರಿದ ಪರಿಣಾಮ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿರುವ ಘಟನೆ ತರೀಕೆರೆ ತಾಲೂಕು ಕಾವಲ್ ದುಗ್ಲ ಪುರ ಗ್ರಾಮದಲ್ಲಿ ಗುರುವಾರ ಬೆಳಗ್ಗೆ ವರದಿಯಾಗಿದೆ. 

ಬಾವಿಕೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ 9 ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದ ತರೀಕೆರೆ ತಾಲೂಕಿನ ಸೀತಾಪುರ ಕಾವಲು ನಿವಾಸಿ ಮಂಜು ಲತಾ ದಂಪತಿಯ ಪುತ್ರಿ ತುಳಸಿ (15) ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ನಿವೇದಿತ (14) ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. 

ಅತಿ ವೇಗದಿಂದ ಬರುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ರಸ್ತೆ ಬದಿ ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಹರಿದಿದೆ. ಬಸ್ ನುಗ್ಗಿದ ರಭಸಕ್ಕೆ ಪಕ್ಕದಲ್ಲೇ ಇದ್ದ ಮನೆಯ ಮೇಲ್ಛಾವಣಿ ಸಂಪೂರ್ಣ ಜಖಂ ಆಗಿದೆ. ಕೊನೆಗೆ ಮರಕ್ಕೆ ಡಿಕ್ಕಿ ಹೊಡೆದು ಬಸ್ ನಿಂತಿದೆ. ಇದರಿಂದ ತುಳಸಿ ಮತ್ತು ನಿವೇದಿತ ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ತುಳಸಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಉಳಿದ ಐವರು ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ.

ಖಾಸಗಿ ಬಸ್ ಗಳು ಅತಿ ವೇಗದಿಂದ ಅನಾಹುತಗಳು ಸಂಭವಿಸುತ್ತಿದ್ದು ಖಾಸಗಿ ಬಸ್‌ ಗಳ ವೇಗಕ್ಕೆ ಕಡಿವಾಣ ಹಾಕಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಘಟನಾಸ್ಥಳಕ್ಕೆ ತರೀಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News