×
Ad

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ | ಗಣತಿದಾರರಿಗೆ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ

Update: 2025-10-16 20:27 IST

ಬೆಂಗಳೂರು, ಅ. 16: ‘ನಮ್ಮ ಸರಕಾರವು ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೂಲಕ ನಡೆಸುತ್ತಿರುವ ‘ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ’ಗಾಗಿ ನನ್ನ ಮನೆಗೆ ಭೇಟಿ ನೀಡಿದ ಸಮೀಕ್ಷಾ ಸಿಬ್ಬಂದಿಗೆ ಮಾಹಿತಿ ನೀಡಿ, ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಗುರುವಾರ ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪೋಸ್ಟ್ ಹಾಕಿರುವ ಅವರು, ‘ಅಸಮಾನತೆ, ಬಡತನವನ್ನು ನಿವಾರಣೆ ಮಾಡಿ ಸಮಸಮಾಜ ನಿರ್ಮಾಣ ಮಾಡುವ ಉದ್ದೇಶದೊಂದಿಗೆ ನಮ್ಮ ಸರಕಾರವು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಂಡಿದೆ. ಪ್ರತಿಯೊಬ್ಬರೂ ಈ ಸಮೀಕ್ಷೆಯಲ್ಲಿ ತಪ್ಪದೇ ಪಾಲ್ಗೊಂಡು, ತಮ್ಮ ಮಾಹಿತಿಯನ್ನು ಪ್ರಾಮಾಣಿಕವಾಗಿ ನೀಡಬೇಕು. ಆಗ ಮಾತ್ರ ಸಮಾಜದ ವಾಸ್ತವ ಸ್ಥಿತಿಗತಿಯ ಬಗೆಗೆ ನಿಖರ ಮಾಹಿತಿ ದೊರೆತು, ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಜನರನ್ನು ಗುರುತಿಸಿ, ಅವರ ಪ್ರಗತಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಲು ಸಾಧ್ಯ’ ಎಂದು ಉಲ್ಲೇಖಿಸಿದ್ದಾರೆ.

‘ಇದು ಯಾವುದೇ ಒಂದು ಜಾತಿಗೆ ಸೀಮಿತವಾದ ಸಮೀಕ್ಷೆಯಲ್ಲ, ರಾಜ್ಯದ ಪ್ರತಿಯೊಬ್ಬರ ಜೀವನದ ಮೇಲೆ ಬೆಳಕು ಚೆಲ್ಲುವ ಒಂದು ವೈಜ್ಞಾನಿಕ ಪ್ರಯತ್ನ. ಸಮೀಕ್ಷೆಯಲ್ಲಿ ಮಾಹಿತಿ ನೀಡುವುದರಿಂದ ನಿಮ್ಮ ವೈಯಕ್ತಿಕ ಮಾಹಿತಿ ದುರ್ಬಳಕೆ ಖಂಡಿತಾ ಆಗದು. ಚಿಂತೆ ಬಿಟ್ಟು, ಧೈರ್ಯವಾಗಿ ಸಿಬ್ಬಂದಿಗಳ ಜೊತೆ ಮಾಹಿತಿ ಹಂಚಿಕೊಳ್ಳಿ’ ಎಂದು ಸಿದ್ದರಾಮಯ್ಯ ಇದೇ ವೇಳೆ ಮನವಿ ಮಾಡಿದ್ದಾರೆ.

ಗಣತಿದಾರರಿಗೆ ವಿವರ ನೀಡಿದ ಸಿಎಂ: ಇಲ್ಲಿನ ಕಾವೇರಿ ನಿವಾಸದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಆಗಮಿಸಿದ್ದ ಗಣತಿದಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 45 ನಿಮಿಷಕ್ಕೂ ಹೆಚ್ಚು ಕಾಲ ಸಮಾಧಾನದಿಂದ ಉತ್ತರಿಸಿದರು. ಗಣತಿದಾರರು ಕೇಳಿದ ಎಲ್ಲ ಪ್ರಶ್ನೆಗಳಿಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರಿಸಿ ಸಂಪೂರ್ಣ ಮಾಹಿತಿ ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News