2 ಲಕ್ಷ ಸರಕಾರಿ ಹುದ್ದೆಗಳ ಭರ್ತಿಗೆ ನಮ್ಮ ಸರಕಾರ ಬದ್ಧ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಬೆಳಗಾವಿ(ಸುವರ್ಣವಿಧಾನಸೌಧ): ಸರಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸುಮಾರು 2 ಲಕ್ಷ ಸರಕಾರಿ ಹುದ್ದೆಗಳ ಭರ್ತಿಗೆ ನಮ್ಮ ಸರಕಾರ ಬದ್ಧವಾಗಿದೆ. ನಾವು ಇದಕ್ಕಾಗಿ ನಮ್ಮದೇ ಆದ ಸಮಯ ನಿಗದಿ ಮಾಡಿಕೊಂಡಿದ್ದೇವೆ. ಇದರ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಧಾನ ಪರಿಷತ್ತಿನ ಪರಿಷತ್ ವಿಪಕ್ಷ ನಾಯಕ ನಾರಾಯಣಸ್ವಾಮಿಗೆ ಪ್ರತಿಕ್ರಿಯೆ ನೀಡಿದರು.
ಗುರುವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಬಿಜೆಪಿ ಸದಸ್ಯ ಹನುಮಂತ ನಿರಾಣಿ ಅವರು ಖಾಲಿ ಹುದ್ದೆಗಳ ಭರ್ತಿಗೆ ಸರಕಾರ ಏನು ಕ್ರಮ ತೆಗೆದುಕೊಂಡಿದೆ ಎನ್ನುವ ಪ್ರಶ್ನೆಗೆ ಮುಖ್ಯಮಂತ್ರಿಯವರು ಉತ್ತರಿಸಿದ ನಂತರ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿ ಸ್ಪಷ್ಟನೆ ನೀಡಿದರು.
ಶಿಕ್ಷಣ ಇಲಾಖೆಯಲ್ಲಿ 50 ಸಾವಿರ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಒಳಮೀಸಲಾತಿ ವಿಚಾರ ಬಾಕಿ ಇರುವ ಕಾರಣಕ್ಕೆ ಒಂದಷ್ಟು ಭರ್ತಿ ಕೆಲಸ ಬಾಕಿಯಿದೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.