ನೇಮಕಾತಿ ಪ್ರಕ್ರಿಯೆಯನ್ನು ಸಂಪೂರ್ಣ ಪಾರದರ್ಶಕವಾಗಿ ನಡೆಸಬೇಕು : ಸಿಎಂ ಡಿ.ಕೆ.ಶಿವಕುಮಾರ್
► "ಪರೀಕ್ಷೆ ಅಕ್ರಮ ನಡೆದರೆ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳೇ ಜವಾಬ್ದಾರಿ" ► "ಎಲ್ಲ ಕೋಚಿಂಗ್ ಸೆಂಟರ್‌ಗಳ ಮೇಲೆ ಕಣ್ಗಾವಲು ಇಡಬೇಕು" ► ಹಿರಿಯ ಅಧಿಕಾರಿಗಳೊಂದಿಗೆ ಸಭೆ
ಬೆಂಗಳೂರು : ಇದೇ ಮೊದಲ ಬಾರಿಗೆ 70 ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಸಿದ್ಧತೆ ನಡೆಸಲಾಗಿದ್ದು, ಸಂಪೂರ್ಣ ನೇಮಕಾತಿ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ, ಕಟ್ಟುನಿಟ್ಟಿನಿಂದ ನಡೆಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶುಕ್ರವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಮುಂಬರುವ ನೇಮಕಾತಿಗಳಿಗೆ ಕೈಗೊಂಡಿರುವ ಸಿದ್ಧತೆಗಳ ಬಗ್ಗೆ ಅವರು ಹಿರಿಯ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ, ಜಿಲ್ಲಾ ಮಟ್ಟದ ಅಧಿಕಾರಿಗಳು ವೀಡಿಯೊ ಕಾನ್ಫರೆನ್ಸ್ ಮೂಲಕ ಭಾಗವಹಿಸಿದ್ದರು.
ನೇಮಕಾತಿಯಲ್ಲಿ ದೇಶಕ್ಕೆ ನಾವು ಮಾದರಿಯಾಗಬೇಕು. 70 ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ ಮಾಡುವ ದೊಡ್ಡ ಕಾರ್ಯವನ್ನು ನಾವು ಕೈಗೆತ್ತಿಕೊಂಡಿದ್ದೇವೆ. ಪಾರದರ್ಶಕವಾಗಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿ ದೇಶಕ್ಕೆ ಮಾದರಿಯಾಗಿ ತೋರಿಸಬೇಕಾಗಿದೆ. ದೇಶಕ್ಕೆ ವಿದ್ಯಾರ್ಥಿಗಳ ಸಂದೇಶ ಈಗಾಗಲೇ ಸ್ಪಷ್ಟವಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.
ಇತರ ರಾಜ್ಯಗಳಿಗೆ ಹೋಲಿಸಿದರೆ ತಾಂತ್ರಿಕತೆಯಲ್ಲಿ ಕರ್ನಾಟಕಕ್ಕೆ ದೊಡ್ಡ ಇತಿಹಾಸವಿದೆ. ತಾಂತ್ರಿಕತೆಯಲ್ಲಿ ನಾವು ತುಂಬಾ ಮುಂದೆ ಇದ್ದೇವೆ. ಇದನ್ನು ಸಮರ್ಪಕವಾಗಿ ಬಳಸಿಕೊಂಡು ನೇಮಕಾತಿಯನ್ನು ಅತ್ಯಂತ ವೃತ್ತಿಪರವಾಗಿ ನಡೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಶಿವಕುಮಾರ್ ಹೇಳಿದರು.
ಮುಂದಿನ ಆರು ತಿಂಗಳಲ್ಲಿ 36,773 ಹುದ್ದೆಗಳನ್ನು ತುಂಬಲು ಕೆಪಿಎಸ್‍ಸಿ ಮತ್ತು ಕೆಇಎ ಈಗಾಗಲೇ ವೇಳಾಪಟ್ಟಿಯನ್ನು ಹೊರಡಿಸಿದ್ದು, ಸುಮಾರು 35 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆಯುವ ನಿರೀಕ್ಷೆಯಿದೆ. ಪರೀಕ್ಷೆ ಪ್ರಕ್ರಿಯೆಯಲ್ಲಿ ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು ಎಂಬ ಬಗ್ಗೆ ಸಮಗ್ರವಾದ ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗಿದೆ. ಈ ಮಾರ್ಗಸೂಚಿಯನ್ನು ಕಟ್ಟುನಿಂದ ಪಾಲಿಸಬೇಕು ಎಂದು ಅವರು ಸೂಚನೆ ನೀಡಿದರು.
ಪರೀಕ್ಷೆ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಕೈಗೊಳ್ಳಲು ಕೈಗೊಂಡಿರುವ ಕ್ರಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ಒದಗಿಸಬೇಕು. ಪರೀಕ್ಷಾ ಪ್ರಕ್ರಿಯೆಯನ್ನು ಇನ್ನಷ್ಟು ಸುಧಾರಿಸಲು ಯುಪಿಎಸ್‍ಸಿಯಲ್ಲಿ ಅನುಸರಿಸುವ ಉತ್ತಮ ಅಂಶಗಳನ್ನು ಇಲ್ಲಿಯೂ ಅಳವಡಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಹೇಳಿದರು.
ಜಿಲ್ಲಾ ಮಟ್ಟದಲ್ಲಿ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸುವುದು ಜಿಲ್ಲಾಮಟ್ಟದ ಹಿರಿಯ ಅಧಿಕಾರಿಗಳ ಜವಾಬ್ದಾರಿ. ಜಿಲ್ಲಾಧಿಕಾರಿ, ಎಸ್ಪಿ ಮತ್ತು ಶಿಕ್ಷಣ ಇಲಾಖೆ ಅಧಿಕಾರಿಗಳು ಸಂಪೂರ್ಣ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು. ಪ್ರತಿಯೊಬ್ಬರಿಗೆ ಜವಾಬ್ದಾರಿಯನ್ನು ನಿಗದಿಪಡಿಸಲಾಗಿದ್ದು, ಪ್ರತಿಯೊಬ್ಬರೂ ಅವರ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಶಿವಕುಮಾರ್ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತದಲ್ಲೂ ಎಚ್ಚರಿಕೆ ವಹಿಸಬೇಕು. ಪ್ರತಿ ಹಂತವನ್ನೂ ವಿಡಿಯೋ ಚಿತ್ರೀಕರಣ ಮಾಡಬೇಕು. ಯಾವುದೇ ಶಿಕ್ಷಣ ಸಂಸ್ಥೆಗಳು, ಮ್ಯಾನೇಜ್ಮೆಂಟ್ ಪರೀಕ್ಷಾ ಅಕ್ರಮ ನಡೆಸದಂತೆ ಕಟ್ಟೆಚ್ಚರ ವಹಿಸಬೇಕು. ಯಾವುದೇ ಅಧಿಕಾರಿ, ಸಿಬ್ಬಂದಿ ಬಳಿ ಮೊಬೈಲ್ ಇರಬಾರದು ಎಂದು ಮುಖ್ಯಮಂತ್ರಿ ಹೇಳಿದರು. ಪರೀಕ್ಷೆ ಬರೆಯಲು ಪ್ರಾರಂಭಿಸುವ ಮೊದಲು ಯಾವ ಎಚ್ಚರಿಕೆಗಳನ್ನು ವಹಿಸಬೇಕು ಎಂಬ ಬಗ್ಗೆ ಸ್ಪಷ್ಟವಾದ ಮಾರ್ಗಸೂಚಿಯಿದೆ. ಮಾರ್ಗಸೂಚಿಯನ್ನು ಕಟ್ಟುನಿಟ್ಟಿನಿಂದ ಪಾಲಿಸಬೇಕು. ಪರೀಕ್ಷಾ ಅಕ್ರಮಗಳು ನಡೆದರೆ ಹಿರಿಯ ಅಧಿಕಾರಿಗಳನ್ನೇ ನೇರವಾಗಿ ಹೊಣೆ ಮಾಡಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
ನೇಮಕಾತಿ ಪ್ರಕ್ರಿಯೆಯನ್ನು ನಡೆಸಲು ಕೆಪಿಎಸ್‍ಸಿ ಮತ್ತು ಕೆಇಎ ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲು ಹಿರಿಯ ಅಧಿಕಾರಿಗಳನ್ನು ಒಳಗೊಂಡ ತಜ್ಞರ ಸಮಿತಿಯನ್ನು ರಚಿಸಲು ಸಿಎಂ ಸೂಚನೆ ನೀಡಿದರು. ಎಲ್ಲ ಕೋಚಿಂಗ್ ಸೆಂಟರ್ ಗಳ ಮೇಲೆ ಕಣ್ಗಾವಲು ಇಡಲು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮುಖ್ಯಮಂತ್ರಿ ನಿರ್ದೇಶನ ನೀಡಿದರು.
ಪರೀಕ್ಷಾ ಪ್ರಕ್ರಿಯೆಯನ್ನು ವೃತ್ತಿಪರವಾಗಿ ಕೈಗೊಳ್ಳಲು ಕೈಗೊಂಡಿರುವ ಕ್ರಮಗಳ ಬಗ್ಗೆ ಕೆಪಿಎಸ್‍ಸಿ ಮತ್ತು ಕೆಇಎ ಅಧಿಕಾರಿಗಳು ಮಾಹಿತಿ ನೀಡಿದರು. ಸಭೆಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಸಿಎಂ ಮುಖ್ಯ ಸಲಹೆಗಾರ ಜಿ.ಸಿ.ಚಂದ್ರಶೇಖರ್, ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಸಿಎಂ ಆರ್ಥಿಕ ಸಲಹೆಗಾರ ಎಲ್.ಕೆ.ಅತೀಕ್, ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ತಜ್ಞರ ಸಮಿತಿ ರಚನೆ: ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಯಾಗಿದ್ದ ನಿವೃತ್ತ ಐಎಎಸ್ ಅಧಿಕಾರಿ ಎಸ್.ವಿ.ರಂಗನಾಥ್ ಅಧ್ಯಕ್ಷತೆಯಲ್ಲಿ, ಸ್ಪರ್ಧಾತ್ಮಕ ಪರೀಕ್ಷೆಗಳು ಮತ್ತು ನೇಮಕಾತಿ ಪ್ರಕ್ರಿಯೆಯ ಸುಧಾರಣೆಗಳನ್ನು ಪರಿಶೀಲಿಸಲು ಸಮಿತಿಯನ್ನು ರಚಿಸಲಾಗಿದ್ದು, ನಿವೃತ್ತ ಐಎಎಸ್ ಅಧಿಕಾರಿಗಳಾದ ಟಿ.ಎಂ.ವಿಜಯಭಾಸ್ಕರ್, ವಂದಿತಾ ಶರ್ಮಾ ಹಾಗೂ ಎಲ್.ಕೆ.ಅತೀಕ್ ಅವರನ್ನು ಸಮಿತಿಯ ಸದಸ್ಯರನ್ನಾಗಿ ನೇಮಿಸಲಾಗಿದೆ.
ಸ್ಪರ್ಧಾತ್ಮಕ ಪರೀಕ್ಷೆಗಳು ಮತ್ತು ನೇಮಕಾತಿ ವ್ಯವಸ್ಥೆಯನ್ನು ಹೆಚ್ಚು ಪರಿಣಾಮಕಾರಿ, ಪಾರದರ್ಶಕ ಹಾಗೂ ವಿಶ್ವಾಸಾರ್ಹವಾಗಿಸಲು ಅಗತ್ಯ ಸುಧಾರಣೆಗಳನ್ನು ಅಧ್ಯಯನ ಮಾಡಿ ಶಿಫಾರಸುಗಳನ್ನು ಸಲ್ಲಿಸುವ ಹೊಣೆಗಾರಿಕೆಯನ್ನು ಸಮಿತಿಗೆ ವಹಿಸಲಾಗಿದೆ.