×
Ad

ಭ್ರಷ್ಟಾಚಾರ ಆರೋಪಗಳಲ್ಲಿ ಪ್ರಾಧಿಕಾರದ ಅನುಮತಿಯಿಲ್ಲದೆ ತನಿಖೆ ನಡೆಸುವಂತಿಲ್ಲ: ಹೈಕೋರ್ಟ್

Update: 2023-07-27 23:33 IST

ಬೆಂಗಳೂರು, ಜು.27: ಸರಕಾರಿ ನೌಕರರ ವಿರುದ್ಧ ದಾಖಲಾಗುವ ಭ್ರಷ್ಟಾಚಾರ ಆರೋಪದ ಖಾಸಗಿ ದೂರುಗಳ ಸಂಬಂಧ ಸಕ್ಷಮ ಪ್ರಾಧಿಕಾರದ ಅನುಮೋದನೆ ಇಲ್ಲದೆ ತನಿಖೆ ನಡೆಸುವಂತಿಲ್ಲ ಎಂದು ವಿಚಾರಣಾ ನ್ಯಾಯಾಲಯಗಳಿಗೆ ಹೈಕೋರ್ಟ್ ನಿರ್ದೇಶಿಸಿದೆ.

ಖಾಸಗಿ ದೂರು ಪರಿಗಣಿಸಿ ತನ್ನ ವಿರುದ್ಧ ತನಿಖೆಗೆ ಆದೇಶಿಸಿರುವ ಸೆಷನ್ಸ್ ನ್ಯಾಯಾಲಯದ ಆದೇಶದ ಕಾನೂನುಬದ್ಧತೆ ಪ್ರಶ್ನಿಸಿ ಚಿಕ್ಕಬಳ್ಳಾಪುರ ಜಿಲ್ಲೆಯ ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿಯಾಗಿದ್ದ ವಿ.ಆಶೋಕ್ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ ನಿರ್ದೇಶನ ನೀಡಿದೆ.

ಕೆಲವು ಸಂದರ್ಭಗಳನ್ನು ಹೊರತುಪಡಿಸಿ, ಭ್ರಷ್ಟಾಚಾರ ನಿಯಂತ್ರಣಾ ಕಾಯಿದೆ ಸೆಕ್ಷನ್ 17(ಎ) ಪ್ರಕಾರ ಸಕ್ಷಮ ಪ್ರಾಧಿಕಾರದ ಅನುಮತಿ ಇಲ್ಲದೇ ಸರಕಾರಿ ಅಧಿಕಾರಿಯ ವಿರುದ್ಧ ಪೊಲೀಸ್ ಅಧಿಕಾರಿಗಳು ವಿಚಾರಣೆ ಅಥವಾ ತನಿಖೆಯನ್ನು ನಡೆಸುವಂತಿಲ್ಲ ಎಂಬ ಷರತ್ತನ್ನು ಭ್ರಷ್ಟಾಚಾರ ನಿಯಂತ್ರಣಾ ಕಾಯಿದೆ ಸೆಕ್ಷನ್ 17(ಎ)ಕ್ಕೆ 2018ರಲ್ಲಿ ಸೇರಿಸಲಾಗಿದೆ.

ಪ್ರಕರಣವೇನು?:

ಚಿಂತಾಮಣಿ ಮೂಲದ ಮಾಹಿತಿ ಹಕ್ಕು ಕಾರ್ಯಕರ್ತರೊಬ್ಬರು ಚಿಕ್ಕಬಳ್ಳಾಪುರ ಜಿಲ್ಲೆಯ ಹಿಂದುಳಿದ ವರ್ಗಗಳ ಇಲಾಖೆ ಕುರಿತು ಮಾಹಿತಿ ಪಡೆದುಕೊಂಡಿದ್ದರು. ಈ ಅಂಶಗಳ ಆಧಾರದಲ್ಲಿ ಕೆಲವು ಅಧಿಕಾರಿಗಳ ಭ್ರಷ್ಟಾಚಾರ ಆರೋಪದಲ್ಲಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಕ್ಕೆ ದೂರು ನೀಡುವ ಬದಲು ಸೆಷನ್ಸ್ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ ಸೆಷನ್ಸ್ ನ್ಯಾಯಾಲಯ ಅರ್ಜಿದಾರರ ವಿರುದ್ಧ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಎಸಿಬಿಗೆ ಆದೇಶಿಸಿತ್ತು. ಈ ಆದೇಶವನ್ನು ರದ್ದುಪಡಿಸುವಂತೆ ಕೋರಿ ಅರ್ಜಿದಾರರು ಹೈಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News