ರಾಜ್ಯದ ಬಾಕಿ ಯೋಜನೆಗಳ ನಿರ್ವಹಣೆಗೆ ದಿಲ್ಲಿಯ ಕರ್ನಾಟಕ ಭವನದಲ್ಲಿ ಹೊಸ ವ್ಯವಸ್ಥೆ ಜಾರಿ : ಸಿಎಂ ಡಿ.ಕೆ.ಶಿವಕುಮಾರ್
ಹೊಸದಿಲ್ಲಿ : ರಾಜ್ಯದ ಮೇಕೆದಾಟು ಅಣೆಕಟ್ಟು ಸೇರಿದಂತೆ ಬಾಕಿ ಯೋಜನೆಗಳ ನಿರ್ವಹಣೆಗೆ ದಿಲ್ಲಿಯ ಕರ್ನಾಟಕ ಭವನದಲ್ಲಿ ಹೊಸ ವ್ಯವಸ್ಥೆ ಜಾರಿಗೆ ತರಲಾಗುವುದು. ನಮ್ಮ ಯೋಜನೆ ಫಾಲೋ ಅಪ್ ಮಾಡಲು ಪ್ರತ್ಯೇಕ ಸ್ಥಾನಿಕ ಆಯುಕ್ತ ನೇಮಕವು ಸೇರಿದಂತೆ ಹೊಸ ತಂಡ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ.
ಸೋಮವಾರ ದಿಲ್ಲಿಯಲ್ಲಿ ರಾಜ್ಯ ಪ್ರತಿನಿಧಿಸುವ ಕೇಂದ್ರ ಸಚಿವರು, ಸಂಸದರ ಸಭೆಯಲ್ಲಿ ಮಾತನಾಡಿದ ಅವರು, ಜನರ ಕಲ್ಯಾಣಕ್ಕೆ ಪಕ್ಷ ರಾಜಕಾರಣ ಪಕ್ಕಕ್ಕೆ ಇಟ್ಟು ಅಭಿವೃದ್ಧಿ ವಿಚಾರ ಬಂದಾಗ, ಕರ್ನಾಟಕದ ಹಿತಕ್ಕಾಗಿ ನಾವೆಲ್ಲ ಒಟ್ಟಿಗೇ ಕೆಲಸ ಮಾಡೋಣ. ರಾಜ್ಯದ ಪ್ರಗತಿಗೆ ನಿಮ್ಮ ಸಹಕಾರ ಬಯಸುತ್ತೇನೆ. ಕೇಂದ್ರ ಸರಕಾರದ ಮುಂದೆ ಬಾಕಿ ಉಳಿದಿರುವ ವಿವಿಧ ಯೋಜನೆಗಳಿಗೆ ಅನುಮತಿ ದೊರಕಿಸಿಕೊಡಲು ನಿಮ್ಮ ಸಹಕಾರ ಬಹುಮುಖ್ಯ ಎಂದರು.
ನಾನು ಇತ್ತೀಚೆಗೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದಾಗ ಈ ವರ್ಷ ತೀವ್ರ ಬರ ಪರಿಸ್ಥಿತಿ ಎದುರಾಗುವ ಬಗ್ಗೆ ಮುನ್ಸೂಚನೆ ಕೊಟ್ಟಿದ್ದರು. ಕರ್ನಾಟಕದಲ್ಲಿ ಆಲಮಟ್ಟಿ, ಹಾರಂಗಿ ಜಲಾಶಯ ಬಿಟ್ಟು ಉಳಿದ ಅಣೆಕಟ್ಟೆಗಳು ಬಹುತೇಕ ಖಾಲಿಯಾಗಿವೆ. ಇದೇ ಸ್ಥಿತಿ ಮುಂದುವರೆದರೆ ಜನ, ಜಾನುವಾರಿಗೆ ಕುಡಿಯುವ ನೀರಿಗೂ ಸಮಸ್ಯೆ ಆಗುವ ಲಕ್ಷಣಗಳು ಇವೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.
ಈಗಾಗಲೇ ರಾಜ್ಯದ ಬರ ಪರಿಸ್ಥಿತಿ ಬಗ್ಗೆ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದೇನೆ. ಅಗತ್ಯ ನೆರವು ಕೋರಿದ್ದೇನೆ. ಅದು ಸಿಗಲು ನಿಮ್ಮ ಸಹಕಾರ ಬೇಕು. ರಾಜ್ಯದಲ್ಲಿ ಗಂಭೀರ ಬರ ಪರಿಸ್ಥಿತಿ ಇದೆ. ಅಣೆಕಟ್ಟೆಗಳಲ್ಲಿ ನೀರಿನ ಪ್ರಮಾಣ ನೋಡಿ ಬೆಳೆ ಹಾಕಿ ಎಂದು ರೈತರಿಗೆ ಮನವಿ ಮಾಡಿದ್ದೇನೆ. ಜತೆಗೆ ಈ ಬಗ್ಗೆ ರೈತರಿಗೆ ಅರಿವು ಮೂಡಿಸುವಂತೆ ಅಧಿಕಾರಿಗಳಿಗೂ ಸೂಚನೆ ಕೊಟ್ಟಿದ್ದೇನೆ ಎಂದು ಶಿವಕುಮಾರ್ ತಿಳಿಸಿದರು.
30 ಟಿಎಂಸಿ ನೀರು ಉಳಿಸಲು ತುಂಗಭದ್ರಾ ಜಲಾಶಯಕ್ಕೆ ಸಮತೋಲನ ನವಿಲೆ ಜಲಾಶಯ ನಿರ್ಮಿಸಲು ಕೇಂದ್ರ ಸಚಿವರ ಸಮ್ಮುಖದಲ್ಲಿ ಆಂಧ್ರ, ತೆಲಂಗಾಣ ಸೇರಿ ಮೂವರು ಮುಖ್ಯಮಂತ್ರಿಗಳು ಒಪ್ಪಿದ್ದೇವೆ. ಜತೆಗೆ ಗೋದಾವರಿ, ಕೃಷ್ಣ, ಪೆನ್ನಾರ್, ಕಾವೇರಿ ನದಿಗಳ ಜೋಡಣೆ ಯೋಜನೆಗೂ ನಾವು ಒಪ್ಪಿದ್ದೇವೆ. ಇದೊಂದು ಐತಿಹಾಸಿಕ ತೀರ್ಮಾನ ಎಂದು ಅವರು ನುಡಿದರು.
ತಮಿಳುನಾಡು ಸಿಎಂ ವಿಜಯ್ ನನ್ನನ್ನು ಭೇಟಿ ಮಾಡಲು ಬಯಸಿದ್ದಾರೆ. ಮೇಕೆದಾಟು ಯೋಜನೆ ಕುರಿತು ಸುಪ್ರೀಂ ಕೋರ್ಟ್ ಎರಡೂ ರಾಜ್ಯಗಳಿಗೆ ಅನುಕೂಲ ಆಗುವ ತೀರ್ಪು ಕೊಟ್ಟಿದೆ. ಕರ್ನಾಟಕದ ಜಾಗದಲ್ಲಿ ಕರ್ನಾಟಕ ಸಮತೋಲನ ಅಣೆಕಟ್ಟೆ ಕಟ್ಟಲು ಬೇರೆ ರಾಜ್ಯಗಳ ಅನುಮತಿ ಅನಗತ್ಯ, ಆಕ್ಷೇಪ ವ್ಯಕ್ತಪಡಿಸಲು ಹಕ್ಕು ಇಲ್ಲ ಎಂದು ಸ್ಪಷ್ಟವಾಗಿ ಹೇಳಿದೆ ಎಂದು ಅವರು ಉಲ್ಲೇಖಿಸಿದರು.
ರಾಜ್ಯಸಭೆಯಲ್ಲಿ ಜಲಶಕ್ತಿ ಸಚಿವರು ತಮಿಳುನಾಡಿನ ಅನ್ಕುಮಾರ್ ರಾಮದಾಸ್ ಪ್ರಶ್ನೆಗೆ ಉತ್ತರ ಕೊಡುವ ವೇಳೆ ಮೇಲ್ಕಂಡ ಮಾತನ್ನು ಪುನರುಚ್ಚರಿಸಿದ್ದಾರೆ. ಇದಕ್ಕೆ ಕರ್ನಾಟಕದ ಪರವಾಗಿ ಧನ್ಯವಾದ ಹೇಳುತ್ತೇನೆ. ಕೃಷ್ಣ ನ್ಯಾಯಮಂಡಳಿಯ ನೀರು ಹಂಚಿಕೆ ತೀರ್ಮಾನ ಗೆಜೆಟ್ ಅಧಿಸೂಚನೆ ಆಗಬೇಕಿತ್ತು. ಈ ಪ್ರಕರಣ ಸುಪ್ರೀಂ ಕೋರ್ಟ್‍ನಲ್ಲಿ ಬಾಕಿ ಉಳಿದಿತ್ತು. ಅದನ್ನು ಇತ್ಯರ್ಥ ಪಡಿಸಲು ವಿಶೇಷ ಪೀಠ ಸ್ಥಾಪನೆ ಕುರಿತು ಇವತ್ತು ಸುಪ್ರೀಂ ಕೋರ್ಟ್‍ನಲ್ಲಿ ತೀರ್ಮಾನ ಆಗಿದೆ. ಮಹದಾಯಿ ಯೋಜನೆ ಅಡೆತಡೆ ನಿವಾರಣೆಗೆ ನ್ಯಾಯವಾದಿಗಳ ಜತೆ ಸಮಾಲೋಚನೆ ನಡೆಸಿ, ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಸಭೆಯಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸಚಿವರಾದ ರಾಮಲಿಂಗಾರೆಡ್ಡಿ, ಕೃಷ್ಣ ಬೈರೇಗೌಡ, ಕೆ.ಜೆ. ಜಾರ್ಜ್, ಈಶ್ವರ್ ಖಂಡ್ರೆ, ಕೆ.ಎಚ್.ಮುನಿಯಪ್ಪ, ರಾಜ್ಯ ಸರಕಾರದ ಹೊಸದಿಲ್ಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಸಂಸದರಾದ ಪಿ.ಸಿ.ಮೋಹನ್, ಬಸವರಾಜ ಬೊಮ್ಮಾಯಿ, ಬಿ.ವೈ.ರಾಘವೇಂದ್ರ ಸೇರಿದಂತೆ ಮತ್ತಿತರರು ಹಾಜರಿದ್ದರು.