ಬೆಂಗಳೂರು: ಆಶಾ ಕಾರ್ಯಕರ್ತೆಯರ ಮಾಸಿಕ ಗೌರವಧನವನ್ನು 2,000 ರೂ. ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ.

ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ಆಶಾ ಕಾರ್ಯಕರ್ತೆಯರು ನಮ್ಮ ಆಸ್ತಿ. ಅವರ ಸೇವೆಯನ್ನು ಗೌರವಿಸಿ, ಅವರ ಬೇಡಿಕೆಗಳನ್ನು ಈಡೇರಿಸಲು ನಮ್ಮ ಸರಕಾರ ನಿರ್ಧರಿಸಿದೆ. ಪ್ರಸ್ತುತ ಮಾಸಿಕ ಗೌರವಧನವನ್ನು 2,000 ರೂ. ಹೆಚ್ಚಿಸಲು ತೀರ್ಮಾನಿಸಲಾಗಿದ್ದು, ಈ ಹೆಚ್ಚಳವು ಜನವರಿ 1, 2027ರಿಂದ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.

ನನ್ನ ಮನವಿಗೆ ಸ್ಪಂದಿಸಿ ಹೋರಾಟವನ್ನು ಕೈಬಿಟ್ಟ ಆಶಾ ಸಹೋದರಿಯರಿಗೆ ಹೃದಯಪೂರ್ವಕ ಅಭಿನಂದನೆಗಳು. ಆಶಾ ಸಹೋದರಿಯರ ಕಷ್ಟಕ್ಕೆ ಸ್ಪಂದಿಸಿ, ಅವರ ಬದುಕಿನಲ್ಲಿ ಭರವಸೆಯ ಬೆಳಕು ಮೂಡಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.

15,000 ರೂ. ವೇತನ ನೀಡುವಂತೆ ಕಳೆದ 12 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ಮನವೊಲಿಸುವಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಯಶಸ್ವಿಯಾಗಿದ್ದಾರೆ. ಗೃಹ ಕಚೇರಿಯಲ್ಲಿ ನಡೆದ ಆಶಾ ಕಾರ್ಯಕರ್ತೆಯರೊಂದಿಗಿನ ಸಭೆಯಲ್ಲಿ ಡಿ.ಕೆ.ಶಿವಕುಮಾರ್ ಅವರು 2 ಸಾವಿರ ರೂ. ಹೆಚ್ಚಳ ಮಾಡುವುದಾಗಿ ಸ್ಪಷ್ಟಪಡಿಸಿದ್ದಾರೆ.

ಆದರೆ, ಇದಕ್ಕೆ ಆರಂಭದಲ್ಲಿ ಆಶಾ ಕಾರ್ಯಕರ್ತೆಯರು ಒಪ್ಪಲಿಲ್ಲವಾದರೂ, ಅಂತಿಮವಾಗಿ ಆಶಾ ಕಾರ್ಯಕರ್ತೆಯರು 2 ಸಾವಿರ ರೂಪಾಯಿಗೆ ಒಪ್ಪಿಗೆ ಸೂಚಿಸಿದ್ದಾರೆ. ಇದರೊಂದಿಗೆ ಆಶಾ ಕಾರ್ಯಕರ್ತೆಯರ ಜೊತೆಗಿನ ಸಿಎಂ ಸಂಧಾನ ಸಕ್ಸಸ್ ಆಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ತಲ್ಹತ್ ವಳಾಲ್

ಉಪಸಂಪಾದಕ

ತಲ್ಹತ್ ವಳಾಲ್ ಅವರು ಮಂಗಳೂರು ವಿಶ್ವವಿದ್ಯಾಲಯದಿಂದ ಇತಿಹಾಸದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, 2023ರಿಂದ ವಾರ್ತಾಭಾರತಿ ಡಿಜಿಟಲ್‌ನಲ್ಲಿ ಉಪಸಂಪಾದಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.