ಸಚಿವ ಸಂಪುಟ ಪುನರ್ ರಚನೆ: ಕುತೂಹಲಕ್ಕೆ ಕಾರಣವಾದ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಭೇಟಿ
Photo credit:X/@siddaramaiah
ಬೆಂಗಳೂರು: ಸಂಪುಟ ಪುನರ್ ರಚನೆ ಹಾಗೂ ‘ಅಧಿಕಾರ ಹಂಚಿಕೆ’ ಕುರಿತು ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಚರ್ಚೆ ಆರಂಭವಾಗಿದೆ. ಈ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿರುವುದು ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ.
‘ನಾನೇ ಮುಖ್ಯಮಂತ್ರಿ’ ಎಂದು ಸಿದ್ದರಾಮಯ್ಯ ಪ್ರಕಟಿಸಿದ ಬೆನ್ನಲ್ಲೆ ‘ಅವರಿಗೆ ಒಳ್ಳೆಯದಾಗಲಿ’ ಎಂದು ಶುಭ ಕೋರಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮೀನುಗಾರಿಕೆ ಇಲಾಖೆ ವತಿಯಿಂದ ಆಯೋಜಿಸಿದ್ದ ‘ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ’ ಕಾರ್ಯಕ್ರಮದ ಒಂದೇ ವೇದಿಕೆಯಲ್ಲಿ ಅಕ್ಕ-ಪಕ್ಕ ಕೂತು ಚರ್ಚಿಸಿದ್ದು ವಿಶೇಷವಾಗಿತ್ತು.
‘ಸಂಪುಟ ಪುನರ್ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಸ್ಪಷ್ಟ ನಿರ್ಧಾರಕ್ಕೆ ಬರಲೇಬೇಕಾದ ಅನಿವಾರ್ಯತೆ ಸೃಷ್ಟಿಸಿದೆ. ಇದು ಪಕ್ಷ ಹಾಗೂ ಸರಕಾರದ ಭವಿಷ್ಯದ ದೃಷ್ಟಿಯಿಂದ ಅಗತ್ಯವಾಗಿದೆ. ಹೀಗಾಗಿ ಹೈಕಮಾಂಡ್ ಯಾವ ತೀರ್ಮಾನ ಪ್ರಕಟಿಸಲಿದೆ ಎಂಬುದನ್ನು ಕಾದುನೋಡಬೇಕಿದೆ. ಪಕ್ಷದ ಹೈಕಮಾಂಡ್ ನಾಜೂಕಾಗಿ ಎಲ್ಲವನ್ನು ನಿಭಾಯಿಸಬೇಕಾದ ಸ್ಥಿತಿಯಲ್ಲಿದೆ. ಹೀಗಾಗಿ ಎಲ್ಲವನ್ನು ಅಳೆದು-ತೂಗಿ ನಿರ್ಧಾರ ಪ್ರಕಟಿಸಲು ಕಾಲಾವಕಾಶ ತೆಗೆದುಕೊಳ್ಳುವ ಸಾಧ್ಯತೆಗಳಿವೆ.
ನಿನ್ನೆ ಸಂಜೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ.ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದರು.