ದಲಿತ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಬದಲಾವಣೆ ವಿಚಾರ ಅಪ್ರಸ್ತುತ: ಸಚಿವ ಕೆ.ಎಚ್. ಮುನಿಯಪ್ಪ
ಸಚಿವ ಕೆ.ಎಚ್.ಮುನಿಯಪ್ಪ
ಬೆಂಗಳೂರು: ದಲಿತ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಮಾಧ್ಯಮಗಳ ಸೃಷ್ಟಿ. ಈಗಾಗಲೇ ಹೈಕಮಾಂಡ್ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಅವರನ್ನು ಆಯ್ಕೆ ಮಾಡಿದ್ದು, ಅವರೇ ಮುಂದುವರೆಯುತ್ತಾರೆ. ಈ ಸಂದರ್ಭದಲ್ಲಿ ಈ ಎರಡು ವಿಚಾರಗಳು ಅಪ್ರಸ್ತುತ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.
ಶನಿವಾರ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಸಮುದಾಯಗಳಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮಾನತೆ ಕೊಡುವುದು ಕಾಂಗ್ರೆಸ್ ಪಕ್ಷದ ಬದ್ಧತೆಯಾಗಿದೆ ಎಂದು ಹೇಳಿದರು.
ಧರಂ ಸಿಂಗ್ ನಂತರ ಅತ್ಯಂತ ಹಿರಿಯರಾದ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಆಗಬೇಕು ಎಂದು ನಾನೇ ಹೇಳಿದ್ದೆ. 2013ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಾ.ಜಿ.ಪರಮೇಶ್ವರ್ ಚುನಾವಣೆಯಲ್ಲಿ ಸೋತರು. ಸಿದ್ದರಾಮಯ್ಯ ಮುಖ್ಯಮಂತ್ರಿ ಆದರು. ಆಗ ಪರಮೇಶ್ವರ್‍ಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವಂತೆ ನಾನೇ ಒತ್ತಾಯ ಮಾಡಿದ್ದೆ ಎಂದು ಮುನಿಯಪ್ಪ ತಿಳಿಸಿದರು.
ದಲಿತರಿಗೂ ಮುಖ್ಯಮಂತ್ರಿ ಸ್ಥಾನ ಸಿಗಬೇಕು. ಆದರೆ, ಆ ಸಮಯ ಇನ್ನೂ ಬಂದಿಲ್ಲ. ಈಗಾಗಲೇ ಮುಖ್ಯಮಂತ್ರಿ ಸ್ಥಾನದಲ್ಲಿ ಸಿದ್ದರಾಮಯ್ಯ ಇದ್ದಾರೆ. ನಮ್ಮ ಹೈಕಮಾಂಡ್ ಯಾವ ಸಮಯದಲ್ಲಿ ಏನು ನಿರ್ಧಾರ ಮಾಡಬೇಕೋ ಅದನ್ನು ಮಾಡುತ್ತದೆ. ಅದು ಕೆಪಿಸಿಸಿ ಅಧ್ಯಕ್ಷ ಸ್ಥಾನ ಇರಲಿ, ಮುಖ್ಯಮಂತ್ರಿ ಸ್ಥಾನ ಇರಲಿ ಎಂದು ಅವರು ಹೇಳಿದರು.
ನಿನ್ನೆ ನನ್ನ ಮನೆಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೋಳಿ ಉಪಹಾರಕ್ಕೆ ಭೇಟಿ ನೀಡಿದ್ದರು. ಅದರಲ್ಲಿ ವಿಶೇಷತೆ ಏನು ಇಲ್ಲ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಹಾಗೂ ಕೆಲವು ರಸ್ತೆಗಳಿಗೆ ಹಣ ಬಿಡುಗಡೆ ಮಾಡುವ ಕುರಿತು ನಾವು ಚರ್ಚೆ ನಡೆಸಿದ್ದೇವೆಯೇ ಹೊರತು, ಬೇರೆ ಯಾವುದೇ ರಾಜಕೀಯ ವಿಚಾರಗಳ ಬಗ್ಗೆ ಚರ್ಚೆ ನಡೆಸಿಲ್ಲ ಎಂದು ಮುನಿಯಪ್ಪ ಸ್ಪಷ್ಟಪಡಿಸಿದರು.
ಎ.28ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲಾ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆಯನ್ನು ನಡೆಸಿ, ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಿದ್ದೇನೆ ಎಂದು ಮುನಿಯಪ್ಪ ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕ ಶರತ್ ಕುಮಾರ್ ಬಚ್ಚೇಗೌಡ, ಮಾಜಿ ಶಾಸಕ ವೆಂಕಟರಮಣಯ್ಯ, ಜಿಲ್ಲಾಧಿಕಾರಿ ಬಸವರಾಜು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಅನುರಾಧಾ ಹಾಗೂ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜಣ್ಣ, ಬಯ್ಯಪ್ಪಾ ಸದಸ್ಯ ರಾಮಚಂದ್ರಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.