ಬೆಂಗಳೂರು : ʼಕಳೆದ ಮೂರೂವರೆ ವರ್ಷಗಳ ಕಾಂಗ್ರೆಸ್ ಆಡಳಿತವು ವಿಶ್ವಾಸದ್ರೋಹದ ಕಥೆಯಾಗಿದೆʼ ಎಂದು ಪ್ರಗತಿಪರ ಚಿಂತಕ ಶಿವಸುಂದರ್ ಟೀಕಿಸಿದರು.

2023ರ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್‌ ನೀಡಿದ್ದ ಭರವಸೆಗಳನ್ನು ಈಡೇರಿಸುವಂತೆ ಆಗ್ರಹಿಸಿ 'ಕರ್ನಾಟಕದ ಅಲ್ಪಸಂಖ್ಯಾತರು ಹಾಗೂ ಶೋಷಿತರ ಧ್ವನಿ' ವೇದಿಕೆಯ ನೇತೃತ್ವದಲ್ಲಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಗುರುವಾರ ಬೃಹತ್ ಸಾರ್ವಜನಿಕ ಸಮಾವೇಶ ನಡೆಯಿತು. ಮುಸ್ಲಿಂ, ಕ್ರೈಸ್ತ ಧರ್ಮಗುರುಗಳು, ದಲಿತ, ರೈತ ಹಾಗೂ ಕಾರ್ಮಿಕ ಸಂಘಟನೆಗಳ ಮುಖಂಡರು ಒಂದೇ ವೇದಿಕೆಯಲ್ಲಿ ಸೇರಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಸಮಾವೇಶದಲ್ಲಿ ಪ್ರಗತಿಪರ ಚಿಂತಕ ಶಿವಸುಂದರ್ ಮಾತನಾಡಿ, ಸ್ಥಳೀಯ ಸಂಸ್ಥೆಗಳು ಹಾಗೂ ಜಿಬಿಎ ಚುನಾವಣೆಗಳಿಗೆ ಎಸ್‌ಐಆರ್ ಪೂರ್ವ ಮತದಾರರ ಪಟ್ಟಿ ಬಳಸುವುದಾಗಿ ಭರವಸೆ ನೀಡಿದ್ದ ಸರಕಾರ, ಈಗ ಎಸ್‌ಐಆರ್ ಪಟ್ಟಿಯನ್ನೇ ಬಳಸಲು ಮುಂದಾಗಿದೆ. ಇದರಿಂದ ರಾಜ್ಯದ ಒಂದು ಕೋಟಿ ಹಾಗೂ ಬೆಂಗಳೂರಿನ 53 ಲಕ್ಷ ಮತದಾರರು ಹಕ್ಕುಗಳಿಂದ ವಂಚಿತರಾಗಲಿದ್ದು, ಇದರಲ್ಲಿ ಮುಸ್ಲಿಮರು, ಕ್ರೈಸ್ತರು, ದಲಿತರು, ಆದಿವಾಸಿಗಳು, ವಲಸೆ ಕಾರ್ಮಿಕರು ಮತ್ತು ತೃತೀಯಲಿಂಗಿಗಳು ಸೇರಿದ್ದಾರೆ ಎಂದರು.

ಜಾನುವಾರು ಹತ್ಯೆ ನಿಷೇಧ ಕಾಯ್ದೆಯಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕವೂ 1,950 ಪ್ರಕರಣಗಳು ದಾಖಲಾಗಿವೆ. ಅನುಪಯುಕ್ತ ರಾಸುಗಳನ್ನು ಮಾರಾಟ ಮಾಡಲು ಸಾಧ್ಯವಾಗದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆಕ್ಷೇಪಿಸಿದರು.

ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್ ಮಾತನಾಡಿ, ಕೊಟ್ಟ ಮಾತನ್ನು ಉಳಿಸಿಕೊಳ್ಳದವರನ್ನು ವಚನಭ್ರಷ್ಟರು ಎನ್ನಬೇಕಾಗುತ್ತದೆ ಎಂದರು. ಬುದ್ಧನ ಕಥೆಯನ್ನು ಉಲ್ಲೇಖಿಸಿದ ಅವರು, ದೊಣ್ಣೆಯಿಂದ ಹೊಡೆಯುವವರ ಮುಂದೆ ಹಾವು ಕನಿಷ್ಠ ಬುಸುಗುಟ್ಟದಿದ್ದರೆ ಉಳಿಗಾಲವಿಲ್ಲ ಎಂದರು. 1935ರಲ್ಲಿ ಅಂಬೇಡ್ಕರ್ ಅವರು ಹೇಳಿದಂತೆ ಮತಾಂತರ ಎಂಬುದು ಮನುಷ್ಯನ ಘನತೆ ಮತ್ತು ಆಯ್ಕೆಯ ಪ್ರಶ್ನೆ. ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಸುಮಾರು 800 ದಲಿತರ ಕೊಲೆಯಾಗಿದ್ದು, ಈ ಬಗ್ಗೆಯೂ ಧ್ವನಿ ಎತ್ತಬೇಕಿದೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor