×
Ad

ಲೋಕಸಭಾ ಚುನಾವಣೆಯಲ್ಲಿ ಅರ್ಹ ಮತದಾರರನ್ನು ಪಟ್ಟಿಯಿಂದ ತೆಗೆಯಲಾಗಿತ್ತು : ಸಿಎಂ ಸಿದ್ದರಾಮಯ್ಯ

Update: 2025-07-25 21:28 IST

ಹೊಸದಿಲ್ಲಿ : ಕಳೆದ ಲೋಕಸಭಾ ಚುನಾವಣೆಯಲ್ಲಿ ಅರ್ಹ ಮತದಾರರನ್ನು ಪಟ್ಟಿಯಿಂದ ತೆಗೆಯಲಾಗಿತ್ತು ಮತ್ತು ಚುನಾವಣಾ ಕ್ಷೇತ್ರಕ್ಕೆ ಸಂಬಂಧಪಡದ ಹೊಸ ಮತದಾರರನ್ನು ಪಟ್ಟಿಯಲ್ಲಿ ಸೇರಿಸಲಾಗಿತ್ತು. ಈ ರೀತಿ ಇಡೀ ದೇಶದಲ್ಲಿ ನಡೆದಿರುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕರ್ನಾಟಕದಲ್ಲಿ ಮತಗಳವು ಆಗಿದೆ ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಪ್ರತಿಪಾದಿಸುತ್ತಿರುವ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಆದುದರಿಂದಲೆ ರಾಹುಲ್ ಗಾಂಧಿ ಈ ಗಂಭೀರ ವಿಚಾರವನ್ನು ಸದನದ ಒಳಗೆ ಹಾಗೂ ಹೊರಗೆ ಪ್ರಸ್ತಾಪಿಸಿದ್ದಾರೆ ಎಂದು ಹೇಳಿದರು.

ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದ ಎಲ್ಲ ಕ್ಷೇತ್ರದಲ್ಲಿ ಮತ ಎಣಿಕೆಯಲ್ಲಿ ಕಾಂಗ್ರೆಸ್ ಮುಂದಿದ್ದರೂ, ಮಹದೇವಪುರ ಕ್ಷೇತ್ರದಿಂದಾಗಿ ಕಾಂಗ್ರೆಸ್ ಸೋಲುವಂತಾಯಿತು. ಈ ರೀತಿ ಆಗಿರುವುದನ್ನು ಪ್ರಶ್ನಿಸಿದ ರಾಹುಲ್ ಗಾಂಧಿ, ಈ ಬಗ್ಗೆ ಸಾಕ್ಷ್ಯಾಧಾರಗಳು ಇವೆ ಎಂದು ತಿಳಿಸಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಮತಗಳವು ಆಗಿದ್ದರೆ ನ್ಯಾಯಾಲಯದ ಮೊರೆ ಹೋಗಬಹುದಿತ್ತು, ಆದರೆ ಕಾಂಗ್ರೆಸ್ ನವರು ಚುನಾವಣಾ ಆಯೋಗಕ್ಕೆ ದೂರು ನೀಡಿಲ್ಲ ಎಂದು ಚುನಾವಣಾ ಆಯೋಗ ನೀಡಿರುವ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಚುನಾವಣೆಗೆ ಸಂಬಂಧಿಸಿದ ಪ್ರಕರಣಗಳು ಇತ್ಯರ್ಥವಾಗುವುದರೊಳಗೆ ಸರಕಾರದ ಅವಧಿಯೆ ಮುಗಿದಿರುತ್ತದೆ. ಹಲವು ಪ್ರಕರಣಗಳಲ್ಲಿ ಮತದಾರರಪಟ್ಟಿ ವಿಚಾರದಲ್ಲಿ ಚುನಾವಣಾ ಆಯೋಗ ನಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡಿದೆ ಎಂದು ಹೇಳಿದರು.

ಕಳೆದ ಲೋಕಸಭಾ ಚುನಾವಣೆಯಲ್ಲಿ ಕೆಲವು ಆಯ್ದ ಮತಕ್ಷೇತ್ರಗಳಲ್ಲಿ ಮಾತ್ರ ಮತಗಳವು ಆಗಿದೆ. ಬಿಹಾರದ ರೀತಿಯಲ್ಲಿ ದೇಶದ ಉಳಿದೆಡೆಗಳಲ್ಲೂ ಮತಪಟ್ಟಿ ಪರಿಷ್ಕರಣೆ ಮಾಡುವುದಾಗಿ ಚುನಾವಣಾ ಆಯೋಗ ತಿಳಿಸಿರುವ ಬಗ್ಗೆ ಉತ್ತರಿಸಿದ ಅವರು, ಚುನಾವಣೆಯ ದಿನ ಬೇರೆಯೆ ಮತದಾರರ ಪಟ್ಟಿ ಬರುವಂತೆ ಮಾಡುತ್ತಾರೆ ಎಂದರು.

ಅಧಿಕಾರಿಗಳೊಂದಿಗೆ ಸಭೆ ನಡೆಸಿಲ್ಲ: ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಸಚಿವರು, ಶಾಸಕರೊಂದಿಗೆ ಸಭೆ ನಡೆಸಿದಂತೆ, ಉತ್ತರ ಭಾರತ ಮೂಲದ ಹಿರಿಯ ಅಧಿಕಾರಿಗಳೊಂದಿಗೂ ಸಭೆ ನಡೆಸಿದ್ದಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅಧಿಕಾರಿಗಳೊಂದಿಗೆ ಯಾವುದೆ ಸಭೆ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದರು.

ಗೋವಾ ಸಿಎಂ ನಡೆ ಸರಿಯಿಲ್ಲ: ಮಹದಾಯಿ ವಿಚಾರ ನ್ಯಾಯಮಂಡಳಿಯಲ್ಲಿ ಈಗಾಗಲೆ ಇತ್ಯರ್ಥವಾಗಿದ್ದರೂ, ಗೋವಾ ಮುಖ್ಯಮಂತ್ರಿ ನೀಡಿರುವ ಹೇಳಿಕೆ ಸರಿಯಾದುದಲ್ಲ. ಮಹದಾಯಿ ಯೋಜನೆಗೆ ಕೇಂದ್ರ ಪರಿಸರ ಇಲಾಖೆಯ ಒಪ್ಪಿಗೆ ಸಿಗಬೇಕಾಗಿದೆಯೆ ಹೊರತು, ಬೇರೆ ಏನು ಇಲ್ಲ. ಅವರಿಗೆ ನ್ಯಾಯಾಲಯದ ಹೊರೆ ಹೋಗಲು ಯಾವ ಹಕ್ಕೂ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ: ರಣದೀಪ್ ಸಿಂಗ್ ಸುರ್ಜೆವಾಲಾ ಅವರೊಂದಿಗೆ ಗುರುವಾರ ರಾತ್ರಿ ನಡೆದ ಸಭೆಯಲ್ಲಿ ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿ ಅಂತಿಮ ಗೊಳಿಸಲಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ನಾನು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಮ್ಮ ಅಭಿಪ್ರಾಯವನ್ನು ನೀಡಿದ್ದೇವೆ. ಅಂತಿಮವಾಗಿ ಹೈಕಮಾಂಡ್ ನಿರ್ಧಾರವನ್ನು ತೆಗೆದುಕೊಳ್ಳಲಿದೆ ಎಂದರು.

ಶೀಘ್ರದಲ್ಲಿ ವಿಧಾನಪರಿಷತ್ತಿಗೆ ನಾಮ ನಿರ್ದೇಶನ: ವಿಧಾನಪರಿಷತ್ತಿಗೆ ನಾಮನಿರ್ದೇಶನ ವಿಧಾನ ಮಂಡಲದ ಅಧಿವೇಶನಕ್ಕೆ ಮುನ್ನವೇ ಆಗಬಹುದೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಆಗಬಹುದು ಎಂದು ಉತ್ತರಿಸಿದರು.

ಎಸ್‍ಡಿಪಿಐ ಬೆಂಬಲಿಸಿಲ್ಲ: ಎಸ್‍ಡಿಪಿಐಗೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ ಎಂದು ಬಿಜೆಪಿ ಮಾಡಿರುವ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಕಾಂಗ್ರೆಸ್ ಎಂದಿಗೂ ಎಸ್‍ಡಿಪಿಐ ಅನ್ನು ಬೆಂಬಲಿಸಿಲ್ಲ ಎಂದರು.

ಮಾಹಿತಿ ಇಲ್ಲ: ರಾಜ್ಯದಲ್ಲಿ ಜನೌಷಧಿ ಕೇಂದ್ರಗಳನ್ನು ಮುಚ್ಚುವ ಸರಕಾರದ ನಿರ್ಧಾರದ ಬಗ್ಗೆ ಸಂಸತ್ತಿನಲ್ಲಿ ಪ್ರಸ್ತಾಪವಾಗಿದ್ದು, ನಿರ್ಧಾರವನ್ನು ಪರಿಪರಿಶೀಲಿಸಬೇಕೆಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಅವರ ಕಚೇರಿಯಿಂದ ಮುಖ್ಯಮಂತ್ರಿಗೆ ಪತ್ರ ಬರೆದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಮಾಹಿತಿ ಇಲ್ಲ ಎಂದರು.

ಅಧಿಕಾರಿಗಳ ಜಟಾಪಟಿ ಕುರಿತು ಪರಿಶೀಲನೆ: ಕರ್ನಾಟಕ ಭವನದಲ್ಲಿ ಅಧಿಕಾರಿಗಳು ಜಟಾಪಟಿ ಮಾಡಿಕೊಂಡು ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ಈ ಬಗ್ಗೆ ಪರಿಶೀಲಿಸುವುದಾಗಿ ತಿಳಿಸಿದರು.

ಆಗಸ್ಟ್ ನಲ್ಲಿ ರಾಹುಲ್ ಗಾಂಧಿ ಭೇಟಿ: ಆಗಸ್ಟ್ 1 ಮತ್ತು 2 ರಂದು ಎಐಸಿಸಿ ಕಾನೂನು ಕೋಶದ ವಿಚಾರ ಸಂಕಿರಣ ನಡೆಯಲಿದ್ದು, ಆ ಸಂದರ್ಭದಲ್ಲಿ ರಾಹುಲ್ ಗಾಂಧಿಯನ್ನು ಭೇಟಿ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.

ನ್ಯಾ.ಕುನ್ಹಾ ವರದಿಯನುಸಾರ ಶಿಸ್ತು ಕ್ರಮ: ‘ಆರ್.ಸಿ.ಬಿ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾ.ಮೈಕಲ್ ಕುನ್ಹಾ ನೀಡಿರುವ ತನಿಖಾ ವರದಿಯನ್ನು ಸರಕಾರ ಅಂಗೀಕರಿಸಿದೆ. ಕೆ.ಎಸ್.ಸಿ.ಎ, ಡಿಎನ್‍ಎ ಹಾಗೂ ಆರ್.ಸಿ.ಬಿ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ. ಪೊಲೀಸ್ ಆಯುಕ್ತರು, ಹೆಚ್ಚುವರಿ ಪೊಲೀಸ್ ಆಯುಕ್ತರು, ಎಸ್.ಪಿ, ಎಸಿಪಿ ಹಾಗು ಪೊಲೀಸ್ ಇನ್‍ಸ್ಪೆಕ್ಟರ್ ಸೇರಿದಂತೆ ಹಲವರನ್ನು ಅಮಾನತು ಮಾಡಲಾಗಿದೆ. ಇವರ ವಿರುದ್ಧ ಇಲಾಖಾ ವಿಚಾರಣೆಯನ್ನು ನಡೆಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ’

-ಸಿದ್ದರಾಮಯ್ಯ, ಮುಖ್ಯಮಂತ್ರಿ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News