ಆದಿವಾಸಿ ಮತ್ತು ಅಲೆಮಾರಿ ಆಯೋಗ ರಚನೆಗೆ ಸಿಎಂ ಆದೇಶ
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಬೆಂಗಳೂರು : ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿಶೇಷ ಆಯೋಗ ರಚನೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.
ಇತ್ತೀಚೆಗಷ್ಟೇ ನಗರದಲ್ಲಿ ಏರ್ಪಡಿಸಿದ್ದ ವಿಶ್ವ ಆದಿವಾಸಿ ದಿನಾಚರಣೆ ಕಾರ್ಯಕ್ರಮದಲ್ಲಿ ಈ ವಿಶೇಷ ಆಯೋಗ ರಚನೆಗೆ ಬೇಡಿಕೆ ನೀಡಲಾಗಿತ್ತು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ತಿಂಗಳಲ್ಲಿ ಆಯೋಗ ರಚಿಸುವ ಭರವಸೆ ನೀಡಿದ್ದರು. ಇದೀಗ ಆದೇಶ ಹೊರಡಿಸಲಾಗಿದೆ.
ರಾಜ್ಯದಲ್ಲಿ ವಾಸಿಸುತ್ತಿರುವ ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳು ಇಂದಿಗೂ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಹಲವು ಸವಾಲುಗಳನ್ನು ಎದುರಿಸುತ್ತಿವೆ. ಈ ಹಿನ್ನೆಲೆಯಲ್ಲಿ ಅವರ ಅಭಿವೃದ್ಧಿ, ಹಕ್ಕುಗಳ ರಕ್ಷಣೆ ಹಾಗೂ ಸಾಮಾಜಿಕ ನ್ಯಾಯವನ್ನು ಒದಗಿಸುವ ಸಲುವಾಗಿ ವಿಶೇಷ ಆಯೋಗವನ್ನು ರಚಿಸಲು ಸರಕಾರ ನಿರ್ಧರಿಸಿದೆ.
ಉತ್ತಮ ಶಿಕ್ಷಣ, ಪೌಷ್ಟಿಕ ಆಹಾರ, ಗುಣಮಟ್ಟದ ಆರೋಗ್ಯ ಸೇವೆ, ವಸತಿ, ಕುಡಿಯುವ ನೀರು, ರಸ್ತೆ, ವಿದ್ಯುತ್ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸುವುದರ ಜೊತೆಗೆ, ಯುವಜನರಿಗೆ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗಾವಕಾಶಗಳನ್ನು ಕಲ್ಪಿಸುವುದೇ ಸರಕಾರದ ಮುಖ್ಯ ಉದ್ದೇಶ. ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಬದುಕಿನಲ್ಲಿ ಹೊಸ ಭರವಸೆ ಮೂಡಿಸುವುದರ ಜೊತೆಗೆ ಸಮಾನ ಅವಕಾಶಗಳನ್ನು ಒದಗಿಸಲು ಸರಕಾರ ಬದ್ಧ ಎಂದು ಸಿಎಂ ಹೇಳಿದ್ದಾರೆ.