×
Ad

ಮಳೆಗಾಲದೊಳಗೆ ಕೆರೆ ಒತ್ತುವರಿ ತೆರವುಗೊಳಿಸಿ : ಸಿಎಂ ಸಿದ್ದರಾಮಯ್ಯ ಸೂಚನೆ

Update: 2025-01-29 20:41 IST

ಬೆಂಗಳೂರು : ಮಳೆಗಾಲದ ಒಳಗಾಗಿ ಕೆರೆ ಒತ್ತುವರಿಯನ್ನು ತೆರವುಗೊಳಿಸಿ, ಕೆರೆಗಳನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬುಧವಾರ ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದ ಅವರು, ಕೆರೆ ಒತ್ತುವರಿ ತೆರವು ಕಾರ್ಯ ಬಾಕಿಯಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದರು.

ರಾಜ್ಯದಲ್ಲಿ ಒಟ್ಟು 40,998 ಕೆರೆಗಳಿದ್ದು, ಇವುಗಳ ಪೈಕಿ ಗ್ರಾಮೀಣಾಭಿವೃದ್ಧಿ ಇಲಾಖೆ ವ್ಯಾಪ್ತಿಯಲ್ಲಿ 26,365 ಕೆರೆಗಳು, ಸಣ್ಣ ನೀರಾವರಿಯಲ್ಲಿ 3,247, ಬಿಬಿಎಂಪಿ ವ್ಯಾಪ್ತಿಯಲ್ಲಿ 117 ಕೆರೆಗಳಿವೆ ಎಂದು ಸಿದ್ದರಾಮಯ್ಯ ವಿವರಿಸಿದರು.

ರಾಜ್ಯದಲ್ಲಿ 30 ಸಾವಿರ ಕೆರೆಗಳ ಸರ್ವೇ ಕಾರ್ಯವನ್ನು ಕಂದಾಯ ಇಲಾಖೆ ಈಗಾಗಲೇ ಪೂರ್ಣಗೊಳಿಸಿದ್ದು, ಉಳಿದಿರುವ 10,754 ಕೆರೆಗಳ ಸಮೀಕ್ಷೆ ಕಾರ್ಯವನ್ನು ಆರು ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸೂಚಿಸಿದರು.

ಕೆರೆಗಳ ಸಂರಕ್ಷಣೆ ಕಾರ್ಯವನ್ನು ನರೇಗಾ ಅಡಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಕೈಗೆತ್ತಿಕೊಳ್ಳಬೇಕು. ಮೀನುಗಾರಿಕಾ ಇಲಾಖೆ ವತಿಯಿಂದ ಎಲ್ಲಾ ಕೆರೆಗಳಿಗೆ ಮೀನು ಮರಿಗಳನ್ನು ಬಿಡುವ ಕಾರ್ಯ ಮಾಡಿದರೆ ಆದಾಯ ಗಳಿಸಲು ಸಾಧ್ಯವಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಮಾಲಿನ್ಯ ಮಟ್ಟ ಪರಿಶೀಲಿಸಿ ವರದಿ ಸಲ್ಲಿಸಿ: ನಗರ ಪ್ರದೇಶದ ಕೆರೆಗಳು ಮಾತ್ರವಲ್ಲದೆ, ರಾಜ್ಯದ ಎಲ್ಲಾ ಕೆರೆಗಳ ಮಾಲಿನ್ಯದ ಮಟ್ಟವನ್ನು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಪರಿಶೀಲಿಸಿ ನಿಯಮಿತವಾಗಿ ವರದಿ ಸಲ್ಲಿಸಬೇಕು ಎಂದು ಸಿದ್ದರಾಮಯ್ಯ ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News