ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಬಿಜೆಪಿ ವಿರುದ್ಧ ಕಾಂಗ್ರೆಸ್ ಶಾಸಕರು, ಸಚಿವರ ಪ್ರತಿಭಟನೆ

Update: 2026-08-21 15:49 IST

ಬೆಂಗಳೂರು : ಮುಂಗಾರು ಅಧಿವೇಶನ ಕಲಾಪಕ್ಕೆ ನಿರಂತರವಾಗಿ ಅಡ್ಡಿಪಡಿಸಿ ಬರ ಮತ್ತು ರಾಜ್ಯದ ಅಭಿವೃದ್ಧಿಯ ಬಗ್ಗೆ ಸದನದಲ್ಲಿ ಚರ್ಚಿಸಲು ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿ ಬಿಜೆಪಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರು, ಸಚಿವರು ವಿಧಾನಸೌಧದ ಆವರಣದ ಗಾಂಧಿ ಪ್ರತಿಮೆ ಮುಂದೆ ಇಂದು(ಶುಕ್ರವಾರ) ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಬಿ.ಕೆ.ಹರಿಪ್ರಸಾದ್ ಅವರು, ʼರಾಜ್ಯದ ಜನರ ಸಂಕಷ್ಟಕ್ಕಿಂತ ಬಿಜೆಪಿ ಶಾಸಕರಿಗೆ ಸದನದಲ್ಲಿ ರಾಜಕೀಯ ಗದ್ದಲವೇ ಪ್ರತಿಷ್ಟೆಯಾಗಿರುವುದು ನಾಚಿಕೆಗೇಡು. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬರದ ಬವಣೆ ಹೆಚ್ಚಾಗಿದೆ, ಜನ ಜಾನುವಾರಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಮಳೆ ಅವಾಂತರಗಳನ್ನೇ ಸೃಷ್ಟಿಮಾಡಿದೆ. ಜವಾಬ್ದಾರಿಯುತ ವಿರೋಧ ಪಕ್ಷಗಳು ಸದನದಲ್ಲಿ ಈ ಕುರಿತು ಚರ್ಚೆ ನಡೆಸುವ ಬದಲು, ಸದನವೇ ನಡೆಯದಂತೆ ಗದ್ದಲ ನಡೆಸಿ ಸಮಯ ವ್ಯರ್ಥ ಮಾಡುತ್ತಿದ್ದಾರೆʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯಕ್ಕೆ ಕೇಂದ್ರದಿಂದ ಬರಬೇಕಾದ ನ್ಯಾಯಯುತ ಪಾಲನ್ನು ಸದನದಲ್ಲಿ ಚರ್ಚೆ ನಡೆಸಬೇಕಾಗುತ್ತದೆ ಎಂಬ ಉದ್ದೇಶದಿಂದ ಬರ ಕುರಿತು ಚರ್ಚೆ ನಡೆಸದೆ ಬಿಜೆಪಿ ಶಾಸಕರು ಪಲಾಯನ ಮಾಡುತ್ತಿರುವುದು ಸ್ಪಷ್ಟವಾಗಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ರನ್ನು ರಕ್ಷಿಸಲು ನಡೆಯುತ್ತಿರುವ ನಾಟಕೀಯ ಬೆಳವಣಿಗೆಯನ್ನು ರಾಜ್ಯದ ಜನರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ರಾಜ್ಯದ ಜನರ ಸಮಸ್ಯೆಗಳನ್ನು ಚರ್ಚೆ ನಡೆಸಲು ಯೋಗ್ಯತೆ ಇಲ್ಲದ ವಿರೋಧ ಪಕ್ಷವನ್ನು ಜನರು ಕ್ಷಮಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಬಿಜೆಪಿಗೆ ಪ್ರಜಾತಾಂತ್ರಿಕ ವ್ಯವಸ್ಥೆಯ ಮೇಲೆ ಗೌರವವಿಲ್ಲ: ಸಚಿವ ಮಧು ಬಂಗಾರಪ್ಪ 

ರಾಜ್ಯದ ಅಭಿವೃದ್ಧಿ ವಿಚಾರಗಳ ಕುರಿತು ವಿಧಾನಮಂಡಲದಲ್ಲಿ ಚರ್ಚೆ ನಡೆಸಲು ಬಿಜೆಪಿಗೆ ಎಳ್ಳಷ್ಟೂ ಆಸಕ್ತಿ ಇಲ್ಲ. ಹೀಗಾಗಿ ಸದನದ ಕಲಾಪಕ್ಕೆ ನಿರಂತರವಾಗಿ ಅಡ್ಡಿಪಡಿಸುವ ಮೂಲಕ ಜನವಿರೋಧಿಯಾಗಿ ವರ್ತಿಸುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. “ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ಮಹತ್ವದ ವಿಚಾರಗಳ ಕುರಿತು ಸದನದಲ್ಲಿ ಸಮಗ್ರ ಚರ್ಚೆ ನಡೆಯಬೇಕು. ಆದರೆ, ಬಿಜೆಪಿ ಸದಸ್ಯರು ಉದ್ದೇಶಪೂರ್ವಕವಾಗಿ ಕಲಾಪಕ್ಕೆ ಅಡ್ಡಿಪಡಿಸುತ್ತಿದ್ದು, ಜನರ ಸಮಸ್ಯೆಗಳು ಹಾಗೂ ಅಭಿವೃದ್ಧಿಯ ವಿಚಾರಗಳು ಚರ್ಚೆಯಾಗದಂತೆ ಮಾಡುತ್ತಿದ್ದಾರೆ. ಬಿಜೆಪಿಯ ಈ ನಡೆಯಿಂದ ಆ ಪಕ್ಷಕ್ಕೆ ಪ್ರಜಾತಾಂತ್ರಿಕ ವ್ಯವಸ್ಥೆಯ ಮೇಲೆ ಗೌರವವಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಜನರ ಸಮಸ್ಯೆಗಳಿಗಿಂತ ಬಿಜೆಪಿಗೆ ತನ್ನ ಪ್ರತಿಷ್ಠೆಯೇ ಹೆಚ್ಚಾಗಿದೆ” ಎಂದು ಸಚಿವ ಮಧು ಬಂಗಾರಪ್ಪ ದೂರಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News