×
Ad

ಸಫಾರಿ ಕುರಿತು ಅಧ್ಯಯನಕ್ಕೆ ತಜ್ಞರ ಸಮಿತಿ ರಚಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ

Update: 2026-01-02 20:54 IST

ಬೆಂಗಳೂರು, ಜ.2: ಸಫಾರಿ ವಾಹನಗಳ ಕಿರಿಕಿರಿಯಿಂದ ವನ್ಯಜೀವಿಗಳು ಕಾಡಿನಿಂದ ನಾಡಿಗೆ ಬರುತ್ತಿವೆಯೇ ಎನ್ನುವ ಕುರಿತು ಹಾಗೂ ಬಂಡೀಪುರ-ನಾಗರಹೊಳೆಯಲ್ಲಿ ಸಫಾರಿ ವಾಹನಗಳ ಧಾರಣಾ ಸಾಮರ್ಥ್ಯವೆಷ್ಟು ಎಂಬ ಬಗ್ಗೆ ಅಧ್ಯಯನಕ್ಕಾಗಿ ತಜ್ಞರ ಸಮಿತಿ ರಚಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಶುಕ್ರವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ರಾಜ್ಯ ವನ್ಯಜೀವಿ ಮಂಡಳಿಯ 20ನೇ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅರಣ್ಯ ಪ್ರವಾಸೋದ್ಯಮದಿಂದ ಸ್ಥಳೀಯರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಸಫಾರಿ ಬಗೆಗಿನ ನಿರ್ಣಯವನ್ನು ಪುನರ್ ಪರಿಶೀಲಿಸಲು ಪರಿಣಿತರನ್ನೊಳಗೊಂಡ ತಾಂತ್ರಿಕ ಸಮಿತಿ ರಚಿಸಿ, ಅಭಿಪ್ರಾಯ ಪಡೆಯಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.  

ಇದಕ್ಕೂ ಮೊದಲು ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಕಳೆದ ಅಕ್ಟೋಬರ್ ಮತ್ತು ನವೆಂಬರ್‌ನಲ್ಲಿ ಹುಲಿಗಳ ದಾಳಿಯಿಂದ ಮೂವರು ಮೃತಪಟ್ಟು ಒಬ್ಬರು ಶಾಶ್ವತ ವಿಶೇಷಚೇತನರಾದ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿ ಸ್ಥಗಿತಗೊಳಿಸಲಾಗಿತ್ತು. ಈ 2 ತಿಂಗಳ ಅವಧಿಯಲ್ಲಿ ಕಾಡಿನ ಹೊರಗೆ ಹುಲಿ ದಾಳಿ ನಡೆದಿಲ್ಲ, ಯಾವುದೇ ಜೀವಹಾನಿ ಆಗಿಲ್ಲ ಎಂದು ವಿವರಿಸಿದರು.

ಸಫಾರಿ ವಾಹನದ ಕಿರಿಕಿರಿಯಿಂದ, ವಾಹನಗಳ ಬೆಳಕಿನಿಂದ ವನ್ಯಜೀವಿಗಳು ಹೊರಬರುತ್ತವೆ ಎಂಬುದು ಸ್ಥಳೀಯರು ಮತ್ತು ರೈತರ ಆರೋಪವಾಗಿದೆ. ಈ ಬಗ್ಗೆ ಅಧ್ಯಯನ ನಡೆಸುವ ಅಗತ್ಯವಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

1972ರಲ್ಲಿ ಬಂಡೀಪುರದಲ್ಲಿ ಕೇವಲ 12 ಹುಲಿ ಇತ್ತು. ಇಂದು ಸುಮಾರು 175-200 ಹುಲಿಗಳಿವೆ. ಒಂದು ಹುಲಿ ಸ್ವಚ್ಛಂದವಾಗಿ ಜೀವಿಸಲು 10 ಚದರ ಕಿಲೋ ಮೀಟರ್ ಪ್ರದೇಶ ಬೇಕು ಎಂದು ತಜ್ಞರು ಹೇಳುತ್ತಾರೆ. ಆದರೆ 900 ಚದರ ಕಿಲೋ ಮೀಟರ್ ಕಾಡಿನಲ್ಲಿ 2 ಪಟ್ಟು ಹುಲಿಗಳಿವೆ. ಇದು ಸಹ ಹುಲಿಗಳು ಕಾಡಿನಿಂದ ನಾಡಿನತ್ತ ಬರಲು ಕಾರಣವಾಗಿದೆ ಎಂದು ಉಲ್ಲೇಖಿಸಿದರು.

ವನ ಮತ್ತು ವನ್ಯಜೀವಿ ವಿಭಾಗದ ರಾಯಭಾರಿ ಅನಿಲ್ ಕುಂಬ್ಳೆ ಮಾತನಾಡಿ, ವನ್ಯಜೀವಿಗಳು ಕಾಡಿನಿಂದ ಹೊರಗೆ ಬರುವುದಕ್ಕೂ ಸಫಾರಿಗೂ ಸಂಬಂಧವಿಲ್ಲ. ಸಫಾರಿಗೆ ಕೇವಲ ಶೇ.8ರಷ್ಟು ಅರಣ್ಯ ಪ್ರದೇಶವೂ ಬಳಕೆ ಆಗುವುದಿಲ್ಲ. ಸ್ಥಳೀಯರ ಜೀವನೋಪಾಯವೂ ಇದರಲ್ಲಿ ಅಡಗಿದೆ. ಹೀಗಾಗಿ ಪುನರ್ ಪರಿಶೀಲಿಸಬೇಕು ಎಂದು ಸಲಹೆ ಮಾಡಿದರು.

ಶಾಸಕ ಗಣೇಶ್ ಪ್ರಸಾದ್ ಮಾತನಾಡಿ, ಸಫಾರಿ ಸ್ಥಗಿತಗೊಳಿಸಿರುವುದರಿಂದ ಸ್ಥಳೀಯರ ಜೀವನೋಪಾಯಕ್ಕೂ ತೊಂದರೆ ಆಗಿದೆ. ಪ್ರವಾಸೋದ್ಯಮಕ್ಕೂ ಪೆಟ್ಟು ಬಿದ್ದಿದೆ ಎಂದು ತಿಳಿಸಿದರು.

ಸಭೆಯಲ್ಲಿ ಸಚಿವ ಭೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಜ್, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮೀನಾಕ್ಷಿ ನೇಗಿ, ಮುಖ್ಯ ವನ್ಯಜೀವಿ ಪರಿಪಾಲಕ ಪಿ.ಸಿ.ರೇ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.  

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News