ಬೆಂಗಳೂರು: ಕರ್ನಾಟಕದ ವಿವಿಧ ನಿಗಮ, ಮಂಡಳಿ ಹಾಗೂ ಇತರ ಸರಕಾರಿ ಸಂಸ್ಥೆಗಳಿಗೆ ಅಧ್ಯಕ್ಷರು ಮತ್ತು ಪ್ರಮುಖ ಹುದ್ದೆಗಳ ನೇಮಕಾತಿ ಪ್ರಸ್ತಾವನೆಗೆ ಕಾಂಗ್ರೆಸ್ ಹೈಕಮಾಂಡ್ ಅನುಮೋದನೆ ನೀಡಿದೆ.

‌ಈ ಕುರಿತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ನ. 20ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಅನುಮೋದನೆಗೊಂಡ 18 ಮಂದಿಯ ಹೆಸರು ಹಾಗೂ ಅವರಿಗೆ ವಹಿಸಲಿರುವ ಹೊಣೆಗಾರಿಕೆಗಳ ಪಟ್ಟಿಯನ್ನೂ ಪತ್ರದೊಂದಿಗೆ ಲಗತ್ತಿಸಲಾಗಿದೆ.

ಬಿ. ಶಿವಣ್ಣ ಅವರಿಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕೆ. ಷಡಕ್ಷರಿ ಅವರಿಗೆ ಕರ್ನಾಟಕ ರಾಜ್ಯ ಖನಿಜ ನಿಗಮ, ಪಿ.ಎಂ. ಅಶೋಕ್ ಅವರಿಗೆ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಎ.ಆರ್. ಕೃಷ್ಣಮೂರ್ತಿ ಅವರಿಗೆ ಬೆಂಗಳೂರು ಮಹಾನಗರ ಸಾರಿಗೆ ನಿಗಮ, ಹಂಪನಗೌಡ ಬಾದರ್ಲಿ ಅವರಿಗೆ ಕರ್ನಾಟಕ ರಾಜ್ಯ ಉಗ್ರಾಣ ನಿಗಮ, ಡಿ.ಜಿ. ಶಾಂತನಗೌಡ ಅವರಿಗೆ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಗಮ, ಜಿ.ಎಚ್. ಶ್ರೀನಿವಾಸ್ ಅವರಿಗೆ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ, ಮಹಾಂತೇಶ ಕೌಜಲಗಿ ಅವರಿಗೆ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ಹಾಗೂ ಎಸ್.ಎನ್. ಸುಬ್ಬಾರೆಡ್ಡಿ ಅವರಿಗೆ ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ನ ಅಧ್ಯಕ್ಷ ಸ್ಥಾನ ನೀಡಲಾಗಿದೆ.

ಬೇಳೂರು ಗೋಪಾಲಕೃಷ್ಣ ಅವರನ್ನು ಸರಕಾರಿ ಮುಖ್ಯ ಸಚೇತಕರನ್ನಾಗಿ, ತನ್ವೀರ್ ಸೇಠ್ ಅವರನ್ನು ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಿಸಲು ಅನುಮೋದನೆ ನೀಡಲಾಗಿದೆ. ಎನ್.ಎಚ್. ಕೋನರಡ್ಡಿ ಅವರಿಗೆ ಕರ್ನಾಟಕ ಕೃಷಿ ಬೆಲೆ ಆಯೋಗ, ಬಸನಗೌಡ ದದ್ದಲ್ ಅವರಿಗೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ, ಮಂಜುನಾಥ ಭಂಡಾರಿ ಅವರಿಗೆ ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಸ್ಥಾನ ಹಾಗೂ ಅಲ್ಲಂಪ್ರಭು ಪಾಟೀಲ್ ಅವರಿಗೆ ಕರ್ನಾಟಕ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ನೀಡಲು ನಿರ್ಧರಿಸಲಾಗಿದೆ.

ಶ್ಯಾಮ್ ನಟೇಕರ್ ಅವರಿಗೆ ಕರ್ನಾಟಕ ಸಾಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ, ಎಚ್.ಸಿ. ಲಲಿತ್ ರಾಘವ್ ಅವರಿಗೆ ಕರ್ನಾಟಕ ವಿದ್ಯುತ್ ಕಾರ್ಖಾನೆ ಲಿಮಿಟೆಡ್ ಹಾಗೂ ಸುಭಾಷ್ ರಾಥೋಡ್ ಅವರಿಗೆ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ನೀಡುವ ಪ್ರಸ್ತಾವನೆಗೆ ಅನುಮೋದನೆ ದೊರೆತಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor